ಎಚ್.ಡಿ.ಕೋಟೆ: ನಾಡಪ್ರಭು ಕೆಂಪೇಗೌಡ ಜಯಂತಿಯನ್ನು ಆ.8ರಂದು ಪಟ್ಟಣದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಒಕ್ಕಲಿಗರ ಸಂಘದ ತಾಲೂಕು ಅಧ್ಯಕ್ಷ ಸುರೇಂದ್ರ ಡಿ.ಗೌಡ ತಿಳಿಸಿದರು.
ಅಂದು ಬೆಳಗ್ಗೆ 9ಕ್ಕೆ ಪಟ್ಟಣದ ಶ್ರೀ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆ ಆವರಣದಲ್ಲಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿದ ಬಳಿಕ ಕೆಂಪೇಗೌಡರ ಪುತ್ಥಳಿಯನ್ನು ಬೆಳ್ಳಿ ರಥದಲ್ಲಿರಿಸಿ ಮೆರವಣಿಗೆ ಮಾಡಲಾಗುವುದು. ಅಲಂಕೃತ ಚಿತ್ರಗಳು, ವೀರಗಾಸೆ ಕುಣಿತ, ಡೊಳ್ಳುಕುಣಿತ, ಮಂಗಳವಾದ್ಯ, ನಗಾರಿ, ತಮಟೆ, ಕಳಸ ಹೊತ್ತ ಮಹಿಳೆಯರು ಕಲಾ ಭವನದವರೆಗೆ ಸಾಥ್ ನೀಡಲಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ಮೈಸೂರು ಶಾಖ ಮಠದ ಸೋಮೇಶ್ವರನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ರೇಷ್ಮೆ ಸಚಿವ ಕೆ.ವೆಂಕಟೇಶ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಅನಿಲ್ ಚಿಕ್ಕಮಾದು ವಹಿಸಲಿದ್ದು, ಕೆಂಪೇಗೌಡರ ಭಾವಚಿತ್ರಕ್ಕೆ ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ಪುಷ್ಪಾರ್ಚನೆ ಮಾಡಲಿದ್ದಾರೆ.
ಸಂಸದ ವಿ.ಶ್ರೀನಿವಾಸಪ್ರಸಾದ್ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಿಸಲಿದ್ದು, ಮುಖ್ಯ ಅತಿಥಿಗಳಾಗಿ ಸಂಸದ ಪ್ರತಾಪ್‌ಸಿಂಹ, ಮಾಜಿ ಉಪಸಭಾಪತಿ ಮರಿತಿಬ್ಬೇಗೌಡ, ಶಾಸಕರಾದ ಜಿ.ಡಿ.ಹರೀಶ್‌ಗೌಡ, ಕೆ.ಹರೀಶ್‌ಗೌಡ, ಸಫಾಯಿ ಕರ್ಮಚಾರಿ ಆಯೋಗದ ಮಾಜಿ ಅಧ್ಯಕ್ಷ ಎಂ. ಶಿವಣ್ಣ, ವಿಧಾನ ಪರಿಷತ್ ಸದಸ್ಯರಾದ ಸಿ.ಎನ್.ಮಂಜೇಗೌಡ, ಮಧು ಜಿ.ಮಾದೇಗೌಡ ಆಗಮಿಸಲಿದ್ದಾರೆ ಎಂದು ತಿಳಿಸಿದರು.
ಸುರೇಂದ್ರ ಡಿ.ಗೌಡ