ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನಗರದ ೪೨ ನೇ ಎಸಿಎಂಎಂ ನ್ಯಾಯಾಲಯ ವಜಾಗೊಳಿಸಿದ್ದು, ಕಾನೂನು ಹೋರಾಟದಲ್ಲಿ ಪ್ರಜ್ವಲ್ಗೆ ಮತ್ತೆ ಹಿನ್ನಡೆಯಾಗಿದೆ.
ಮನೆಗೆಲಸದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಜ್ವಲ್ ಈ ಪ್ರಕರಣದಲ್ಲಿ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು. ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಬುಧವಾರ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿದರು. ಪ್ರಜ್ವಲ್ ವಿರುದ್ಧ ಒಟ್ಟಾರೆ ನಾಲ್ಕು ಪ್ರಕರಣ ದಾಖಲಾಗಿವೆ. ಈ ಪೈಕಿ ಮೊದಲ ಪ್ರಕರಣದಲ್ಲಿ ಪ್ರಜ್ವಲ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿದೆ. ಜಾಮೀನಿನ ನಿರೀಕ್ಷೆಯಲ್ಲಿದ್ದ ಪ್ರಜ್ವಲ್ಗೆ ನ್ಯಾಯಾಲಯದ ಆದೇಶದಿಂದ ನಿರಾಸೆಯಾಗಿದ್ದು, ಅವರು ಜಾಮೀನಿಗಾಗಿ ಹೈಕೋರ್ಟ್ನ ಮೊರೆ ಹೋಗಬೇಕಾಗಿದೆ.