ನ್ಯೂಸ್

ಪ್ರತಿಭೆ ಅನಾವರಣಕ್ಕೆ ಯುವಜನೋತ್ಸವ ಉತ್ತಮ ವೇದಿಕೆ

ಯುವಜನೋತ್ಸವ ಯುವಜನರ ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದೆ. ತಮ್ಮಲ್ಲಿರುವ ಪ್ರತಿಭೆ, ಕೌಶಲಗಳನ್ನು ಪ್ರದರ್ಶಿಸಲು ಯುವಕರು ಈ ವೇದಿಕೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ತನ್ವೀರ್ ಸೇಠ್ ಸಲಹೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೆಂದ್ರ, ರಾಷ್ಟ್ರೀಯ ಸೇವಾ ಯೋಜನೆ, ಮೈಸೂರು ವಿಶ್ವವಿದ್ಯಾಲಯ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ, ಯುವಕ ಸಂಘ ಮತ್ತು ಯುವತಿ ಮಂಡಳಿಗಳ ಸಹಯೋಗದಲ್ಲಿ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಬುಧವಾರ ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಯುವ ಜನೋತ್ಸವ ಕಾರ್ಯಕ್ರಮಗಳಲ್ಲಿ ಹಾಗೂ ಈ ರೀತಿಯ ಸ್ಪರ್ಧೆಗಳಲ್ಲಿ ಭಾಗವಹಿಸಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗಮನ ಸೆಳೆಯುವ ಸಾಧನೆಗಳನ್ನು ಮಾಡಿ ಜಿಲ್ಲೆ ಮತ್ತು ರಾಜ್ಯಕ್ಕೆ ಕೀರ್ತಿ ತರಬೇಕು ಎಂದು ತಿಳಿಸಿದರು.

ಯುವಜನೋತ್ಸವದ ಅಂಗವಾಗಿ ಕಲೆ, ಸಾಹಿತ್ಯ, ಸಂಗೀತ, ನೃತ್ಯ ಸೇರಿದಂತೆ ಇತರ ಜನಪದ ಕಲೆಗಳನ್ನು ಆಯೋಜಿಸಿ, ಪ್ರಜ್ಞಾವಂತ ಯುವ ಕಲಾ ಪ್ರತಿಭೆಗಳನ್ನು ಗುರುತಿಸುವ ಉದ್ದೇಶದಿಂದ ಅವರ ಪ್ರತಿಭೆಗಳನ್ನು ಗ್ರಾಮ ಮಟ್ಟದಿಂದ ರಾಜ್ಯ, ರಾಷ್ಟ್ರಮಟ್ಟದವರೆಗೆ ಅನಾವರಣಗೊಳಿಸುವುದೇ ಯುವಜನೋತ್ಸವದ ಮುಖ್ಯ ಉದ್ದೇಶವಾಗಿದೆ. ಯುವಕರು ಹೆಚ್ಚಾಗಿ ಇದರಲ್ಲಿ ಪಾಲ್ಗೊಂಡು ತಮ್ಮ ಪ್ರತಿಭೆ ತೋರಿಸಿ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆಯಬೇಕು ಎಂದರು.