ಬೆಟ್ಟದಪುರ: ಮಕ್ಕಳಲ್ಲಿ ಪ್ರಾಥಮಿಕ ಹಂತದಿಂದಲೇ ಕ್ರೀಡಾಸಕ್ತಿ ಬೆಳೆಸುವ ಮೂಲಕ ಚಟುವಟಿಕೆಗಳಲ್ಲಿ ಹೆಚ್ಚು ಪಾಲ್ಗೊಳ್ಳುವಂತೆ ಮಾಡಬೇಕು ಎಂದು ಕನ್ನಡ ಮಠದ ಶ್ರೀ ಚನ್ನಬಸವದೇಶಿಕೇಂದ್ರ ಸ್ವಾಮೀಜಿ ಸಲಹೆ ನೀಡಿದರು.
ಶಿಕ್ಷಣ ಇಲಾಖೆ, ಡಿಟಿಎಂಎನ್ ವಿದ್ಯಾಸಂಸ್ಥೆ ಸಹಯೋಗದಲ್ಲಿ ಗುರುವಾರ ಇಲ್ಲಿನ ಅಕ್ಕಮಹಾದೇವಿ ಕ್ರೀಡಾಂಗಣದಲ್ಲಿ ಆಯೋಜಿಸಿರುವ ವಲಯ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದವರು ಹೆಚ್ಚಾಗಿ ಗ್ರಾಮೀಣ ಮಕ್ಕಳಾಗಿದ್ದಾರೆ. ಇಂತಹವರಿಗೆ ಸೂಕ್ತ ತರಬೇತಿ ನೀಡಿದರೆ ಹೆಚ್ಚಿನ ಸಾಧನೆ ಮಾಡುತ್ತಾರೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜು ಮಾತನಾಡಿ, ಕಲಿಕೆಯೊಂದಿಗೆ ಮಕ್ಕಳು ಕ್ರೀಡೆಯಲ್ಲೂ ಭಾಗವಹಿಸಬೇಕು. ಕ್ರೀಡೆಯಲ್ಲಿ ಭಾಗವಹಿಸುವುದರಿಂದ ದೈಹಿಕ, ಮಾನಸಿಕವಾಗಿ ಸದೃಢರಾಗಲು ಸಾಧ್ಯ ಎಂದರು.
ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ರಘುಪತಿ, ಶಿಕ್ಷಣ ಸಂಯೋಜಕರಾದ ಸತೀಶ್, ಗಣೇಶ್, ಸ್ವಾಮಿ, ಡಿಟಿಎಂಎನ್ ವಿದ್ಯಾಸಂಸ್ಥೆಯ ಅಧ್ಯಕ್ಷ ಚಂದ್ರಶೇಖರ್, ಆಡಳಿತಾಧಿಕಾರಿ ಜೆ.ಸಿ.ನಟರಾಜ್, ನಿರ್ದೇಶಕರಾದ ಪಿ.ರವಿ, ಗುರುದತ್ ಇತರರಿದ್ದರು.