ನ್ಯೂಸ್

ಬಜೆಟ್ ಪೂರ್ವಭಾವಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಹಕ್ಕೋತ್ತಾಯ ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು:

ಜಾತಿ ಗಣತಿ ವರದಿ ಜಾರಿಗೊಳಿಸಬೇಕು ಎನ್ನುವ ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳ ಒಕ್ಕೊರಲ ಆಗ್ರಹಕ್ಕೆ ಮಣಿದ ಸಿಎಂ ಸಿದ್ದರಾಮಯ್ಯ ಅವರು, ನಮ್ಮ ಸರ್ಕಾರ ಖಂಡಿತವಾಗಿಯೂ ವರದಿಯನ್ನು ಜಾರಿಗೊಳಿಸುತ್ತದೆ ಎಂದು ಅಭಯ ನೀಡಿದ್ದಾರೆ.

ವಿಧಾನಸೌಧದಲ್ಲಿ ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮಾತನಾಡುವ ಸಂದರ್ಭದಲ್ಲಿ ಮೊದಲು ವರದಿಯನ್ನು ಜಾರಿಗೆ ನೀಡಬೇಕು ಎಂದು ಆಗ್ರಹಪೂರ್ವಕ ಮನವಿ ಸಲ್ಲಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ಜಾರಿ ಮಾಡಲಾಗುವುದು. ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಸ್ಪಷ್ಟಪಡಿಸಿದರು.

ಸರ್ಕಾರ ಜಾತಿ ಗಣತಿ ಪರವಾಗಿದ್ದು, ಜಾತಿ ಗಣತಿ ವರದಿಯನ್ನು ಸ್ವೀಕರಿಸಿದೆ. ಮುಂದಿನ ದಿನಗಳಲ್ಲಿ ಅದನ್ನು ಖಂಡಿತವಾಗಿಯೂ ಜಾರಿ ಮಾಡಲಾಗುತ್ತದೆ ಅದರ ಬಗ್ಗೆ ಅನುಮಾನ ಬೇಡ ಎಂದರು.

ತಮಿಳು ನಾಡು ಮಾದರಿಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸಭೆ ಆಗ್ರಹಿಸಿದಾಗ 1992 ರ ಇಂದಿರಾ ಸಹಾನಿ ಕೇಸನ್ನು ಉಲ್ಲೇಖಿಸಿ ಮೀಸಲಾತಿ ಶೇ.50ರಷ್ಟು ಮೀರಬಾರದು ಎನ್ನುವ ಅಂಶವನ್ನು ಸಭೆಗೆ ತಿಳಿಸಿದ ಸಿಎಂ, ಕಳೆದ ಸರ್ಕಾರದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಎಂದು ( ಉಖ) ಮೀಸಲಾತಿ ಕಲ್ಪಿಸಿದ್ದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ ಎಂದರು.

ಸಂವಿಧಾನದ ಆರ್ಟಿಕಲ್ ( 15)(16)ರ ಪ್ರಕಾರ ಮೀಸಲಾತಿ ನೀಡಬೇಕಾಗಿರುವುದು ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮಾತ್ರ ನೀಡಬೇಕು ಎಂದಿದೆ .

ಜಾತಿ ಗಣತಿಯ ವರದಿ ವೈಜ್ಞಾನಿಕವಾಗಿ ತಯಾರಾಗಿದ್ದು ಸಮಾಜದ ಎಲ್ಲಾ ವರ್ಗಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ತಿಳಿಯಲು ಅನುಕೂಲವಾಗಿದೆ. ಆ ಪ್ರಕಾರ ಸರ್ಕಾರದ ಕಾರ್ಯಕ್ರಮ ರೂಪಿಸಲು ಸಹಕಾರಿಯಾಗುತ್ತದೆ ಎಂದರು.

ಇಷ್ಟು ವರ್ಷಗಳಾದರೂ ಸಮಾನತೆ ಯಾಕೆ ಬಂದಿರುವುದಿಲ್ಲ ಎಂಬುದು ಮುಖ್ಯ. ಕೆಲವರು ತಪ್ಪು ಗ್ರಹಿಕೆಯಿಂದ ಅದನ್ನು ವಿರೋಧಿಸುತ್ತಿದ್ದಾರೆ ಎಂದು ವಿವರಣೆ ನೀಡಿದ ಅವರು, ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ಮಹಿಳೆಯರು ಎಲ್ಲರನ್ನೂ ಮುಖ್ಯ ವಾಹಿನಿಗೆ ತರುವುದು ಸರ್ಕಾರದ ಉದ್ದೇಶ ಎಂದರು.

ಅಸಮಾನತೆ ಹೋಗಬೇಕು ಜಾತಿ ವ್ಯವಸ್ಥೆಯಿಂದ ನಿರ್ಮಾಣವಾಗಿರುವ ಅಸಮಾನತೆಯಿಂದ ಬಹು ಸಂಖ್ಯಾತ ಜನ ಅವಕಾಶ ವಂಚಿತರಾಗಿದ್ದಾರೆ. ಎಲ್ಲರಿಗೂ ಸಮಾನ ಅವಕಾಶ ನೀಡಬೇಕಿದೆ ತಳ ಸಮುದಾಯವಿರಲಿ, ಮೇಲ್ವರ್ಗವಿರಲಿ ಎಲ್ಲರಿಗೂ ಸಮಾನತೆ ಇರಬೇಕು ಎಂಬ ಅಂಶವನ್ನು ಅಂಬೇಡ್ಕರ್ ಹೇಳಿದ್ದಾರೆ ಎಂದರು.

ಹಿಂದುಳಿದ ಜಾತಿಗಳಲ್ಲೂ ತಾರತಮ್ಯ ಅಸಮಾನತೆ ಇದೆ ಇದನ್ನು ಒಂದೇ ಬಾರಿಗೆ ಹೋಗಲಾಡಿಸಲು ಸಾಧ್ಯವಿಲ್ಲ ಎಂದರು.

ಅಲೆಮಾರಿ ಜನಾಂಗಕ್ಕೆ ವಿಶೇಷ ಸ್ಥಾನಮಾನ ನೀಡುವ ಬಗ್ಗೆ ಪ್ರತಿಕ್ರಿಯಿಸಿ ಅಲೆಮಾರಿ ಆಯೋಗ ರಚನೆಗೆ ಉಂಟಾಗಿರುವ ಸಮಸ್ಯೆಗಳಿಂದಾಗಿ ಆಯೋಗ ರಚನೆ ಸಾಧ್ಯವಾಗಿರುವುದಿಲ್ಲ ಎಂದರು.

ಅಲೆಮಾರಿ ಜನಾಂಗಕ್ಕೆ ಉಚಿತ ಶಿಕ್ಷಣ ಹಕ್ಕು ಒತ್ತಾಯಕ್ಕೆ ಪ್ರತಿಕ್ರಿಯಿಸಿ ಸರ್ಕಾರ ಶಿಕ್ಷಣದ ಹಕ್ಕನ್ನು ನೀಡಿದೆ (್ಕಉ) ಅದರ ಪ್ರಕಾರ ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿಯೂ ಅವಕಾಶ ಸಿಗಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಈ ಬಾರಿಯ ಬಜೆಟ್‌ನಲ್ಲಿ ಅಲೆಮಾರಿ ಜನಾಂಗಕ್ಕೆ ವಿಶೇಷ ಗಮನ ಹರಿಸುವುದಾಗಿ ತಿಳಿಸಿದರು.

ಅತಿ ಹಿಂದುಳಿದ ವರ್ಗದವರಿಗೂ ಕಾರ್ಯಕ್ರಮಗಳನ್ನು ಈ ಬಾರಿಯ ಆಯವ್ಯಯದಲ್ಲಿ ಅನುಷ್ಠಾನಗೊಳಿಸಲು ಪ್ರಯತ್ನಿಸುವುದಾಗಿ ಹೇಳಿದರು. ಜೊತೆಗೆ ಹಣಕಾಸಿನ ಲಭ್ಯತೆಗೆ ಅನುಗುಣವಾಗಿ ಹಿಂದುಳಿದ ವರ್ಗಗಳಿಗೆ ಕಾರ್ಯಕ್ರಮಗಳನ್ನು ರೂಪಿಸುವುದಾಗಿ ಭರವಸೆ ನೀಡಿದರು.

ಇನ್ನುಳಿದ ಹಕ್ಕೋತ್ತಾಯಗಳು:

-ಶ್ರೀ ನಾರಾಯಣಗುರು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಇತರೆ ಅತೀ ಹಿಂದುಳಿದಿರುವ ವರ್ಗಗಳ ನಿಗಮಗಳಿಗೆ ಚಾಲನೆ ನೀಡುವುದು.

-ಹಿಂದುಳಿದ ಮತ್ತು ಅನುದಾನವನ್ನು ನಿಗದಿಪಡಿಸುವುದು. ಹಿಂದುಳಿದ ವರ್ಗಗಳ ಮಂಡಳಿಗಳಿಗೆ ಹೆಚ್ಚಿನ ಅನುದಾನ ನಿಗಧಿಪಡಿಸುವುದು.

- ಹಿಂದುಳಿದ ವರ್ಗಗಳ ಜನ ಸಂಖ್ಯೆಗೆ ಅನುಗುಣವಾಗಿ ಕ್ಷೇತ್ರಗಳನ್ನು ನೀಡುವುದು.

- ಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆ ಮೀಸಲು ನಿಗದಿಪಡಿಸುವುದು.

-ವಿಶ್ವವಿದ್ಯಾಲಯಗಳಲ್ಲಿ ಶ್ರೀ ನಾರಾಯಣಗುರು ಅಧ್ಯಯನ ಪೀಠ ಸ್ಥಾಪನೆಗೆ ಕ್ರಮ ವಹಿಸಬೇಕು. -ನಾರಾಯಣಗುರು ಹಾಲಿ ಇರುವ 3 ಸಂಖ್ಯೆಯ ವಸತಿ ಶಾಲೆಗಳನ್ನು ಹೆಚ್ಚಿಸುವುದು.

-ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ನಿರ್ಮಾಣಗೊಳ್ಳುತ್ತಿರುವ ಹಿಂದುಳಿದ ಮತ್ತು ಅತೀ ಹಿಂದುಳಿದ ವರ್ಗಗಳ ಸಮುದಾಯ ಭವನ ನಿರ್ಮಾಣಕ್ಕೆ ಹೆಚ್ಚಿನ ಅನುದಾನವನ್ನು ನಿಗದಿಪಡಿಸುವುದು.

-ಹಿಂದುಳಿದ ವರ್ಗಗಳ ಕಾರ್ಯಕರ್ತರಿಗೆ ನಿಗಮ/ಮಂಡಳಿ ನಾಮನಿರ್ದೇಶನದಲ್ಲಿ ಸಾಮಾಜಿಕ ನ್ಯಾಯದ ದೃಷ್ಟಿಯಲ್ಲಿ ಹೆಚ್ಚಿನ ಆದ್ಯತೆ ನೀಡುವುದು.