ನ್ಯೂಸ್

ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ

ರಾಜ್ಯದೆಲ್ಲೆಡೆ ಬಾಣಂತಿಯರ ಸರಣಿ ಸಾವು ಸಂಭವಿಸಿದರೂ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸಿ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಬುಧವಾರ ಪ್ರತಿಭಟನೆ ನಡೆಯಿತು.

ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗ ಜಮಾವಣೆಗೊಂಡ ಪ್ರತಿಭಟನಾಕಾರರು, ಕಾಂಗ್ರೆಸ್ ಸರ್ಕಾರದ ವಿರುದ್ಧ ನಾನಾ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರಿ ಆಸ್ಪತ್ರೆಗಳಲ್ಲಿ ಮೃತಪಟ್ಟ ಬಾಣಂತಿಯರಿಗೆ 25 ಲಕ್ಷ ರೂ.ಪರಿಹಾರ ನೀಡಬೇಕು, ಮೃತಪಟ್ಟ ಬಾಣಂತಿಯರ ಅನಾಥ ಮಕ್ಕಳ ಭವಿಷ್ಯ ರೂಪಿಸಲು ಸರ್ಕಾರ ಆ ಮಕ್ಕಳನ್ನು ದತ್ತು ತೆಗೆದುಕೊಳ್ಳಬೇಕು, ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ವ್ಯಾಪಕ ಸಾವು ತಡೆಯಲು ವಿಫಲರಾಗಿರುವ ಇಲಾಖೆಯ ಸಚಿವ ದಿನೇಶ್ ಗುಂಡೂರಾವ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರಾಜೀನಾಮೆ ನೀಡಬೇಕು, ಬಾಣಂತಿಯರ ಸಾವಿಗೆ ನೈಜ ಕಾರಣ ತಿಳಿದು ಅದನ್ನು ನಿಯಂತ್ರಿಸಲು ಉಚ್ಚ ನ್ಯಾಯಾಲಯದ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು, ಸರ್ಕಾರ ಬಳಸುತ್ತಿರುವ ಕಳಪೆ ಗುಣಮಟ್ಟದ ಔಷಧಗಳಿಂದ ಸಾವು ಸಂಭವಿಸುತ್ತಿದೆ ಎಂಬ ವರದಿಯಿದ್ದು, ಇಲಾಖೆಯಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರ ನಿಲ್ಲಿಸಿ ಗುಣಮಟ್ಟದ ಔಷಧ ಒದಗಿಸಬೇಕು. ಗರ್ಭಿಣಿಯರ ಆರೈಕೆಗಾಗಿ ಕೇಂದ್ರ ಸರ್ಕಾರ ನೀಡುತ್ತಿರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು, ಯೋಜನೆಗಳು ತಲುಪಿಸುವಲ್ಲಿ ವಿಫಲವಾಗಿರುವ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು, ರಾಜ್ಯದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯವಸ್ಥೆ ಸರ್ಕಾರದ ಹೊಣೆಗೇಡಿತನದಿಂದ ಸಂಪೂರ್ಣ ಹದಗೆಟ್ಟಿದೆ. ಕೂಡಲೇ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಬೇಕು ಎಂದು ಒತ್ತಾಯಿಸಿದರು.

ಇದೇ ವೇಳೆ ರಾಜ್ಯ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಪ್ರಫುಪ್ಪಾ ಮಲ್ಲಾಡಿ ಮಾತನಾಡಿ, ಬಾಣಂತಿಯರು ಸರ್ಕಾರಿ ಆಸ್ಪತ್ರೆಗೆ ಹೋದರೆ ಬದುಕಿ ಬರುತ್ತೇವೆ ಎನ್ನುವ ಗ್ಯಾರಂಟಿಯೇ ಇಲ್ಲದಂತಾಗಿದೆ. ಬಾಣಂತಿಯರು ಸತ್ತರೆ ಮಕ್ಕಳು ತಬ್ಬಲಿಯಾಗುತ್ತಿದ್ದಾರೆ. ರಾಜ್ಯದಲ್ಲಿ ಮೆಡಿಕಲ್ ಮಾಫಿಯಾ ನಡೆಯುತ್ತಿದ್ದು, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಮ್ಮ ಖಾತೆ ನಿಭಾಯಿಸುವಲ್ಲಿ ವಿಫಲವಾಗಿದ್ದಾರೆ. ಬಾಣಂತಿಯರ ಮಾರಣಹೋಮ ನಡೆಯುತ್ತಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಮಹಿಳಾ ಮತ್ತು ಮಕ್ಕಳ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೆಣ್ಣು ಮಗಳಾಗಿ ಸೌಜನ್ಯಕ್ಕಾದರೂ ಆ ಕುಟುಂಬಗಳಿಗೆ ಸಾಂತ್ವನ ಹೇಳಿಲ್ಲ. ಹೀಗಾಗಿ ಕೂಡಲೇ ದಿನೇಶ್ ಗುಂಡೂರಾವ್ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ರಾಜೀನಾಮೆ ಕೊಡಬೇಕು. ತಬ್ಬಲಿಯಾಗಿರುವ ಮಕ್ಕಳ ಜವಾಬ್ದಾರಿಯನ್ನು ಸರ್ಕಾರ ತೆಗೆದುಕೊಳ್ಳಬೇಕು. ಮರಣ ಹೊಂದಿದ ಪ್ರತಿ ಕುಟುಂಬಕ್ಕೆ 25 ಲಕ್ಷ ರೂ.ಪರಿಹಾರ ನೀಡಬೇಕು ಮತ್ತು ಶಿಕ್ಷಣದ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ, ಮಾಜಿ ಮೇಯರ್ ಶಿವಕುಮಾರ್, ಬಿಜೆಪಿ ಗ್ರಾಮಾಂತರ ಮಹಿಳಾ ಮೋರ್ಚಾ ಅಧ್ಯಕ್ಷೆ ನಳಿನಿಗೌಡ, ನಗರಾಧ್ಯಕ್ಷೆ ರೇಣುಕಾರಾಜ್, ಗ್ರಾಮಾಂತರ ಮಾಜಿ ಅಧ್ಯಕ್ಷೆ ಮಂಗಳಾ ಸೋಮಶೇಖರ್, ಮುಖಂಡರಾದ ಗಿರಿಧರ್, ಮಹೇಶ್ ರಾಜೇ ಅರಸ್ ಇತರರಿದ್ದರು.