ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ 
ನ್ಯೂಸ್

ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ಸಾಕಷ್ಟು ಬದಲಾವಣೆ

ಬಿಹಾರ ಚುನಾವಣೆ ಬಳಿಕ ರಾಜ್ಯದಲ್ಲಿ ಸಾಕಷ್ಟು ಬದಲಾವಣೆ ಆಗಲಿದ್ದು, ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಭವಿಷ್ಯ ನುಡಿದರು.

ಭಾನುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರೇ ನವೆಂಬರ್‌ನಲ್ಲಿ ಕ್ರಾಂತಿ ಆಗುತ್ತದೆ ಎಂದು ಹೇಳುತ್ತಿದ್ದಾರೆ. ನವೆಂಬರ್ ಕ್ರಾಂತಿಗೂ ಜಾತಿಗಣತಿ ಕ್ರಾಂತಿಗೂ ಸಂಬಂಧ ಇರುವಂತೆ ಚರ್ಚೆ ನಡೆಯುತ್ತಿದೆ. ನಾಯಕತ್ವ ಬದಲಾವಣೆಯ ಬಗ್ಗೆ ಮತನಾಡಬೇಡಿ, ಅದನ್ನು ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಎಂದು ವೇಣುಗೋಪಾಲ್ ಹೇಳುತ್ತಾರೆ. ಆದರೆ, ಹೈಕಮಾಂಡ್ ಎಲ್ಲೂ ನಾಯಕತ್ವ ಬದಲಾವಣೆ ಇಲ್ಲ ಎಂದು ಹೇಳುತ್ತಿಲ್ಲ. ಬದಲಾವಣೆ ಸೂಕ್ಷ್ಮ ಅರಿತಿರುವ ಸಿದ್ದರಾಮಯ್ಯ ಮೈಸೂರಿನಲ್ಲಿ ಅವರ ಶಕ್ತಿ ಪ್ರದರ್ಶನ ನಡೆಸಿದ್ದರು. ರ‌್ಯಾಂಪ್ ವಾಕ್ ಸಹ ಮಾಡಿದ್ದರು. ಆಗ ಮಲ್ಲಿಕಾರ್ಜುನ ಖರ್ಗೆ, ಡಿ.ಕೆ.ಶಿವಕುಮಾರ್ ಇಬ್ಬರೂ ಅಡ್ರೆಸ್‌ಗೇ ಇರಲಿಲ್ಲ ಎಂದ ಅವರು, ಬಿಹಾರ ಚುನಾವಣೆ ಬಳಿಕ ಮಹತ್ವದ ಬದಲಾವಣೆಯಾಗಲಿದೆ ಎಂದರು.

ಜಾತಿಗಣತಿಯ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿ, ದೇಶಾದ್ಯಂತ ಜಾತಿಗಣತಿ ಮಾಡುತ್ತೇವೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಣೆ ಮಾಡಿದ ಬಳಿಕವೂ ರಾಜ್ಯದಲ್ಲಿ ಈ ರೀತಿ ಗೊಂದಲ ಸೃಷ್ಟಿ ಮಾಡುವ ಅವಶ್ಯಕತೆ ಇರಲಿಲ್ಲ. ರಾಜ್ಯ ಸರ್ಕಾರ ಯಾವುದೇ ರೀತಿಯ ಪೂರ್ವ ತಯಾರಿ ಇಲ್ಲದೇ ಆತುರದ ನಿರ್ಧಾರ ತೆಗೆದುಕೊಂಡಿದೆ ಎಂಬುದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೋಡಿದರೆ ಗೊತ್ತಾಗುತ್ತದೆ. ಈ ಸಮೀಕ್ಷೆಯಿಂದ ಗೊಂದಲಗಳೇ ಹೆಚ್ಚಾಗಿವೆ. 60 ಪ್ರಶ್ನೆಗಳನ್ನು ಜನರ ಮುಂದಿಟ್ಟಿದ್ದಾರೆ. ವಿಶೇಷ ಚೇತನರನ್ನು ಸೇರಿಸಿಕೊಂಡಿರುವುದಕ್ಕೆ ಟೀಕೆಗಳು ವ್ಯಕ್ತವಾಗುತ್ತಿವೆ. ಸಿದ್ದರಾಮಯ್ಯನವರಿಗೆ ಇಷ್ಟೊಂದು ಆತುರ ಯಾಕೆ? ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಸಿಗಬೇಕು ಎಂಬುದೇ ನಮ್ಮ ಪಕ್ಷದ ನಿಲುವಾಗಿದ್ದು, ಯಾರಿಗೂ ಅನ್ಯಾಯವಾಗಬಾರದು ಎಂದರು.