ನ್ಯೂಸ್

ಬೆಂ.ವಿವಿ ಪರೀಕ್ಷೆಗಳು ಮುಂದೂಡಿಕೆ


ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ ರೈತ ವಿರೋಧಿ ಮಸೂದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸೆ.25ರಂದು ಅಖಿಲ ಭಾರತ ಕಿಸಾನ್ ಸಂಘರ್ಷ ಸಮಿತಿ ಭಾರತ್ ಬಂದ್‌ಗೆ ಕರೆ ನೀಡಿದೆ. ಅದೇ ರೀತಿ ರಾಜ್ಯದ ವಿವಿಧ ರೈತ ಸಂಘಟನೆಗಳು ಸೆ.28ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಈ ಎರಡೂ ದಿನಗಳಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಸೆ.25ರ ಶುಕ್ರವಾರ ಹಾಗೂ ಸೆ.28ರ ಸೋಮವಾರದಂದು ನಡೆಯಬೇಕಿದ್ದ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಎರಡೂ ದಿನದ ಪರೀಕ್ಷೆಗಳನ್ನು ನಡೆಸುವ ದಿನಾಂಕವನ್ನು ಸೆ.28ರಂದು ಪ್ರಕಟಿಸಲಾಗುವುದು. ಆದರೆ, ಸೆ.26ರಂದು ನಡೆಯಲಿರುವ ಪರೀಕ್ಷೆಗಳು ಎಂದಿನಂತೆ ನಡೆಯಲಿವೆ ಎಂದು ಬೆಂ. ವಿವಿ ಕುಲಪತಿ ಪ್ರೊ. ಕೆ.ಆರ್. ವೇಣುಗೋಪಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.