ನ್ಯೂಸ್

ಬ್ರಿಜ್ ಭೂಷಣ್ ಶರತ್ ಸಿಂಗ್ ವಿರುದ್ಧ ಕ್ರಮಕ್ಕೆ ಆಗ್ರಹ

ಪಾಂಡವಪುರ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಹಾಗೂ ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರತ್ ಸಿಂಗ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರೈತಸಂಘ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ಸಂಚಾರ ತಡೆದು ಸೋಮವಾರ ಪ್ರತಿಭಟನೆ ನಡೆಸಿದರು.
ಪಟ್ಟಣದ ಐದು ದೀಪ ವೃತ್ತದ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು 10 ನಿಮಿಷಗಳ ಹೆದ್ದಾರಿ ಸಂಚಾರ ತಡೆದು ಕೇಂದ್ರ ಸರ್ಕಾರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಶರತ್ ಸಿಂಗ್ ಅವರನ್ನು ಕುಸ್ತಿ ಫೆಡರೇಷನ್ ಅಧ್ಯಕ್ಷಗಾದಿಯಿಂದ ಕೆಳಗಿಳಿಸಬೇಕು, ಸಂಸದರ ಸ್ಥಾನದಿಂದ ವಜಾಗೊಳಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ರೈತಸಂಘ ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ಮಾತನಾಡಿ, ಮಹಿಳಾ ಕುಸ್ತಿ ಪಟುಗಳಾ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಸಂಸದರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಲವತ್ತು ದಿನಗಳಿಂದ ಕ್ರೀಡಾಪಟುಗಳು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಕೇಂದ್ರ ಸರ್ಕಾರ ಪ್ರತಿಭಟನೆಗೆ ಮಣಿದಿಲ್ಲ. ಆರೋಪಿ ಸಂಸದನ ವಿರುದ್ಧ ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಪಕ್ರರಣ ದಾಖಲಿಸಲಾಗಿದೆ. ಪ್ರಧಾನಿಯವರು ಎಂದೂ ಸಮಸ್ಯೆಗಳನ್ನು ನೇರವಾಗಿ ಎದುರಿಸುವ ಕೆಲಸ ಮಾಡಿಲ್ಲ. ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದರೆ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ವಿಚಾರ. ತಮಗೆ ತಾವೇ ವಿಶ್ವ ನಾಯಕ ಎಂದು ಕರೆದುಕೊಳ್ಳುವ ಮೋದಿ ಅವರು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ. ಪ್ರಕರಣದ ಆರೋಪಿಗಳಾಗಿರುವ ಸಂಸದರನ್ನು ಪಕ್ಷದಿಂದ ಉಚ್ಚಾಟನೆ ಮಾಡುವ ಮೂಲಕ ದಿಟ್ಟ ಕ್ರಮ ತೆಗೆದುಕೊಳ್ಳಬೇಕಾಗಿದೆ ಎಂದು ಒತ್ತಾಯಿಸಿದರು.