ನ್ಯೂಸ್

ಮ.ಬೆಟ್ಟ ಅಭಿವೃದ್ಧಿ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

ಹನೂರು: ಮಹದೇಶ್ವರ ಬೆಟ್ಟದಲ್ಲಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸುವುದರ ಮೂಲಕ ಭಕ್ತರ ಸೇವೆಗೆ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಸೂಚಿಸಿದರು.
ಮ.ಬೆಟ್ಟದಲ್ಲಿ ಪ್ರಗತಿಯಲ್ಲಿರುವ ವಿವಿಧ ಅಭಿವೃದ್ಧಿ ಕಾಮಗಾರಿ ಸ್ಥಳಕ್ಕೆ ಶುಕ್ರವಾರ ತೆರಳಿ ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದರು.
ಮುಂದಿನ ತಿಂಗಳಲ್ಲಿ ಮುಖ್ಯಮಂತ್ರಿಗಳು ಮ.ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಹಾಗಾಗಿ ಅಧಿಕಾರಿಗಳು ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಬೆಕು. ಜತೆಗೆ ಪ್ರಗತಿಯಲ್ಲಿರುವ 108 ಅಡಿ ಎತ್ತರದ ಶ್ರೀ ಮಹದೇಶ್ವರರ ಪ್ರತಿಮೆ ನಿರ್ಮಾಣ ಕಾಮಗಾರಿ, 512 ವಸತಿ ಗೃಹದ ಕಟ್ಟಡ, ಕಲ್ಯಾಣಿ, ಯುಜಿಸಿ ಕಾಮಗಾರಿ ಸೇರಿದಂತೆ ಇನ್ನಿತರ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಗತ್ಯ ಕ್ರಮವಹಿಸಬೇಕು. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಆರಂಭವಾಗದ ಕಾಮಗಾರಿಗಳ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಿ ಕಾಮಗಾರಿಯನ್ನು ಪ್ರಾರಂಭಿಸಬೇಕು. ಜತೆಗೆ ಆಗಮಿಸುವ ಭಕ್ತರಿಗೆ ಮೂಲಸೌಕರ್ಯಕ್ಕೆ ಸಂಬಂಧಿಸಿದಂತೆ ಯಾವುದೇ ರೀತಿಯಲ್ಲೂ ತೊಂದರೆಯಾಗಬಾರದು ಎಂದು ಸೂಚಿಸಿದರು.
ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎಸ್.ಕಾತ್ಯಾಯಿನಿ ದೇವಿ, ತಹಸೀಲ್ದಾರ್ ಆನಂದಯ್ಯ, ಪಿಡಬ್ಲುೃಡಿ ಎಇಇ ಸದಾಶಿವಮೂರ್ತಿ, ಎಇ ಮಹದೇವಸ್ವಾಮಿ, ನಿವೃತ್ತ ಎಇಇ ಕುಮಾರ್, ಇನ್ನಿತರರು ಹಾಜರಿದ್ದರು.