ಬೀರೂರು: ನಾನು ಓದಿದ ಶಾಲೆಯ ಋಣ ತೀರಿಸುವ ಸಲುವಾಗಿ ವಿದ್ಯಾರ್ಥಿಗಳಿಗೆ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಸಹಕಾರವಾಗಲಿ ಎಂದು ಟ್ರ್ಯಾಕ್‌ಸೂಟ್ ಸಮವಸ ವಿತರಿಸಲಾಗುತ್ತಿದೆ ಎಂದು ಬಿಜೆಪಿ ಜಿಲ್ಲಾ ಮಾಜಿ ಉಪಾಧ್ಯಕ್ಷ ಅರೇಕಲ್ ಪ್ರಕಾಶ್ ತಿಳಿಸಿದರು.
ಪಟ್ಟಣದ ಪಿಎಂಶ್ರೀ ಸರ್ಕಾರಿ ಶಾಲೆಯಲ್ಲಿ ಸೋಮವಾರ ವಿದ್ಯಾರ್ಥಿಗಳಿಗೆ ಟ್ರ್ಯಾಕ್‌ಸೂಟ್ ಸಮವಸಗಳನ್ನು ವಿತರಿಸಿ ಮಾತನಾಡಿದರು.
ಸಾಕಷ್ಟು ವಿದ್ಯಾರ್ಥಿಗಳು ಹಿಂದೆ ಆರ್ಥಿಕ ಸಂಕಷ್ಟದಿಂದ ವಿದ್ಯಾಭ್ಯಾಸವನ್ನು ಅರ್ಧಕ್ಕೆ ನಿಲ್ಲಿಸಿದ ಬಹಳಷ್ಟು ಉದಾಹರಣೆಗಳಿವೆ. ಆದರೆ ಈಗ ಆ ರೀತಿಯ ಪರಿಸ್ಥಿತಿ ಇಲ್ಲ. ಸರ್ಕಾರದ ಅನುದಾನದ ಜತೆಗೆ ಉಳ್ಳವರು ಮತ್ತು ಹಳೆಯ ವಿದ್ಯಾರ್ಥಿಗಳು ಕೂಡ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸುವ ಮೂಲಕ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲಾಗುತ್ತಿದೆ. ಶಿಕ್ಷಣ ನೀಡಿ ವಿದ್ಯಾವಂತರನ್ನಾಗಿ ಮಾಡಿದ ಶಾಲೆಗೆ ಏನಾದರೂ ಕೊಡುಗೆ ನೀಡಿದರೆ ಕಲಿತದ್ದು ಸಾರ್ಥಕವಾಗುತ್ತದೆ ಎಂದರು.
ಮುಖ್ಯಶಿಕ್ಷಕ ಚಂದ್ರಶೇಖರ್ ಮಾತನಾಡಿ, ದುಡಿದ ಹಣದಲ್ಲಿ ಒಂದು ಭಾಗವನ್ನು ದಾನ, ಧರ್ಮಗಳಿಗೆ ಬಳಸಬೇಕು ಎನ್ನುವ ಸಂದೇಶದಂತೆ ಶಾಲೆಯ ಹಳೆಯ ವಿದ್ಯಾರ್ಥಿ ಅರೇಕಲ್ ಪ್ರಕಾಶ್ ಮಕ್ಕಳಿಗೆ ಟ್ರ್ಯಾಕ್ ಸೂಟ್‌ನ ಸಮವಸಗಳನ್ನು ನೀಡಿರುವುದು ಶ್ಲಾಘನೀಯ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕ್ರೀಡಾಕೂಟದಲ್ಲಿ ಭಾಗವಹಿಸುವ ಮಕ್ಕಳಿಗೆ ಟ್ರ್ಯಾಕ್‌ಸೂಟ್ ವಿತರಿಸಿದರು. ಸಹಶಿಕ್ಷಕರಾದ ಶಿವಮೂರ್ತಿ, ತಿಪ್ಪೇಶ್, ಸೌಭಾಗ್ಯಮ್ಮ, ಶಿಕ್ಷಕ ಉಮೇಶ್, ಎಸ್‌ಡಿಎಂಸಿ ಅಧ್ಯಕ್ಷ ಬಿ.ಎನ್.ಪ್ರಸನ್ನ ಕುಮಾರ್, ಉಪಾಧ್ಯಕ್ಷೆ ಪೂರ್ಣಿಮಾ, ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ದೇವರಮನೆ ಗಿರೀಶ್, ಕಾರ್ಯದರ್ಶಿ ಗುರುಪ್ರಸಾದ್ ಹಾಗೂ ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು ಮತ್ತು ಮಕ್ಕಳು ಇದ್ದರು.