ನ್ಯೂಸ್

ಮತದಾರರ ಸೇವೆ ಮಾಡಿ ಕೃತಜ್ಞತೆ ಸಲ್ಲಿಸೋಣ

ಕೆ.ಆರ್.ನಗರ: ಭ್ರಷ್ಟಾಚಾರ, ದಬ್ಬಾಳಿಕೆ ಮೂಲಕ ದೇಶ ಮತ್ತು ರಾಜ್ಯದಲ್ಲಿ ಆಘೋಷಿತ ತುರ್ತು ಪರಿಸ್ಥಿತಿ ನಿರ್ಮಿಸಿದ್ದ ಬಿಜೆಪಿ ಸರ್ಕಾರ ಕಿತ್ತೆಸೆದು, ನುಡಿದಂತೆ ನಡೆಯುವ ನಮ್ಮ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ಅಭೂತ ಪೂರ್ವ ಗೆಲುವು ತಂದು ಕೊಟ್ಟಿರುವ ಮತದಾರರ ಸೇವೆ ಮಾಡುವ ಮೂಲಕ ಕೃತಜ್ಞತೆ ಸಲ್ಲಿಸೋಣ ಎಂದು ಸಮಾಜ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದರು.

ಪಟ್ಟಣದ ಡಾ.ರಾಜ್ ಬಾನಾಂಗಳದಲ್ಲಿ ಶನಿವಾರ ಕಾಂಗ್ರೆಸ್ ಪಕ್ಷದ ವತಿಯಿಂದ ಕ್ಷೇತ್ರದ ಜನತೆಗೆ ಆಯೋಜಿಸಿದ್ದ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಅವರು, ಬೆಲೆ ಹೆಚ್ಚಳ, ನೋಟು ಅಮಾನ್ಯೀಕರಣ, ಸಂವಿಧಾನಿಕ ಸಂಸ್ಥೆಗಳನ್ನು ರಾಜಕೀಯ ಹಿತಾಸಕ್ತಿಗೆ ಬಳಸಿಕೊಂಡು ಸಂವಿಧಾನದ ಆಶಯಗಳಿಗೆ ಧಕ್ಕೆ ತಂದಿದ್ದ ಬಿಜೆಪಿ ಸರ್ಕಾರಕ್ಕೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಕಾಂಗ್ರೆಸ್ ಬೆಂಬಲಿಸುವ ಮೂಲಕ ಅಧಿಕಾರಕ್ಕೆ ತಂದಿರುವ ಮತದಾರರ ನಂಬಿಕೆಯನ್ನು ಉಳಿಸಿಕೊಳ್ಳಬೇಕಿದೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳನ್ನು ಮಾಡುವ ಮತದಾರರ ಋಣ ತೀರಿಸುತ್ತೇವೆ ಎಂದು ಭರವಸೆ ನೀಡಿದರು.

ಪಶುಸಂಗೋಪನಾ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್ ಮಾತನಾಡಿ, ಕಾಂಗ್ರೆಸ್ ಪಕ್ಷ ಮಾತ್ರ ಬಡವರು, ರೈತರು, ದಲಿತರು, ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರ ಪರವಾಗಿ ಕೆಲಸ ಮಾಡುತ್ತದೆ. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನೀಡಲು ಹೊರಟಿರುವ ಅನ್ನಭಾಗ್ಯ ಯೋಜನೆಗೆ ಅಕ್ಕಿ ನೀಡುವುದಿಲ್ಲ ಎನ್ನುವ ಮೂಲಕ ಬಿಜೆಪಿ ಸರ್ಕಾರ ಬಡವರ ವಿರುದ್ಧವಾಗಿ ಅಡ್ಡಗಾಲು ಹಾಕುತ್ತಿದೆ ಎಂದು ಕಿಡಿಕಾರಿದರು.

ಚಾಮರಾಜ ಕ್ಷೇತ್ರದ ಶಾಸಕ ಹರೀಶ್‌ಗೌಡ ಮಾತನಾಡಿ, ದುರಹಂಕಾರಿ ಶಾಸಕನನ್ನು ಸೋಲಿಸಿರುವ ಕೆ.ಆರ್.ನಗರ ಕ್ಷೇತ್ರದ ಜನತೆ ಸೌಮ್ಯ ವ್ಯಕ್ತಿತ್ವದ ಡಿ.ರವಿಶಂಕರ್ ಅವರನ್ನು ಶಾಸಕನಾಗಿ ಆಯ್ಕೆ ಮಾಡಿಕೊಳ್ಳುವ ಮೂಲಕ ತಕ್ಕ ಪಾಠ ಕಲಿಸಿದ್ದಾರೆ ಎಂದು ಗುಡುಗಿದರು.

ಶಾಸಕ ಡಿ.ರವಿಶಂಕರ್ ಮಾತನಾಡಿ, ಪ್ರತಿಯೊಬ್ಬ ಕಾರ್ಯಕರ್ತರು ಮತ್ತು ಮುಖಂಡರ ಅವಿರತ ಶ್ರಮದಿಂದ ಇಂದು ನಾನು ಹೆಚ್ಚಿನ ಅಂತರದಲ್ಲಿ ಗೆದ್ದು ಶಾಸಕನಾಗಿ ಆಯ್ಕೆಯಾಗಿದ್ದೇನೆ. ಅತ್ಯಂತ ದೊಡ್ಡ ಜವಾಬ್ದಾರಿಯನ್ನು ನೀವೆಲ್ಲ ನನಗೆ ನೀಡಿದ್ದು, ಅದನ್ನು ಪ್ರಾಮಾಣಿಕವಾಗಿ ನಿರ್ವಹಿಸುತ್ತೇನೆ. ಶಾಸಕನಾಗಿ ಆಯ್ಕೆಯಾಗಲು ಸಹಕರಿಸಿದ ಎಲ್ಲರಿಗೂ ಧನ್ಯವಾದ ಅರ್ಪಿಸುತ್ತೇನೆ ಎಂದರು.

ಕೆಪಿಸಿಸಿ ಕಾರ್ಯಕಾರಣಿ ಸದಸ್ಯ ದೊಡ್ಡಸ್ವಾಮೇಗೌಡ ಮಾತನಾಡಿ, ಕೆಲವರು ಸ್ವಾರ್ಥಕ್ಕಾಗಿ ಎರಡು ಜಾತಿಗಳ ನಡುವೆ ಕಂದಕ ಸೃಷ್ಟಿಸಿದ್ದಾರೆ. ಕ್ಷೇತ್ರದಲ್ಲಿ ಇರುವ ಜಾತಿ ವ್ಯವಸ್ಥೆಯನ್ನು ತೊಡೆದು ಹಾಕಿ ಎಲ್ಲ ಗ್ರಾಮಗಳನ್ನು ಅಭಿವೃದ್ಧಿಪಡಿಸುತ್ತೇವೆ ಎಂದರು.

ಶಾಸಕರಾದ ಅನಿಲ್ ಚಿಕ್ಕಮಾದು, ಗಣೇಶ್ ಪ್ರಸಾದ್, ಡಾ.ಡಿ.ತಿಮ್ಮಯ್ಯ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಕೆಪಿಸಿಸಿ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್, ಕ್ಷೇತ್ರದ ಉಸ್ತುವಾರಿ ಡಾ.ರವೀಂದ್ರ ಮಾತನಾಡಿದರು.

ಮಾಜಿ ಸಂಸದ ಶಿವಣ್ಣ, ಜಿಪಂ ಮಾಜಿ ಸದಸ್ಯ ಅಮಿತ್ ವಿ.ದೇವರಹಟ್ಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಸ್.ಮಹದೇವ್, ಉದಯಶಂಕರ್, ವಕ್ತಾರ ಸೈಯದ್ ಜಾಬೀರ್, ನಗರ ಯೂತ್ ಅಧ್ಯಕ್ಷ ಕೆಂಚಿಮಂಜ, ತಾಲೂಕು ಕುರುಬರ ಸಂಘದ ಅಧ್ಯಕ್ಷ ಚೀರ‌್ನಹಳ್ಳಿ ಶಿವಣ್ಣ, ಶಾಸಕರ ಪತ್ನಿ ಸುನೀತಾ ರವಿಶಂಕರ್ ಸೇರಿದಂತೆ ಪುರಸಭಾ ಸದಸ್ಯರು, ತಾಪಂ ಮಾಜಿ ಅಧ್ಯಕ್ಷರು, ಮಾಜಿ ಸದಸ್ಯರು ಹಾಜರಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಾವಿರಾರು ಮಂದಿಗೆ ಹೋಳಿಗೆ ಊಟ ಏರ್ಪಡಿಸಲಾಗಿತ್ತು.