ದಾವಣಗೆರೆ : ಅ. 2 ರಂದು ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್‌ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ.
ಜಿಲ್ಲಾಡಳಿತ ಭವನದಲ್ಲಿ ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಮಾತನಾಡಿ, ಕೋವಿಡ್ ನಿಯಂತ್ರಣ ಮಾರ್ಗಸೂಚಿಯನ್ನು ಪಾಲಿಸಲಾಗುವುದು ಎಂದು ತಿಳಿಸಿದರು.
ಅಂದು ಬೆಳಗ್ಗೆ 9 ಗಂಟೆಗೆ ಮಹಾನಗರ ಪಾಲಿಕೆ ಆವರಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ವಿವಿಧ ಮಹನೀಯರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿ, ಬಳಿಕ ವೇದಿಕೆ ಕಾರ್ಯಕ್ರಮ ನೆರವೇರಿಸಲಾಗುವುದು ಎಂದರು.
ಕಾರ್ಯಕ್ರಮಕ್ಕೆ ಶಿಷ್ಟಾಚಾರದಂತೆ ಜಿಲ್ಲಾ ಉಸ್ತುವಾರಿ ಸಚಿವರು ಸೇರಿದಂತೆ ಎಲ್ಲ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು. ಸರ್ವಧರ್ಮ ಪ್ರಾರ್ಥನೆ, ಗಾಂಧೀಜಿಯವರ ಜೀವನ ಸಾಧನೆ ಕುರಿತಂತೆ ವಿಶೇಷ ಉಪನ್ಯಾಸ ಏರ್ಪಡಿಸಲಾಗುವುದು.
ಪ್ರತಿ ಬಾರಿ ಕಾರ್ಯಕ್ರಮಕ್ಕೆ ಮಕ್ಕಳನ್ನು ಆಹ್ವಾನಿಸಲಾಗುತ್ತಿತ್ತು. ಈ ಬಾರಿ ಕೋವಿಡ್ ಭೀತಿಯ ಕಾರಣಕ್ಕಾಗಿ ಗೀತ ಗಾಯನಕ್ಕೆ ಸಂಗೀತ ಶಿಕ್ಷಕರನ್ನು ನಿಯೋಜಿಸಲಾಗುವುದು ಎಂದು ಹೇಳಿದರು.
ಶಿಷ್ಟಾಚಾರಗಳ ಪಾಲನೆ ಕುರಿತಂತೆ ಎಲ್ಲ ಇಲಾಖೆ ಅಧಿಕಾರಿಗಳು ಪಾಲಿಸಬೇಕಾದ ನಿಯಮಗಳ ಕುರಿತು ಅಧಿಕಾರಿಗಳಿಗೆ ತರಬೇತಿ ನೀಡಲಾಯಿತು.
ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡರ್, ದೂಡಾ ಆಯುಕ್ತ ಬಿ.ಟಿ. ಕುಮಾರಸ್ವಾಮಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ನಜ್ಮಾ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಅಶೋಕ್‌ಕುಮಾರ್, ತಹಸೀಲ್ದಾರ್ ಗಿರೀಶ್, ಮಹಾನಗರ ಪಾಲಿಕೆಯ ಅಧಿಕಾರಿ ಪ್ರಭುಸ್ವಾಮಿ ಇದ್ದರು.