ಬೆಂಗಳೂರು: ಲೈಂಗಿಕ ದೌರ್ಜನ್ಯದಂಥ ಅಪರಾಧಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದ್ದು, ವೈದ್ಯಕೀಯ ವೃತ್ತಿಪರರನ್ನು, ವಿಶೇಷವಾಗಿ ಮಹಿಳೆಯರನ್ನು ರಕ್ಷಿಸುವ ವಿಚಾರದಲ್ಲಿ ರಾಜಿ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಸ್ಪಷ್ಟಪಡಿಸಿದರು.
ಕೋಲ್ಕತ್ತಾದಲ್ಲಿ ಇತ್ತೀಚೆಗೆ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಹತ್ಯೆಯ ಬಗ್ಗೆ ದೇಶವ್ಯಾಪಿ ಆಕ್ರೋಶ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಸಭಾಂಗಣದಲ್ಲಿ ಮಂಗಳವಾರ ರಾಜ್ಯದ ವೈದ್ಯಕೀಯ ಕಾಲೇಜುಗಳಲ್ಲಿ ಮಹಿಳಾ ವೈದ್ಯರು ಹಾಗೂ ಸಿಬ್ಬಂದಿಗೆ ಭದ್ರತೆ ಹೆಚ್ಚಿಸುವ ಕುರಿತು ವೈದ್ಯಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಈ ವೇಳೆ ಮಾತನಾಡಿದ ಅವರು, ಮಹಿಳೆಯರನ್ನು ರಕ್ಷಿಸಲು ನಮ್ಮ ಸರ್ಕಾರ ಎಲ್ಲ ರೀತಿಯ ಕ್ರಮ ಕೈಗೊಳ್ಳುತ್ತಿದೆ. ಅದೇ ರೀತಿ ಮಹಿಳಾ ವೈದ್ಯರ ಸುರಕ್ಷತೆಗೂ ನಾವು ಬದ್ಧ ಎಂದ ಸಚಿವರು, ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಆಧರಿಸಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಎಲ್ಲಾ ವೈದ್ಯಕೀಯ ಕಾಲೇಜುಗಳು, ಸೂಪರ್ - ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ನುರಿತ ಭದ್ರತಾ ಸಿಬ್ಬಂದಿ ನಿಯೋಜನೆ ಸೇರಿ ಬೀದಿ ದೀಪಗಳು ಹಾಗೂ ಸಿಸಿಟಿವಿ ಕ್ಯಾಮೆರಾಗಳ ಹೆಚ್ಚಳ ಮಾಡಲಾಗುವುದು. ವೈದ್ಯ ಸಿಬ್ಬಂದಿಯ ವಸತಿ ನಿಲಯಗಳ ಸುರಕ್ಷತೆಗೂ ಆದ್ಯತೆ ನೀಡಲಾಗುವುದು. ಕೇಂದ್ರ ಸರ್ಕಾರ ಹಾಗೂ ಸುಪ್ರೀಂ ಕೋರ್ಟ್ ಮಾರ್ಗಸೂಚಿಗಳಿಗೆ ಅನುಗುಣವಾಗಿ ಕ್ರಮ ವಹಿಸಲಾಗುವುದು ಎಂದರು.
ಪಿಓಎಸ್‌ಹೆಚ್ (ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ, ನಿಷೇಧ ಮತ್ತು ಪರಿಹಾರ) ಕಾಯಿದೆಯಡಿ ಸ್ಥಾಪಿಸಲಾದ ಆಂತರಿಕ ದೂರುಗಳ ಸಮಿತಿಯ ಪ್ರಾಮುಖ್ಯತೆಯನ್ನು ವಿವರಿಸಿದ ಸಚಿವರು, ಈ ಸಮಿತಿಗಳ ಎದುರು ಮಹಿಳೆಯರು ಹೇಳಿಕೊಳ್ಳುವ ಎಲ್ಲಾ ಸಮಸ್ಯೆಗಳನ್ನು ಕಟ್ಟುನಿಟ್ಟಾಗಿ ಪರಿಹರಿಸಲಾಗುತ್ತದೆ ಎಂದು ಹೇಳಿದರು.
ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕಿ ಡಾ ಸುಜಾತಾ ರಾಥೋಡ್, ಬಿಎಂಸಿಆರ್‌ಐನ ಡೀನ್ ಮತ್ತು ನಿರ್ದೇಶಕ ಡಾ ರಮೇಶ್ ಕೃಷ್ಣ, ಪ್ರಾಂಶುಪಾಲೆ ಡಾ. ಅಸಿಮಾ ಬಾನು ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳು, ವೈದ್ಯಕೀಯ ಸಂಸ್ಥೆ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ದೇಶಕರು, ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು, ಅರೆ ವೈದ್ಯಕೀಯ ಸಿಬ್ಬಂದಿ ಇತರರು ಇದ್ದರು.