ತರೀಕೆರೆ: ಚುನಾವಣೆ ಪೂರ್ವ ನೀಡಿದ್ದ ಭರವಸೆಯಂತೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುತ್ತಿದೆ ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ಅಜ್ಜಂಪುರ ತಾಲೂಕಿನ ನಾಗವಂಗಲ ಗ್ರಾಮದಲ್ಲಿ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ 12 ಲಕ್ಷ ರೂ. ವೆಚ್ಚದ ಸಮುದಾಯ ಭವನ ಹಾಗೂ 5 ಲಕ್ಷ ರೂ. ವೆಚ್ಚದ ಕಾಂಕ್ರಿಟ್ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಸರ್ಕಾರ ಪಂಚ ಗ್ಯಾರಂಟಿಗಳಿಗಾಗಿ ಕೋಟ್ಯಂತರ ರೂ. ಖರ್ಚು ಮಾಡುತ್ತಿರುವ ಹೊರತಾಗಿಯೂ ರಸ್ತೆ, ಚರಂಡಿ ಇನ್ನಿತರ ಅಭಿವೃದ್ಧಿ ಕಾರ್ಯಗಳಿಗೆ ಬೇಕಾದ ಅನುದಾನವನ್ನು ಕಾಲಕಾಲಕ್ಕೆ ಬಿಡುಗಡೆ ಮಾಡುತ್ತಿದೆ. 6 ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಅಜ್ಜಂಪುರ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಚಿಂತನೆ ನಡೆಸಲಾಗಿದೆ. ಮಿನಿ ವಿಧಾನಸೌಧ ಸೇರಿ ವಿವಿಧ ಸರ್ಕಾರಿ ಕಚೇರಿ ಕಟ್ಟಡಗಳ ನಿರ್ಮಾಣಕ್ಕೆ ಪಟ್ಟಣ ಹೊರವಲಯದಲ್ಲಿ ಸೂಕ್ತ ಜಾಗದ ಹುಡುಕಾಟ ನಡೆಸಲಾಗಿದೆ. ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿ ಪ್ರಸ್ತಾವನೆ ಸಲ್ಲಿಸಲಾಗಿದ್ದು ಸದ್ಯದಲ್ಲೇ ಮಂಜೂರಾತಿ ದೊರೆಯಲಿದೆ ಎಂದರು.
ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕುಮಾರ್, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಸಿ.ಆರ್.ಅನಂತಪ್ಪ ಮತ್ತಿತರರಿದ್ದರು.