ನ್ಯೂಸ್

ಮುಖ್ಯಮಂತ್ರಿ ಟೆಂಪಲ್ ರನ್; ಬಂದರಿಗೆ ಶಿಲಾನ್ಯಾಸ


ಉಡುಪಿ: ಒಂದು ದಿನದ ಜಿಲ್ಲಾ ಪ್ರವಾಸಕ್ಕೆ ಆಗಮಿಸಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು  4 ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ.
ಸೋಮವಾರ ಸಾಯಂಕಾಲ  ಕೃಷ್ಣ ಮಠ ಹಾಗೂ ಕರಂಬಳ್ಳಿ ವೆಂಕಟರಮಣ ದೇವಸ್ಥಾನಕ್ಕೆ ಭೇಟಿ ನೀಡಿದ್ದು, ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದರು. ಮಂಗಳವಾರ ಬೆಳಗ್ಗೆ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ನಂತರ 180.84 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಹೆಜಮಾಡಿ ಕೋಡಿ ಮೀನುಗಾರಿಕೆ ಬಂದರಿಗೆ ಶಂಕುಸ್ಥಾಪನೆ ನೆರವೇರಿಸಿದರು. ಅಲ್ಲಿಂದ ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ, ಸಹಸ್ರ ನಾರಿಕೇಳ ಗಣಪತಿ ಹೋಮದ ಪೂರ್ಣಾಹುತಿಯಲ್ಲಿ ಪುತ್ರ, ಸಂಸದ ರಾಘವೇಂದ್ರ ಅವರೊಂದಿಗೆ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸಕಾಲಕ್ಕೆ ಮಳೆ, ಬೆಳೆಯಾಗಲಿ. ರಾಜ್ಯಕ್ಕೆ ಸಮೃದ್ಧಿಯಾಗಲಿ ಎಂದು ದೇವರಲ್ಲಿ ಬೇಡಿಕೊಂಡಿದ್ದೇನೆ. 2 ದಿನದಲ್ಲಿ ಖಾತೆ ಹಂಚಿಕೆ ಮಾಡಲಿದ್ದು, ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡನೆ ಮಾಡುತ್ತೇನೆ ಎಂದು ತಿಳಿಸಿದರು.  
 ಈ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮೀನುಗಾರಿಕೆ ಇಲಾಖೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಕೆ. ರಘುಪತಿ ಭಟ್, ಕಾಪು  ಶಾಸಕ ಲಾಲಾಜಿ ಆರ್. ಮೆಂಡನ್, ಸಂಸದೆ ಶೋಭಾ ಕರಂದ್ಲಾಜೆ, ಮೂಲ್ಕಿ   ಶಾಸಕ ಉಮಾನಾಥ್ ಕೋಟ್ಯಾನ್,  ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ್ ಬಾಬು ಮೊದಲಾದವರು ಉಪಸ್ಥಿತರಿದ್ದರು.