ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಭಾನುವಾರ ನಗರದ ಹೊರವಲಯದ ಉತ್ತನಹಳ್ಳಿ ಸಮೀಪದಲ್ಲಿ ನಡೆಯುವ ಯುವ ದಸರಾ ಕಾರ್ಯಕ್ರಮ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು.
ಕಾರ್ಯಕ್ರಮದ ಆಯೋಜನೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವರು, ನಾಡಹಬ್ಬ ದಸರಾ ಮಹೋತ್ಸವದಲ್ಲಿ ನಡೆಯುವ ಆಕರ್ಷಕ ಕಾರ್ಯಕ್ರಮಗಳಲ್ಲಿ ಯುವ ದಸರಾ ಪ್ರಮುಖವಾಗಿದ್ದು, ಮೈಸೂರು ನಗರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಜನರು ಕಾರ್ಯಕ್ರಮ ವೀಕ್ಷಣೆಗೆ ಆಗಮಿಸುವರು. ಹೀಗಾಗಿ ಅಗತ್ಯ ಸೌಲಭ್ಯವನ್ನು ಕಲ್ಪಿಸುವಂತೆ ಸೂಚಿಸಿದರು.
ಯುವ ದಸರಾಗೆ ಸಹಸ್ರಾರು ಸಂಖ್ಯೆಯಲ್ಲಿ ಯುವಜನರು ಆಗಮಿಸಿ ಸಂಭ್ರಮಿಸುತ್ತಾರೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುವುದರಿಂದ ಯಾವುದೇ ಅನಾನುಕೂಲ ಉಂಟಾಗದಂತೆ ಅಚ್ಚುಕಟ್ಟಾಗಿ ಎಲ್ಲ ವ್ಯವಸ್ಥೆಯನ್ನು ರೂಪಿಸಬೇಕು ಎಂದು ಸಲಹೆ ನೀಡಿದರು.
ನಗರದಿಂದ ಬರುವ ದಾರಿಯುದ್ದಕ್ಕೂ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಬೀದಿ ದೀಪದ ವ್ಯವಸ್ಥೆ ಮಾಡಬೇಕು. ವಾಹನ ಪಾರ್ಕಿಂಗ್ ಸ್ಥಳದಲ್ಲಿ ವ್ಯವಸ್ಥಿತವಾಗಿ ನಿಲ್ಲಿಸಲು ಸೂಚನಾ ಫಲಕ ಅಳವಡಿಸಿ ಮಾರ್ಗದರ್ಶನ ನೀಡಬೇಕು ಎಂದರು.
ಬಹುಮುಖ್ಯವಾಗಿ ಮಹಿಳೆಯರು ಹೆಚ್ಚಿನ ಭದ್ರತೆ ಒದಗಿಸಬೇಕು. ರಾತ್ರಿ ವೇಳೆ ಕಾರ್ಯಕ್ರಮ ನಡೆಯುವುದರಿಂದ ಎಲ್ಲ ಬಗೆಯ ಅಗತ್ಯ ಮುಂಜಾಗೃತ ಕ್ರಮ ಅನುಸರಿಸಬೇಕು ಎಂದು ಸೂಚನೆ ನೀಡಿದರು.
ಹಿರಿಯ ಐಪಿಎಸ್ ಅಧಿಕಾರಿ ಬೋರಲಿಂಗಯ್ಯ, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯಿತ್ರಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ, ಉಪ ವಿಭಾಗಧಿಕಾರಿ ಕೆ.ಆರ್.ರಕ್ಷಿತ್ ಸೇರಿದಂತೆ ಇತರರಿದ್ದರು.