ನ್ಯೂಸ್

ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ನಿಶ್ಚಿತ

ಉದಯಗಿರಿ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ಕಾನೂನಿನ ಪ್ರಕಾರವಾಗಿ ಕ್ರಮಕೈಗೊಳ್ಳುವಂತೆ ಹೇಳಿದ್ದೇನೆ. ಘಟನೆಯಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಆಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.

ನಗರದ ಉದಯಗಿರಿಯಲ್ಲಿ ಸೋಮವಾರ ರಾತ್ರಿ ನಡೆದ ಕಲ್ಲು ತೂರಾಟ ಪ್ರಕರಣ ಸಂಬಂಧ ಗುರುವಾರ ಉದಯಗಿರಿ ಪೊಲೀಸ್ ಠಾಣೆಗೆ ಭೇಟಿ ನೀಡಿದ ಸಚಿವರು, ಘಟನೆ ಸಂಬಂಧ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ಮತ್ತು ಠಾಣಾಧಿಕಾರಿಗಳ ಜತೆ ಚರ್ಚೆ ನಡೆಸಿ, ಮಾಹಿತಿ ಪಡೆದುಕೊಂಡರು. ಜತೆಗೆ ಆಗತ್ಯ ಮಾರ್ಗದರ್ಶನವನ್ನು ನೀಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದಯಗಿರಿಯಲ್ಲಿ ಕಾನೂನು ಭಂಗ ಉಂಟು ಮಾಡಿದವರು ಯಾಕೆ ಮಾಡಿದರು? ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ಪೊಲೀಸರು ತನಿಖೆ ಮಾಡುತ್ತಾರೆ. ಜನರು ಶಾಂತಿ ಕಾಪಾಡಬೇಕು. ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ಆಗತ್ತದೆ. ಪೊಲೀಸರ ಕ್ರಮಕ್ಕೆ ನನ್ನ ಸಹಮತವಿದೆ ಎಂದು ತಿಳಿಸಿದರು.

ಪೊಲೀಸ್ ಠಾಣೆ ಮೇಲೆ ಕಲ್ಲು ಎಸೆದ ಪ್ರಕರಣದ ತನಿಖಾ ಜವಾಬ್ದಾರಿಯನ್ನು ಸಿಸಿಬಿಗೆ ನೀಡಲಾಗಿದ್ದು, ಪೊಲೀಸರು ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಕೆಲವರನ್ನು ಬಂಧಿಸಿದ್ದಾರೆ. ಪ್ರಕರಣದ ಹಿಂದೆ ಯಾರಿದ್ದಾರೆ ಎಂಬುದನ್ನು ತನಿಖೆ ಮಾಡುತ್ತಾರೆ. ಕಾನೂನಿನ ಬಗ್ಗೆ ಈ ಭಾಗದ ಸಾರ್ವಜನಿಕರಿಗೆ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತದೆ. ಉದಯಗಿರಿಯಲ್ಲಿ ಅಪರಾಧ ಪ್ರಕರಣಗಳ ಆಧಾರದ ಮೇಲೆ ಮತ್ತೊಂದು ಪೊಲೀಸ್ ಠಾಣೆ ಬೇಕಾ ಬೇಡವಾ ಎಂಬ ಪ್ರಕ್ರಿಯೆ ನಡೆಯುತ್ತದೆ ಎಂದರು.