ಯುವ ಜನರೇ ಭವ್ಯ ಭಾರತದ ಶಿಲ್ಪಿಗಳು ಎಂದು ಮೈಸೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಿಶ್ರಾಂತ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಕೆ.ಕಾಳಚನ್ನೇಗೌಡ ಅಭಿಪ್ರಾಯಪಟ್ಟರು.
ನಗರದ ಸರಸ್ವತಿಪುರಂನಲ್ಲಿರುವ ಜೆಎಸ್‌ಎಸ್ ಮಹಿಳಾ ಕಾಲೇಜಿನ ನವಜ್ಯೋತಿ ಸಭಾಂಗಣದಲ್ಲಿ ಮಂಗಳವಾರ ರಾಷ್ಟ್ರೀಯ ಸೇವಾ ಯೋಜನೆಯ ಚಟುವಟಿಕೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಯುವಕರು ಸಕ್ರಿಯವಾಗಿ ತೊಡಗಿಸಿಕೊಂಡು ಭವ್ಯ ಭಾರತವನ್ನು ನಿರ್ಮಾಣ ಮಾಡಬೇಕಿದೆ ಎಂದರು.
ನಮ್ಮ ರಾಷ್ಟ್ರದ ಬೆನ್ನೆಲುಬಾಗಿ, ಡಿಜಿಟಲ್ ಸಬಲೀಕರಣಗೊಂಡ ಮತ್ತು ಸುಸ್ಥಿರ ಭವಿಷ್ಯವನ್ನು ರೂಪಿಸುವ ಶಕ್ತಿ ಮತ್ತು ಜವಾಬ್ದಾರಿ ನಮ್ಮ ಯುವ ಸಮೂಹದ ಮೇಲಿದೆ. ಇದು ರಾಷ್ಟ್ರೀಯ ಸೇವಾ ಯೋಜನೆಯಿಂದ ಸಾಧ್ಯವಿದೆ ಎಂದು ಅಭಿಪ್ರಾಯಪಟ್ಟರು.
ಮೈಸೂರು ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಎಂ.ಬಿ.ಸುರೇಶ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಸಮಗ್ರ ಬೆಳವಣಿಗೆಯನ್ನು ಸಾಧಿಸಲು ಎನ್‌ಎಸ್‌ಎಸ್ ಆಯ್ಕೆ ಮಾಡಿಕೊಳ್ಳಬೇಕು. ಉತ್ತಮ ನಾಯಕತ್ವದ ಗುಣಗಳನ್ನು ಬೆಳೆಸಲು ಸಹಾಯ ಮಾಡುತ್ತದೆ. ಆದ್ದರಿಂದ ವಿದ್ಯಾರ್ಥಿನಿಯರು ಅವಕಾಶಗಳನ್ನು ಬಳಸಿಕೊಳ್ಳುವಂತೆ ಪ್ರೇರೇಪಿಸಿದರು. ತಮ್ಮಲ್ಲಿರುವ ಬಹುಮುಖ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದೆ ಎಂದು ತಿಳಿಸಿದರು.
ಜೆಎಸ್‌ಎಸ್ ವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ಬಿ.ನಿರಂಜನಮೂರ್ತಿ ಮಾತನಾಡಿ, ರಾಷ್ಟ್ರವನ್ನು ರೂಪಿಸುವಲ್ಲಿ ಎನ್‌ಎಸ್‌ಎಸ್ ಪಾತ್ರವಿದೆ. ತಾವು ರಾಷ್ಟ್ರೀಯ ಸೇವಾ ಯೋಜನೆಯ ಸ್ವಯಂಸೇವಕರಾಗಿ, ಕಾರ್ಯಕ್ರಮಾಧಿಕಾರಿಯಾಗಿದ್ದ ಅನುಭವವನ್ನು ಹಂಚಿಕೊಂಡರು. ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನಕ್ಕಾಗಿ ರಾಸೇಯೋ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ತಿಳಿಸಿದರು. ಪ್ರಾಂಶುಪಾಲ ಡಾ.ರೇಚಣ್ಣ, ಕಾರ್ಯಕ್ರಮಾಧಿಕಾರಿಗಳಾದ ಡಾ.ಎ.ಜಿ.ಧರ್ಮೇಶ್, ಅನುಷಾ ಇದ್ದರು.