ಜಿಲ್ಲೆಯಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 7,268 ಪ್ರಕರಣಗಳು ಇತ್ಯರ್ಥಗೊಂಡವು.
ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದಂತೆ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿತ್ತು. ಜಿಲ್ಲೆಯ ವಿವಿಧ ನ್ಯಾಯಾಲಯಗಳಲ್ಲಿ ಬಾಕಿಯಿರುವ ಪ್ರಕರಣಗಳಲ್ಲಿ ಕಾನೂನಿನ ಪ್ರಕಾರ ರಾಜಿಯಾಗಬಹುದಾದ ಪ್ರಕರಣ, ವಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವ ಉದ್ದೇಶದಿಂದ ಲೋಕ ಅದಾಲತ್ ಆಯೋಜಿಸಲಾಗಿತ್ತು.
ಮೈಸೂರು ನಗರ ಮತ್ತು ತಾಲೂಕುಗಳಲ್ಲಿನ ನ್ಯಾಯಾಲಯಗಳಲ್ಲಿ ಒಟ್ಟು 1,22,125 ಪ್ರಕರಣಗಳು ವಿಚಾರಣೆಗೆ ಬಾಕಿಯಿದ್ದು, ಅವುಗಳ ಪೈಕಿ 61,193 ಸಿವಿಲ್ ಪ್ರಕರಣಗಳು ಹಾಗೂ 60,932 ಕ್ರಿಮಿನಲ್ ಪ್ರಕರಣಗಳಿದ್ದು, ಪ್ರಸ್ತುತ ಸದರಿ ಪ್ರಕರಣಗಳಲ್ಲಿ 37,816 ಪ್ರಕರಣಗಳನ್ನು ರಾಜಿಯಾಗಬಹುದಾದ ಪ್ರಕರಣಗಳಿದ್ದು, ಅವುಗಳ ಪೈಕಿ 21,646 ರಾಜಿ ಸಂಧಾನಕ್ಕಾಗಿ ತೆಗೆದುಕೊಳ್ಳಲಾಗಿತ್ತು.
ಎಲ್ಲ ಪ್ರಕರಣಗಳಿಗೆ ಸಂಬಂಧಿಸಿದಂತೆ ರಾಜಿ ಸಂಧಾನ ಮೂಲಕ ಒಟ್ಟು 49,66,29,267 ರೂ. ಇತ್ಯರ್ಥವಾಗಿರುತ್ತದೆ. ಈ ಸಲ ಅದಾಲತ್‌ನಲ್ಲಿ ಕೌಟುಂಬಿಕ ವಿವಾದದ ಪ್ರಕರಣಗಳಲ್ಲಿ ಮೈಸೂರು ನಗರ ಹಾಗೂ ಮೈಸೂರು ತಾಲೂಕು ನ್ಯಾಯಾಲಯಗಳಿಗೆ ಸಂಬಂಧಿಸಿದಂತೆ 41 ದಂಪತಿಗಳು ತಮ್ಮ ವ್ಯಾಜ್ಯಗಳನ್ನು ಬಗೆಹರಿಸಿಕೊಂಡು ಒಂದಾಗಿದ್ದು, ಸತಿ-ಪತಿಗಳಾಗಿ ಹೊಸ ಜೀವನ ಶುರು ಮಾಡಿದ್ದಾರೆ.
ಈ ಯಶಸ್ಸಿಗೆ ಸಹಕರಿಸಿದ ವಕೀಲರ ಸಂಘದ ಪದಾಧಿಕಾರಿಗಳು, ಎಲ್ಲ ವಕೀಲರು ಹಾಗೂ ಕಕ್ಷಿಗಾರರು, ಪೊಲೀಸ್ ಇಲಾಖೆಯನ್ನೊಳಗೊಂಡಂತೆ ಎಲ್ಲ ಇಲಾಖೆಗಳಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಉಷಾರಾಣಿ ಕೃತಜ್ಞತೆ ಸಲ್ಲಿಸಿದರು.