ನ್ಯೂಸ್

ಶಾಸಕ ಎಸ್.ಎನ್.ಸುಬ್ಬಾರೆಡಿಗೆ ಸಂಕಷ್ಟ: ಆಯ್ಕೆ ಅಸಿಂಧು ಕೋರಿದ್ದ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಬೆಂಗಳೂರು: ಕಳೆದ 2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಾಗೇಪಲ್ಲಿ ಕ್ಷೇತ್ರದಿಂದ ಆಯ್ಕೆಯಾದ ತಮ್ಮ ಶಾಸಕ ಸ್ಥಾನವನ್ನು ಅಸಿಂಧುಗೊಳಿಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಯನ್ನು ವಜಾಗೊಳಿಸುವಂತೆ ಶಾಸಕ ಎಸ್.ಎನ್ ಸುಬ್ಬಾರೆಡಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಚುನಾವಣೆ ವೇಳೆ ಸುಬ್ಬಾರೆಡ್ಡಿ ಸಲ್ಲಿಸಿದ್ದ ನಾಮಪತ್ರ ದೋಷಪೂರಿತವಾಗಿದ್ದು, ತಮ್ಮ ಆಸ್ತಿ ವಿವರಗಳನ್ನು ಮುಚ್ಚಿಟ್ಟಿರುವ ಮತ್ತು ಆಸ್ತಿಗಳ ತೆರಿಗೆ ಪಾವತಿ ಬಾಕಿ ಕುರಿತು ಚುನಾವಣಾ ಅಕ್ರಮ ಎಸಗಿ ಪ್ರಜಾಪ್ರತಿನಿಧಿ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ. ಈ ನಿಟ್ಟಿನಲ್ಲಿ ಅವರ ಆಯ್ಕೆ ಅನೂರ್ಜಿತಗೊಳಿಸುವಂತೆ ಪರಾಜಿತ ಅಭ್ಯರ್ಥಿ ಸಿ. ಮುನಿರಾಜು ಹೈಕೋರ್ಟ್‌ಗೆ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.

ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್ ಅವರ ಏಕ ಸದಸ್ಯ ನ್ಯಾಯಪೀಠ, ಸುಬ್ಬಾರೆಡ್ಡಿ ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಇದೇ ವರ್ಷ ಮಾರ್ಚ್‌ನಲ್ಲಿ ವಜಾಗೊಳಿಸಿ ವಿಚಾರಣೆಗೆ ಅನುಮತಿ ನೀಡಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಸದರಿ ಆದೇಶ ಪ್ರಶ್ನಿಸಿ ಶಾಸಕರು ಸುಪ್ರೀಂಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ಅರ್ಜಿದಾರರ ಪರ ಹಿರಿಯ ವಕೀಲ ಕಪಿಲ್ ಸಿಬಲ್ ಮತ್ತು ಪರಾಜಿತ ಅಭ್ಯರ್ಥಿ ಪರ ಹಿರಿಯ ವಕೀಲೆ ನಳಿನ ಮಾಯೇಗೌಡ ವಾದ ಮಂಡಿಸಿದರು.