ನ್ಯೂಸ್

ಸಂತೋಷ್ ರಾವ್‌ಗೆ ಸೂಕ್ತ ಪರಿಹಾರ ನೀಡಿ

ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ನಡೆಸಿ ನಿರಪರಾಧಿ ಸಂತೋಷ್ ರಾವ್ ಅವರಿಗೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿ ಮೈಸೂರು ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳ ಒಕ್ಕೂಟದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.

ನಗರದ ಸಿದ್ದಾರ್ಥ ಬಡಾವಣೆಯಲ್ಲಿನ ಬುದ್ಧ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಕಾಲ್ನಡಿ ಜಾಥಾ ನಡೆಸಿ, ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಸೌಜನ್ಯಾ ಅವರ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರು ತನಿಖೆ ನಡೆಸುವ ಮೂಲಕ ನಿಜವಾದ ಆರೋಪಿಗಳ ಪತ್ತೆಗೆ ಮುಂದಾಗಬೇಕು. ಅಲ್ಲದೇ ಪ್ರಕರಣದಲ್ಲಿ ಬಂಧಿಸಲಾಗಿದ್ದ ಸಂತೋಷ್ ರಾವ್‌ಗೆ ಸೂಕ್ತ ಪರಿಹಾರ ನೀಡಬೇಕು. ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿರುವ ಭೂ ಅಕ್ರಮ ಕಬಳಿಕೆ ಬಗ್ಗೆ ತನಿಖೆ ನಡೆಸಲು ತನಿಖಾ ತಂಡ ರಚಿಸಬೇಕೆಂದು ಒತ್ತಾಯಿಸಿ ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರ ಮುಖೇನ ರಾಜ್ಯಪಾಲರು ಹಾಗೂ ರಾಜ್ಯ ನ್ಯಾಯಮೂರ್ತಿಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ಭೀಮಸೇನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ಮಂಜುನಾಥ್, ಮಾಜಿ ಮೇಯರ್ ಪುರುಷೋತ್ತಮ್, ಭೀಮ್ ಸೇನೆಯ ರಾಜ್ಯಾಧ್ಯಕ್ಷ ಶಂಕರ್ ರಾಮಲಿಂಗಯ್ಯ, ಪ್ರಮುಖರಾದ ರಾಜಶೇಖರ್, ಸುಶೀಲ, ಕಿರಣ್ ಕುಮಾರ್, ಪರಮೇಶ್, ಸುಧಾಕರ್, ಚೆಲುವರಾಜು, ಹರೀಶ್ ಗೌಡ, ಅಂದಾನಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದರು.