ನ್ಯೂಸ್

ಸದೃಢ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಿ

ನಂಜನಗೂಡು ನಗರದ ತಾಲೂಕು ಕ್ರೀಡಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಶಾಸಕ ಬಿ. ಹರ್ಷವರ್ಧನ್ ಮಾತನಾಡಿದರು.

ನಂಜನಗೂಡು: ಸಂವಿಧಾನದತ್ತವಾಗಿ ಲಭ್ಯವಾಗಿರುವ ಮತ ಚಲಾವಣೆಯ ಹಕ್ಕನ್ನು ಸಮರ್ಥವಾಗಿ ಬಳಸಿಕೊಂಡು ಸದೃಢ ರಾಷ್ಟ್ರ ನಿರ್ಮಾಣಕ್ಕೆ ಮತದಾರರು ಮುಂದಾಗಬೇಕು ಎಂದು ಶಾಸಕ ಬಿ. ಹರ್ಷವರ್ಧನ್ ಹೇಳಿದರು.
ಗುರುವಾರ ನಗರದ ತಾಲೂಕು ಕ್ರೀಡಾಂಗಣದ ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಿದ್ದ 74ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದರು.


ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಯೊಬ್ಬ ಅರ್ಹ ಭಾರತೀಯನಿಗೂ ಮತದಾನದ ಹಕ್ಕನ್ನು ನೀಡಿದ್ದಾರೆ. ಆದರೆ ಕೆಲವರು ವ್ಯವಸ್ಥೆಯಲ್ಲಿ ಕಂಡು ಬರುವ ಲೋಪದ ಹೆಸರಿನಲ್ಲಿ ಮತದಾನದಿಂದ ಹೊರಗುಳಿಯುತ್ತಿದ್ದಾರೆ. ಅದರಲ್ಲೂ ಕೆಲ ವಿದ್ಯಾವಂತರೇ ಚುನಾವಣೆ ದಿನ ಮತದಾನದಿಂದ ಹೊರಗುಳಿದು ಪ್ರವಾಸಕ್ಕೆ ತೆರಳುತ್ತಾರೆ. ಇನ್ನು ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ತರವಾಗಿದ್ದು ಶೇ.35ಕ್ಕೂ ಹೆಚ್ಚು ಪ್ರಮಾಣದಲ್ಲಿರುವ ಯುವ ಜನರು ಚುನಾವಣೆಯನ್ನು ಗಂಭೀರವಾಗಿ ಸ್ವೀಕರಿಸಿ ಕಡ್ಡಾಯವಾಗಿ ತಮ್ಮ ಹಕ್ಕು ಚಲಾವಣೆಗೆ ಮುಂದಾಗಬೇಕು ಎಂದು ಸಲಹೆ ನೀಡಿದರು.


ಇದಕ್ಕೂ ಮುನ್ನ ತಹಸೀಲ್ದಾರ್ ಶಿವಮೂರ್ತಿ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು. ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ದೇಶ ಭಕ್ತಿಯನ್ನು ಬಿಂಬಿಸುವ ಗೀತೆಗಳಿಗೆ ಸಾಮೂಹಿಕ ನೃತ್ಯ ಪ್ರದರ್ಶಿಸಿ ಗಮನ ಸೆಳೆದರು.


ವಿವಿಧ ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ತೋರಿರುವ 40 ಜನರನ್ನು ತಾಲೂಕು ಆಡಳಿತದಿಂದ ಗೌರವಿಸಲಾಯಿತು. ಸಮಾರಂಭದಲ್ಲಿ ನಗರಸಭೆ ಅಧ್ಯಕ್ಷ ಎಚ್.ಎಸ್. ಮಹದೇವಸ್ವಾಮಿ, ಉಪಾಧ್ಯಕ್ಷೆ ನಾಗಮಣಿ ಶಂಕರಪ್ಪ, ಸದಸ್ಯರಾದ ಸಿದ್ದರಾಜು, ಮೀನಾಕ್ಷಿ, ಗಾಯತ್ರಿ, ಮಹದೇವಮ್ಮ, ಕ್ಷೇತ್ರ ಶಿಕ್ಷಣಾಧಿಕಾರಿ ರಾಜು, ತಾಲೂಕು ಆರೋಗ್ಯಾಧಿಕಾರಿ ಡಾ.ಈಶ್ವರ್, ಕಂದಾಯ ನಿರೀಕ್ಷಕ ಪ್ರಕಾಶ್‌ಗೌಡ ಮತ್ತಿತರರು ಇದ್ದರು.