ಬೆಂಗಳೂರು:ದ್ವೇಷ ಭಾಷಣದ ಆರೋಪದ ಮೇಲೆ ಬಿಜೆಪಿಯ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ತೇಜಸ್ವಿ ಸೂರ್ಯ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿ ಮತ್ತಿತರರ ವಿರುದ್ಧ ಕ್ರಮ ಕೈಗೊಂಡು, ಅಂತಹ ಭಾಷಣಗಳು ಮರುಕಳಿಸದಂತೆ ಮಾಡುವಲ್ಲಿ ವಿಫಲವಾಗಿರುವ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಮೊಹಮ್ಮದ್ ಖಲೀಮುಲ್ಲಾ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ, ಪ್ರತಿವಾದಿಗಳಾಗಿರುವ ಬಿಜೆಪಿ ನಾಯಕರು ಮಾಡಿರುವ ದ್ವೇಷ ಭಾಷಣಗಳು ಮಾಧ್ಯಮ, ಸಾಮಾಜಿಕ ಮಾಧ್ಯಮಗಳಿಂದ ತಿಳಿದು ಬಂದಿದೆ. ಒಂದು ಧರ್ಮವನ್ನು ಗುರಿಯಾಗಿಸಿ ಅವರು ದಾಳಿ ನಡೆಸಿದ್ದಾರೆ. ಈ ವಿಚಾರವಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಯಾವುದೇ ಕ್ರಮಕೈಗೊಳ್ಳಲಾಗಿಲ್ಲ. ಸುಪ್ರೀಂಕೋರ್ಟ್ ನಿರ್ದೇಶನದಂತೆ ಈ ರೀತಿ ಭಾಷಣ ಮಾಡುವವರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಕೋರಿದರು.
ಈ ವೇಳೆ ಅರ್ಜಿದಾರ ಯಾವ ವೃತ್ತಿ ಮಾಡುತ್ತಿದ್ದಾರೆ ಎಂದು ಪೀಠ ಕೇಳಿತು. ಇದಕ್ಕೆ ವಕೀಲರು ಮಾಹಿತಿ ಪಡೆದು ತಿಳಿಸುವುದಾಗಿ ಹೇಳಿದರು. ಅಲ್ಲದೆ, ಹಿರಿಯ ವಕೀಲರು ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಯಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಅರ್ಜಿ ವಿಚಾರಣೆ ಮುಂದೂಡಬೇಕು ಎಂದು ಕೋರಿದರು.
ಸಹದ್ಯೋಗಿ ವಕೀಲರಿಂದ ಮಾಹಿತಿ ಪಡೆದು ಅರ್ಜಿದಾರರು ಸಿವಿಲ್ ಗುತ್ತಿಗೆದಾರರಾಗಿದ್ದು, ಸಾಮಾಜಿಕ ಕಾರ್ಯಕರ್ತರಾಗಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.
ವಾದ ಆಲಿಸಿದ ನ್ಯಾಯಪೀಠ ಅರ್ಜಿಯು ತುಂಬಾ ಸಾಮಾನ್ಯವಾಗಿದ್ದು, ಇವುಗಳನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಎಂದು ಪರಿಗಣಿಸಲಾಗದು. ಸಾರ್ವಜನಿಕ ಹಿತಾಸಕ್ತಿ ಹೊರತುಪಡಿಸಿ ಬೇರೆ ಉದ್ದೇಶವನ್ನೂ ಈ ಅರ್ಜಿ ಹೊಂದಿದೆ. ರಾಜಕೀಯ ಮತ್ತು ಧರ್ಮದ ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ರೂಪದಲ್ಲಿ ಸಲ್ಲಿಕೆಯಾಗಿರುವ ಅರ್ಜಿ ಪುರಸ್ಕರಿಸಲಾಗದು ಎಂದು ಪೀಠ ತಿಳಿಸಿತು.
ಅಲ್ಲದೆ, ಜತೆಗೆ ವೇದಿಕೆಯನ್ನು ಕ್ಷುಲ್ಲಕ ಅರ್ಜಿಗಳನ್ನು ಸಲ್ಲಿಸುವ ಮೂಲಕ ಏಕೆ ದುರ್ಬಳಕೆ ಮಾಡಿಕೊಳ್ಳುತ್ತೀರಿ? ನಿಮ್ಮ ಅರ್ಜಿದಾರರು ಏನು ಮಾಡುತಿದ್ದಾರೆ ಎಂಬುದು ನಿಮಗೆ ತಿಳಿದಿಲ್ಲ ಎಂದರೆ ಏಕೆ ಅರ್ಜಿ ಸಲ್ಲಿಸುತ್ತೀರಿ? ಸಿವಿಲ್ ಕಾಂಟ್ರ್ಯಾಕ್ಟರ್ ಇಂಥ ಅನ್ಸಿವಿಲ್ ಅರ್ಜಿ ಸಲ್ಲಿಸಿದ್ದಾರೆಯೇ? ಎಂದು ಮೌಖಿಕವಾಗಿ ಕಿಡಿಕಾರಿತು.