ನ್ಯೂಸ್

ಸ್ಥಳೀಯ ಸಂಸ್ಥೆಗಳ ಚುನಾವಣೆ ವಿಳಂಬಕ್ಕೆ ಶಿಸ್ತುಕ್ರಮ ಕೈಗೊಳ್ಳಿ

ಶಿವಮೊಗ್ಗ: ಹೈಕೋರ್ಟ್, ಸುಪ್ರೀಂ ಕೋರ್ಟ್ ಆದೇಶಗಳನ್ನು ಉಲ್ಲಂಘಿಸಿ ರಾಜ್ಯ ಸರ್ಕಾರ ಗ್ರಾಪಂ, ತಾಪಂ ಮತ್ತು ಜಿಪಂ ಚುನಾವಣೆಗಳನ್ನು ನಡೆಸದಿರುವುದರಿಂದ ರಾಜ್ಯ ಚುನಾವಣಾ ಆಯೋಗವು ಮುಖ್ಯಮಂತ್ರಿ ಹಾಗೂ ಸಚಿವರ ಮೇಲೆ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ನ ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್ ಆಗ್ರಹಿಸಿದರು.

ರಾಜ್ಯದ 187 ಸ್ಥಳೀಯ ಸಂಸ್ಥೆಗಳ ಅವಧಿ ಮುಂಬರುವ ನವೆಂಬರ್‌ಗೆ ಮುಕ್ತಾಯವಾಗಲಿದೆ. ರಾಜ್ಯದಲ್ಲಿ ಜಿಪಂ ಮತ್ತು ತಾಪಂ ಚುನಾವಣೆಗಳು ಐದು ವರ್ಷಗಳಿಂದ ನಡೆದಿಲ್ಲ. ಹಿಂದಿನ ಬಿಜೆಪಿ ಸರ್ಕಾರ ಎರಡು ವರ್ಷ ಚುನಾವಣೆ ನಡೆಸದೆ ಕಾಲಹರಣ ಮಾಡಿದೆ. ಈಗಿನ ಸರ್ಕಾರ ಮೀಸಲಾತಿ ಮತ್ತು ಕ್ಷೇತ್ರ ವಿಂಗಡಣೆ ನೆಪವೊಡ್ಡಿ ಪಂಚಾಯತ್‌ರಾಜ್ ಕಾಯ್ದೆ ಮೂಲ ಆಶಯಕ್ಕೆ ಧಕ್ಕೆ ಬರುವ ರೀತಿ ಕಾಲದಿಂದ ಕಾಲಕ್ಕೆ ಕೋರ್ಟ್ ಆದೇಶಗಳಿದ್ದರೂ ಚುನಾವಣೆಗಳನ್ನು ಮುಂದೂಡುತ್ತಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ದೂರಿದರು.

ರಾಜ್ಯದ ಮುಖ್ಯ ಚುನಾವಣಾ ಆಯುಕ್ತ ಜಿ.ಎಸ್.ಸಂಗ್ರೇಶಿ ಆ.4ರಂದು ಪತ್ರಿಕಾಗೋಷ್ಠಿಯಲ್ಲಿ ಚುನಾವಣೆ ವಿಳಂಬಕ್ಕೆ ಹೊಣೆಗಾರರಾದ ಅಧಿಕಾರಿಗಳನ್ನು ಜೈಲಿಗೆ ಕಳಿಸಬೇಕಾದೀತು ಎಂದು ಎಚ್ಚರಿಸಿದ್ದಾರೆ. ವಾಸ್ತವವಾಗಿ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಅಧಿಕಾರಿಗಳ ಮೇಲೆ ಹಿಡಿತ ಸಾಧಿಸಿದೆ. ಸರ್ಕಾರ ಮುಖ್ಯ ಕಾರ್ಯದರ್ಶಿಗಳನ್ನೊಳಗೊಂಡ ಎಲ್ಲ ಅಧಿಕಾರಿಗಳ ಮೇಲೆ ದಬ್ಬಾಳಿಕೆ ನಡೆಸುತ್ತಿದೆ ಎಂದು ಆರೋಪಿಸಿದರು.

ರಾಜ್ಯ ಮುಖ್ಯ ಚುನಾವಣಾ ಆಯುಕ್ತರು ಕಾನೂನಿನಲ್ಲಿ ಅವಕಾಶವಿದ್ದರೆ ಚುನಾವಣೆಗಳನ್ನು ಮುಂದೂಡುತ್ತ ಬಂದಿರುವ ಹಿಂದಿನ ಸಿಎಂ ಬಸವರಾಜ ಬೊಮ್ಮಾಯಿ, ಈಗಿನ ಸಿಎಂ ಸಿದ್ದರಾಮಯ್ಯ, ಪಂಚಾಯತ್‌ರಾಜ್ ಸಚಿವ ಹಾಗೂ ನಗರಾಭಿವೃದ್ಧಿ ಸಚಿವರ ಮೇಲೆ ಶಿಸ್ತುಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಟ್ರಸ್ಟ್ ಪ್ರಮುಖರಾದ ಹೊಳೆಮಡಿಲು ವೆಂಕಟೇಶ್, ಜನಮೇಜಿರಾವ್, ಅರಸಾಳು ರಂಗನಾಥ್, ಎಚ್.ಎಂ.ಸಂಗಯ್ಯ, ಕೊಂಡಜ್ಜಿ ವಿಜಯಕುಮಾರ್ ಸುದ್ದಿಗೋಷ್ಠಿಯಲ್ಲಿದ್ದರು.