ಬೆಂಗಳೂರು : ನಗರ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿರುವ ಪಾರಂಪರಿಕ ಕಟ್ಟಡದ ನವೀಕರಣ ಹಾಗೂ ಹೊಸ ಕಟ್ಟಡ ನಿರ್ಮಾಣ ಯೋಜನೆಗೆ 19 ಕೋಟಿ ರೂ. ಅನುದಾನವನ್ನು ಸರ್ಕಾರ ಬಿಡುಗಡೆ ಮಾಡಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ನಗರದ ಆಯುಕ್ತರ ಕಚೇರಿಗೆ ಬುಧವಾರ ಸಂಜೆ ಭೇಟಿ ನೀಡಿದ ಗೃಹ ಸಚಿವರು, ಹಳೇ ಕಟ್ಟಡದ ನವೀಕರಣ ಸಂಬಂಧ ಸ್ಥಳ ಪರಿಶೀಲನೆ ನಡೆಸಿದರು. ಬಳಿಕ ಅಧಿಕಾರಿಗಳ ಜತೆ ಸಭೆ ನಡೆಸಿದ ಸಚಿವರು, ಐತಿಹಾಸಿಕ ಕಟ್ಟಡಗಳನ್ನು ಉಳಿಸಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಮೊದಲ ಹಂತವಾಗಿ ಈ ಯೋಜನೆಗೆ 19 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಮುಂದಿನ ಅಯವಯ್ಯಯದಲ್ಲಿ ಹೆಚ್ಚಿನ ಅನುದಾನ ಪಡೆಯಲು ಯತ್ನಿಸಲಾಗುತ್ತದೆ ಎಂದರು.
ಪೂರ್ಣ ಪ್ರಮಾಣದ ಮತ್ತು ಆಧುನಿಕ ಸೌಲಭ್ಯವುಳ್ಳ ಹೊಸ ಕಟ್ಟಡ ನಿರ್ಮಿಸಲು ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಗೃಹ ಸಚಿವರು ಸೂಚಿಸಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಹೆಚ್ಚುವರಿ ಮುಖ್ಯಕಾರ್ಯದರ್ಶಿ, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ರಜನೀಶ್ ಗೋಯೆಲ್, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್, ಆಯುಕ್ತ ಕಮಲ್ ಪಂತ್ ಹಾಗೂ ಹೆಚ್ಚುವರಿ ಆಯುಕ್ತರಾದ ಸೌಮೆಂದು ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.