ನ್ಯೂಸ್

ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕಸ್ಥಿತಿಗತಿಗಳ ಸಮೀಕ್ಷೆ / ವ್ಯವಸ್ಥಿತ ಹಾಗೂ ನಿಖರ ಸಮೀಕ್ಷೆ ನಡೆಸಲು ಸಜ್ಜಾಗಿ / ಡಾ.ಎಂ.ಆರ್.ರವಿ

ವಿಜಯವಾಣಿ ಸುದ್ದಿಜಾಲ ಕೋಲಾರ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆ ಕೈಗೊಂಡಿದ್ದು, ಜಿಲ್ಲೆಯಲ್ಲಿ ಮೊದಲನೆ ಹಂತವಾಗಿ ಜಿಯೋ ಟ್ಯಾಗಿಂಗ್ ಕಾರ್ಯ ಪ್ರಗತಿಯಲ್ಲಿದ್ದು, ಎರಡನೇ ಹಂತದಲ್ಲಿ ಸೆ.೨೦ ರಿಂದ ಅಕ್ಟೋಬರ್ ೭ ರವರೆಗೆ ಸಮೀಕ್ಷಾ ಕಾರ್ಯ ನಡೆಯಲಿದೆ. ಸಂಬAಧಿಸಿದ ಅಧಿಕಾರಿಗಳು ಸರ್ವೇ ಕಾರ್ಯಕ್ಕೆ ಗಣತಿದಾರರನ್ನು ನೇಮಿಸಿ ಪಟ್ಟಿಯನ್ನು ಅಂತಿಮಗೊಳಿಸುವAತೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿಯ ನ್ಯಾಯಾಂಗ ಸಭಾಂಗಣದಲ್ಲಿ ಸೋಮವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜಿಲ್ಲೆಯಲ್ಲಿ ಇಂಧನ ಇಲಾಖೆಯಿಂದ ಈಗಾಗಲೇ ಮನೆಗಳಿಗೆ ಜಿಯೋ ಟ್ಯಾಗ್ ಮಾಡಿ ಸ್ಟಿಕರ್ ಅಂಟಿಸಿ ೧೫೦ ಮನೆಗಳಿಗೆ ಒಂದು ಬ್ಲಾಕ್‌ನ್ನು ಗುರುತಿಸಿ, ರೂಟ್ ಮ್ಯಾಪ್ ಹಾಗೂ ಬ್ಲಾಕ್ ಮ್ಯಾಪ್ ಮಾಡುವ ಕಾರ್ಯ ಆರಂಭಿಸಲಾಗಿದ್ದು, ಈ ವಾರದೊಳಗೆ ಟ್ಯಾಗಿಂಗ್ ಕಾರ್ಯ ಪೂರ್ಣಗೊಳಿಸುವಂತೆ ಸೂಚಿಸಿದರು.

ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ತಾಲೂಕಾ ಮಟ್ಟದ ಸಮನ್ವಯ ಸಮಿತಿಯಲ್ಲಿ ತಹಶೀಲ್ದಾರ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ಪುರಸಭೆ ಮುಖ್ಯಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಹಾಯಕ ನಿರ್ದೇಶಕರು ಸದಸ್ಯರುಗಳಾಗಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲ್ಲೂಕು ಕಲ್ಯಾಣಾಧಿಕಾರಿಗಳು ಸದಸ್ಯ ಕಾರ್ಯದರ್ಶಿಗಳಾಗಿ ಕಾರ್ಯ ನಿರ್ವಹಿಸಲು ಸೂಚಿಸಿದರು.

ಮೊದಲನೇ ಹಂತದಲ್ಲಿ ಸಮೀಕ್ಷೆಗೆ ಸಂಬAಧಿಸಿದ ಜಿಯೋ ಟ್ಯಾಗ್ ಅಳವಡಿಸುವುದು. ಪ್ರತಿಯೊಂದು ಮನೆಯ ಆರ್ ಆರ್ ನಂಬರಿಗೆ ಜಿಯೋ ಟ್ಯಾಗಿಂಗ್ ಕಾರ್ಯ ನಿಗದಿತ ಅವಧಿಯೊಳಗೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿರುವ ೩೩೩೩೪೮ ಕುಟುಂಬಗಳ ಮನೆಗಳ ಆರ್ ಆರ್ ನಂಬರ್ ಗಳಿಗೆ ಜಿಯೋ ಟ್ಯಾಗಿಂಗ್ ಮಾಡುವ ಮೂಲಕ ಶೇ.೧೦೦ ರಷ್ಟು ಪ್ರಗತಿ ಸಾಧಿಸಬೇಕು. ಸಮೀಕ್ಷೆ ಕಾರ್ಯಕ್ಕಿಂತ ಮುನ್ನ ಆರ್.ಆರ್.ನಂಬರ್‌ಗಳನ್ನು ಗುರುತಿಸುವ ಕಾರ್ಯದಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು.

ಯಾವುದೇ ಕುಟುಂಬಗಳು ಕೈಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು. ಇದರಿಂದ ಎರಡನೇ ಹಂತದಲ್ಲಿ ನಡೆಯುವ ಸಮೀಕ್ಷೆ ಕಾರ್ಯವನ್ನು ವ್ಯವಸ್ಥಿತವಾಗಿ ಹಾಗೂ ವೈಜ್ಞಾನಿಕವಾಗಿ ಮತ್ತು ನಿಖರವಾಗಿ ಕಾರ್ಯಗತಗೊಳಿಸಲು ಅನುಕೂಲವಾಗಲಿರುವುದರಿಂದ ಮೊದಲನೇ ಹಂತದ ಕಾರ್ಯವನ್ನು ಅತ್ಯಂತ ಅಚ್ಚುಕಟ್ಟಾಗಿ ಯಾವುದೇ ಲೋಪಗಳಿಗೆ ಆಸ್ಪದ ನೀಡದೆ ನಿರ್ವಹಿಸುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರತಿ ೧೫೦ ಮನೆಗಳಿಗೆ ಒಬ್ಬ ಗಣತಿದಾರರಾಗಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರನ್ನು ನಿಯೋಜಿಸಬೇಕು. ಪ್ರತಿ ೧೫ ರಿಂದ ೨೦ ಗಣತಿದಾರರಿಗೆ ಒಬ್ಬರಂತೆ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರು, ಬಿಆರ್‌ಸಿಗಳು ಮೇಲ್ವಿಚಾರಕರಾಗಿ ನಿಗಾ ವಹಿಸಬೇಕು. ಪ್ರತಿ ೫೦ ಗಣತಿದಾರರಿಗೆ ಓರ್ವ ಮಾಸ್ಟರ್ ಟ್ರೇನರ್ ನಿಯೋಜನೆ ಮಾಡಬೇಕು. ಮಾಸ್ಟರ್ ಟ್ರೇನರ್ ಸಮೀಕ್ಷಾ ಕಾರ್ಯಗಳ ಕುರಿತು ಸಂಪೂರ್ಣ ಮಾಹಿತಿ ಹೊಂದಿರುವ ಮಾಸ್ಟರ್ ಟ್ರೇನರ್‌ಗಳನ್ನು ನಿಯೋಜಿಸಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಪ್ರವೀಣ್ ಪಿ ಬಾಗೇವಾಡಿ, ಅಪರ ಜಿಲ್ಲಾಧಿಕಾರಿ ಮಂಗಳ, ಉಪವಿಭಾಗಾಧಿಕಾರಿ ಡಾ. ಮೈತ್ರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ನಾರಾಯಣಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಗೀತಾ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕಿ ಅಲ್ಮಾಸ್ ಪರ್ವೀನ್ ತಾಜ್, ಜಿಲ್ಲಾ ಸಾಂಖ್ಯೆಕ ಅಧಿಕಾರಿ ರಮೇಶ್, ಎಲ್ಲಾ ತಾಲ್ಲೂಕಿನ ತಹಸೀಲ್ದಾರ್, ಕಾರ್ಯನಿರ್ವಾಹನಾಧಿಕಾರಿಗಳು ಸೇರಿದಂತೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಚಿತ್ರ ೦೧ ಕೆ.ಎಲ್.ಆರ್. ೦೩ : ಹಿಂದುಳಿದ ವರ್ಗಗಳ ಸಮೀಕ್ಷೆ ಕುರಿತು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಎಂ.ಆರ್.ರವಿ, ಡಾ.ಪ್ರವೀಣ್ ಪಿ.ಬಾಗೇವಾಡಿ, ಅಪರ ಜಿಲ್ಲಾಧಿಕಾರಿ ಮಂಗಳಾ, ಉಪ ವಿಭಾಗಾಧಿಕಾರಿ ಡಾ.ಮೈತ್ರಿ ಮುಂತಾದವರು ಇದ್ದರು.