ಯಾದಗಿರಿ: ನಗರದ ಹೊರ ವಲಯದಲ್ಲಿನ ನೂತನ ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್., ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಆಸ್ಪತ್ರೆಯ ಕಟ್ಟಡದ ಸುತ್ತಲು ಕಾಂಪೌಂಡ್ ನಿರ್ಮಾಣ, ರಸ್ತೆ ಹಾಗೂ ನೀರಿನ ವ್ಯವಸ್ಥೆಗೆ ಮೊದಲು ಗಮನ ಹರಿಸಬೇಕು. ಪ್ರಗತಿಯಲ್ಲಿರುವ ಕಾಮಗಾರಿ ವೇಗವಾಗಿ ಮುಗಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆಸ್ಪತ್ರೆಯ ವಿವಿಧ ವಾರ್ಡ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು ಜಿಲ್ಲಾಸ್ಪತ್ರೆಗೆ ಅಗತ್ಯವಾದ ಮೂಲಭೂತ ಸೌಕರ್ಯಗಳಾದ ವಿದ್ಯುತ್, ಕುಡಿಯುವ ನೀರು ಹಾಗೂ ಆಸ್ಪತ್ರಗೆ ಬರುವ ಜನತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಿಟಿಬಸ್ಗಳನ್ನು ಒದಗಿಸುವ ಮೂಲಕ ಬಡ ಜನತೆಗೆ ಅನುಕೂಲ ಮಾಡಿಕೊಡಬೇಕು. ಅಲ್ಲದೆ ಹೊಸ ಆಸ್ಪತ್ರೆಯಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಸೌಲಭ್ಯಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆಯ ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚೆಸಿದ ಅವರು, ಎಲ್ಲ ರೀತಿಯ ಅಗತ್ಯ ನೆರವು ಜಿಲ್ಲಾಡಳಿತದಿಂದ ನೀಡಲಾಗುವುದು ಎಂದು ತಿಳಿಸಿದರು. ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್ ಸೋನವಾಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಇಂದುಮತಿ ಪಾಟೀಲ್, ಡಾ.ಸಂಜೀವ್ ಕುಮಾರ್ ರಾಯಚೂರಕರ್ ಇದ್ದರು.