ಕ್ರೀಡೆ

ದುಬೈ ಪಿಚ್​ನ ಸಂಪೂರ್ಣ ಲಾಭ ಪಡೆಯುತ್ತಿದೆಯಾ Team India? ಸೆಮೀಸ್​ ಪ್ರವೇಶಿಸುತ್ತಿದ್ದಂತೆ ಇಂಗ್ಲೆಂಡ್ ಆಟಗಾರನ ಹೇಳಿಕೆ ವೈರಲ್​

ನವದೆಹಲಿ: ಹಾಲಿ ನಡೆಯುತ್ತಿರುವ ಚಾಂಪಿಯನ್ಸ್​ ಟ್ರೋಫಿಯಲ್ಲಿ ಭಾರತ (Team India) ಹಾಗೂ ನ್ಯೂಜಿಲೆಂಡ್ (Newzealand) ತಂಡಗಳು ಯಶಸ್ವಿಯಾಗಿ ಸೆಮಿಫೈನಲ್ ಪ್ರವೇಶಿಸಿದ ಮೊದಲೆರಡು ತಂಡಗಳಾಗಿದ್ದು, ಆತಿಥೇಯ ಪಾಕಿಸ್ತಾನಕ್ಕೆ ಭಾರೀ ಮುಖಭಂಗವನ್ನುಂಟು ಮಾಡಿದೆ. ಭದ್ರತೆಯ ಕಾರಣ ನೀಡಿ ಭಾರತ ತನ್ನೆಲ್ಲಾ ಪಂದ್ಯಗಳನ್ನು ದುಬೈನಲ್ಲಿ (ಹೈಬ್ರಿಡ್ ಮಾದರಿ) ಆಡುತ್ತಿದ್ದು, ಭಾರತ ತಂಡಕ್ಕೆ ದುಬೈ ಸ್ಟೇಡಿಯಂನ ಲಾಭ ಪಡೆಯುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು, ಇಂಗ್ಲೆಂಡ್​ ತಂಡದ ನಾಯಕ ಜೋಸ್ ಬಟ್ಲರ್ ಈ ಬಗ್ಗೆ ಮಾತನಾಡಿದ್ದಾರೆ.

ಇಂಗ್ಲೆಂಡ್ ಹಾಗೂ ಅಫ್ಘಾನಿಸ್ತಾನ ವಿರುದ್ಧದ ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಜೋಸ್​ ಬಟ್ಲರ್​ಗೆ ಪತ್ರಕರ್ತರೊಬ್ಬರು, ಭಾರತ (Team India) ದುಬೈನಲ್ಲಿ ಆಡುತ್ತಿರುವುದರಿಂದ ಅದರ ಲಾಭವನ್ನು ಪಡೆಯುತ್ತಿದೆಯಾ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಜೋಸ್ ಬಟ್ಲರ್ ಪ್ರತಿಕ್ರಿಯಿಸಿದ್ದು, ನೀಡಿದ ಉತ್ತರ ಎಲ್ಲರ ಗಮನ ಸೆಳೆಯುತ್ತಿದೆ.

ಈ ಸಮಯದಲ್ಲಿ ಹೆಚ್ಚು ಚಿಂತಿಸುವ ವಿಚಾರವಲ್ಲ ಎಂದು ನಾನು ಭಾವಿಸುತ್ತೇನೆ. ನಾವು ಸಂಪೂರ್ಣವಾಗಿ ಅಫ್ಘಾನಿಸ್ತಾನ ವಿರುದ್ಧದ ಪಂದ್ಯದ ಮೇಲೆ ನಾವು ನಮ್ಮ ಗುರಿಯನ್ನು ಇಟ್ಟಿದ್ದು, ಪಂದ್ಯದ ಕುರಿತಾಗಿ ಅಷ್ಟೇ ಮಾತನಾಡುತ್ತೇವೆ. ಇದೊಂದು ವಿಶಿಷ್ಟವಾದ ಟೂರ್ನಿಯಾಗಿದ್ದು, ಒಂದು ತಂಡವು ಬೇರೆ ಜಾಗದಲ್ಲಿ ಆಡುತ್ತಿರುವುದು ಅಷ್ಟೇನು ವ್ಯತ್ಯಾಸವಾಗುವುದಿಲ್ಲ ಎಂದು ಸೂಕ್ಷ್ಮವಾಗಿ ಉತ್ತರಿಸಿದ್ದಾರೆ.

ಆತಿಥೇಯರಿಗೆ ಭಾರೀ ಮುಖಭಂಗ 

2025 ರ ಚಾಂಪಿಯನ್ಸ್ ಟ್ರೋಫಿಯ (Champions Trophy) ಸೆಮಿಫೈನಲ್ ಸ್ಪರ್ಧೆಯಲ್ಲಿ ಉಳಿಯಲು ಪಾಕಿಸ್ತಾನಕ್ಕೆ ಬಾಂಗ್ಲಾದೇಶ ಹಾಗೂ ನ್ಯೂಜಿಲೆಂಡ್ ನಡುವಿನ ಪಂದ್ಯದ ಫಲಿತಾಂಶ ಬಾಂಗ್ಲಾದೇಶದ ಪರವಾಗಿ ಬರಬೇಕಿತ್ತು. ಆದರೆ ಈ ಪಂದ್ಯದಲ್ಲಿ ನ್ಯೂಜಿಲೆಂಡ್‌ ಗೆಲುವು ಸಾಧಿಸುವ ಮೂಲಕ ಪಾಕಿಸ್ತಾನದ ಭರವಸೆಯನ್ನು ಹುಸಿಗೊಳಿಸಿತು. ತನ್ನ ಹಾಲಿ ಚಾಂಪಿಯನ್ ಪಟ್ಟವನ್ನು ಉಳಿಸಿಕೊಳ್ಳುವ ನಿರೀಕ್ಷೆಯೊಂದಿಗೆ ಈ ಟೂರ್ನಿಗೆ ಆತಿಥ್ಯವಹಿಸಿದ್ದ ಪಾಕಿಸ್ತಾನ ತಂಡಕ್ಕೆ ಇದು ದೊಡ್ಡ ಹಿನ್ನಡೆಯಾಗಿದ್ದು, ಭಾರೀ ಮುಖಭಂಗವನ್ನುಂಟು ಮಾಡಿದೆ.

ಪಾಕಿಸ್ತಾನದ ಜೊತೆಗೆ ಬಾಂಗ್ಲಾದೇಶ ತಂಡವೂ ಸೆಮಿಫೈನಲ್ ರೇಸ್‌ನಿಂದ ಹೊರಬಿದ್ದಿದೆ. ಈ ಎರಡೂ ತಂಡಗಳು ಈ ಟೂರ್ನಿಯಲ್ಲಿ ಇದುವರೆಗೆ ಒಂದೇ ಒಂದು ಪಂದ್ಯವನ್ನು ಗೆದ್ದಿಲ್ಲ. ಪಾಕಿಸ್ತಾನ ತನ್ನ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೋಲನ್ನು ಅನುಭವಿಸಿದರೆ, ಎರಡನೇ ಪಂದ್ಯದಲ್ಲಿ ಭಾರತದ ವಿರುದ್ಧ ಸೋಲು ಕಂಡಿತು. ಮತ್ತೊಂದೆಡೆ, ಬಾಂಗ್ಲಾದೇಶ ತಂಡವು ನ್ಯೂಜಿಲೆಂಡ್‌ಗಿಂತ ಮೊದಲು ಭಾರತ ತಂಡದ (Team India) ವಿರುದ್ಧದ ಪಂದ್ಯದಲ್ಲಿ ಸೋಲು ಕಂಡಿದ್ದು, ಈ ಎರಡೂ ತಂಡಗಳು ಗುಂಪು ಹಂತದಲ್ಲಿ ತಮ್ಮ ಕೊನೆಯ ಪಂದ್ಯವನ್ನು ಪರಸ್ಪರ ವಿರುದ್ಧ ಆಡಲಿವೆ. ಇದು ಪಾಯಿಂಟ್ ಟೇಬಲ್ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ.