ನವದೆಹಲಿ: ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ಗೆ ಮುಹೂರ್ತ ನಿಗದಿಯಾಗಿದ್ದು, 2025ರ ಜೂನ್ 11-15ರವರೆಗೆ ಕ್ರಿಕೆಟ್ ಕಾಶಿ ಎಂದೇ ಹೆಸರುವಾಸಿಯಾಗಿರುವ ಲಾರ್ಡ್ಸ್ನಲ್ಲಿ ನಡೆಯಲಿದ್ದು, ಐಸಿಸಿ ಈ ಬಗ್ಗೆ ಪ್ರಕಟಣೆಯನ್ನು ಹೊರಡಿಸಿದೆ.
ಇದಕ್ಕೂ ಮುನ್ನ ನಡೆದ 2021ರ ಮತ್ತು 2023ರ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯಗಳಿಗೆ ಇಂಗ್ಲೆಂಡ್ನ ಓವಲ್ ಮೈದಾನ ಆತಿಥ್ಯವಹಿಸಿತ್ತು. ಈ ಬಾರಿ ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ಅಂತಿಮ ಹಣಾಹಣಿಯನ್ನು ಆಯೋಜಿಸಲು ಐಸಿಸಿ ನಿರ್ಧರಿಸಿದೆ.
ಫೈನಲ್ ಪಂದ್ಯಕ್ಕೆ ಮಳೆ ಅಡಚಣೆ ಉಂಟು ಮಾಡಿದರೆ ಅಥವಾ ಇನ್ನಿತರ ಕಾರಣಗಳಿಂದ ದಿನದಾಟ ನಡೆಯದಿದ್ದರೆ ಮೀಸಲು ದಿನದಾಟದ ಮೂಲಕ ಪಂದ್ಯವನ್ನು ಪೂರ್ಣಗೊಳಿಸಲಾಗುತ್ತದೆ. ಇದಕ್ಕಾಗಿ ಜೂನ್ 16 ಮೀಸಲು ದಿನವಾಗಿ ಘೋಷಿಸಲಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗುವ ತಂಡಗಳಾವುವು ಎಂಬುದು ಇನ್ನೂ ನಿರ್ಧಾರವಾಗಿಲ್ಲ.
ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕಪಟ್ಟಿಯಲ್ಲಿ ಭಾರತ ತಂಡ ಅಗ್ರಸ್ಥಾನದಲ್ಲಿದ್ದು, ಆಸ್ಟ್ರೇಲಿಯಾ ತಂಡ ಎರಡನೇ ಸ್ಥಾನದಲ್ಲಿದೆ. ಮೂರನೇ ಸ್ಥಾನದಲ್ಲಿ ನ್ಯೂಜಿಲೆಂಡ್ ತಂಡವಿದ್ದು, ನಾಲ್ಕನೇ ಸ್ಥಾನದಲ್ಲಿ ಇಂಗ್ಲೆಂಡ್ ತಂಡವಿದೆ. ಟೀಮ್ ಇಂಡಿಯಾವು ಮುಂಬರುವ ಬಾಂಗ್ಲಾದೇಶ ಹಾಗೂ ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧಿಸಿದರೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಫೈನಲ್ಗೇರುವುದು ಖಚಿತವಾಗಲಿದೆ.
ಮೂರನೇ ಸ್ಥಾನದಲ್ಲಿರುವ ನ್ಯೂಜಿಲೆಂಡ್ ತಂಡವು ಮುಂದಿನ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾವನ್ನು ಸೋಲಿಸಿ ಎರಡನೇ ಸ್ಥಾನಕ್ಕೇರುವ ಅವಕಾಶ ಹೊಂದಿದೆ. ಹಾಗೆಯೇ ಇದೀಗ ನಾಲ್ಕನೇ ಸ್ಥಾನದಲ್ಲಿರುವ ಇಂಗ್ಲೆಂಡ್ ತಂಡವು ಪಾಕಿಸ್ತಾನ ಹಾಗೂ ನ್ಯೂಜಿಲೆಂಡ್ ವಿರುದ್ಧದ ಸರಣಿಗಳಲ್ಲಿ ಅಮೋಘ ಗೆಲುವು ಸಾಧಿಸಿದರೆ ಫೈನಲ್ಗೇರಬಹುದಾಗಿದೆ.
ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ ಗೆದ್ದು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪ್ರವೇಶಿಸುವ ಕನಸನ್ನು ಕಂಡಿದ್ದ ಪಾಕಿಸ್ತಾನಕ್ಕೆ ಪ್ರವಾಸಿ ತಂಡವು ತವರಲ್ಲೇ ಶಾಕ್ ನೀಡಿದ್ದು, WTC ಫೈನಲ್ ಕನಸನ್ನು ಕಮರಿ ಹೋಗುವಂತೆ ಮಾಡಿದೆ.