ಕ್ರೀಡೆ

ಓಡಿ ಬಂದು ಅಪ್ಪಿಕೊಂಡು ಭಾವುಕರಾದ ಕೊಹ್ಲಿಗೆ ಪತ್ನಿ ಅನುಷ್ಕಾ ಶರ್ಮಾ ಏನ್​ ಮಾಡಿದ್ರು ನೋಡಿ... ವಿಡಿಯೋ ವೈರಲ್​! Anushka Sharma

Anushka Sharma : ಐಪಿಎಲ್ 18ನೇ ಆವೃತ್ತಿಗೆ ವಿದ್ಯುಕ್ತ ತೆರೆ ಬಿದ್ದಿದೆ. ನಿನ್ನೆ (ಜೂನ್​ 03) ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಫೈನಲ್​ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಪಂಜಾಬ್ ಕಿಂಗ್ಸ್ (ಪಿಬಿಕೆಎಸ್) ನಡುವಿನ ರೋಚಕ ಪಂದ್ಯದಲ್ಲಿ, ಆರ್‌ಸಿಬಿ ಜಯಭೇರಿ ಬಾರಿಸಿತು. ಇದರೊಂದಿಗೆ, ಆರ್‌ಸಿಬಿಯ 18 ​​ವರ್ಷಗಳ ಕನಸು ಅಂತಿಮವಾಗಿ ನನಸಾಗಿದೆ. ಈ ಗೆಲುವಿನ ನಂತರ ಆರ್‌ಸಿಬಿ ಸ್ಟಾರ್​ ಆಟಗಾರ ವಿರಾಟ್ ಕೊಹ್ಲಿ ಭಾವುಕರಾದರು.

ಕೊನೆಯ ಓವರ್​ನಲ್ಲಿ ಗೆಲುವು ಖಚಿತವಾಗುತ್ತಿದ್ದಂತೆ ಬೌಂಡರಿ ಲೈನ್‌ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ವಿರಾಟ್ ಕೊಹ್ಲಿ ಚಿಕ್ಕ ಮಗುವಿನಂತೆ ಅಳುತ್ತಿದ್ದರು. ಕೊನೆಯ ಚೆಂಡು ಮುಗಿದ ತಕ್ಷಣ, ಮೊಣಕಾಲುಗಳ ಮೇಲೆ ಕುಳಿತು ಕೊಹ್ಲಿ ಭಾವುಕರಾದರು. ಮೈದಾನದಲ್ಲೇ ಕಣ್ಣೀರು ಸುರಿಸಿದರು. ಮತ್ತೊಂದೆಡೆ, ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಸ್ಟ್ಯಾಂಡ್‌ನಲ್ಲಿ ಸಂಭ್ರಮಾಚರಣೆ ಮಾಡಿದರು. ಆರ್‌ಸಿಬಿ ಗೆಲುವು ಸಾಧಿಸುತ್ತಿದ್ದಂತೆ ತನ್ನ ಭಾವನೆಗಳನ್ನು ತಡೆದುಕೊಳ್ಳಲು ಸಾಧ್ಯವಾಗದೇ ಸಂತೋಷದಿಂದ ಜಿಗಿದು ಸಂಭ್ರಮಿಸಿದರು.

ಆರ್‌ಸಿಬಿ ಗೆಲುವಿನ ನಂತರ ಮೈದಾನದಲ್ಲಿ ಸಂಭ್ರಮಿಸುತ್ತಿದ್ದ ವಿರಾಟ್ ಕೊಹ್ಲಿ, ನಂತರ ತಮ್ಮ ಪತ್ನಿ ಅನುಷ್ಕಾ ಶರ್ಮಾ ಬಳಿಗೆ ಓಡಿ ಬಂದರು. ಬಳಿಕ ಅನುಷ್ಕಾ ಅವರನ್ನು ಗಟ್ಟಿಯಾಗಿ ಅಪ್ಪಿಕೊಂಡರು. ಆ ಸಮಯದಲ್ಲಿ ವಿರಾಟ್ ಕೊಹ್ಲಿ ಕಣ್ಣೀರು ಹಾಕಿದರು. ಅನುಷ್ಕಾ ಶರ್ಮಾ ಕೂಡ ವಿರಾಟ್ ಅವರನ್ನು ಅಪ್ಪಿಕೊಂಡು ಭಾವುಕರಾದರು. ವಿರಾಟ್ ತಲೆಯಾಡಿಸಿ ಭುಜ ತಟ್ಟಿ ಅಭಿನಂದಿಸಿದರು. ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಭಿಮಾನಿಗಳು ಅಭಿನಂದನೆಗಳ ಮಹಾಪೂರವನ್ನೇ ಹರಿಸಿದ್ದಾರೆ. ನಿಜಕ್ಕೂ ಇದೊಂದು ಅದ್ಭುತ ಕ್ಷಣ ಎಂದು ಬಣ್ಣಿಸಿದ್ದಾರೆ.

ಇನ್ನು ಪಂದ್ಯದ ವಿಚಾರಕ್ಕೆ ಬಂದರೆ, ಫೈನಲ್​ ಪಂದ್ಯದಲ್ಲಿ ಟಾಸ್​ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ, ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 190 ರನ್ ಗಳಿಸಿತು. ವಿರಾಟ್ ಕೊಹ್ಲಿ (43 ರನ್​, 35 ಎಸೆತ, 3 ಬೌಂಡರಿ) ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಮಯಾಂಕ್ ಅಗರ್ವಾಲ್ (24), ರಜತ್ ಪಟಿದಾರ್ (26), ಲಿಯಾಮ್ ಲಿವಿಂಗ್‌ಸ್ಟೋನ್ (25), ಮತ್ತು ಜಿತೇಶ್ ಶರ್ಮಾ (24) ಉಪಯುಕ್ತ ರನ್​ಗಳ ಕಾಣಿಕೆ ನೀಡಿದರು. ಪಂಜಾಬ್ ಬೌಲರ್‌ಗಳಲ್ಲಿ ಅರ್ಷದೀಪ್ ಸಿಂಗ್ ಮತ್ತು ಜೇಮಿಸನ್ ತಲಾ ಮೂರು ವಿಕೆಟ್ ಪಡೆದರು. ವಿಜಯ್ ಕುಮಾರ್ ವೈಶಾಕ್ ಮತ್ತು ಚಾಹಲ್ ತಲಾ ಒಂದು ವಿಕೆಟ್ ಪಡೆದರು.

ಗುರಿ ಬೆನ್ನತ್ತಿದ ಪಂಜಾಬ್​ ಪರ ಶಶಾಂಕ್ ಸಿಂಗ್ (ಅಜೇಯ 61 ರನ್​, 30 ಎಸೆತ, 3 ಬೌಂಡರಿ, 6 ಸಿಕ್ಸರ್) ಮತ್ತು ಜೋಶ್ ಇಂಗ್ಲಿಷ್ (39 ರನ್​, 23 ಎಸೆತ, 1 ಬೌಂಡರಿ, 4 ಸಿಕ್ಸರ್) ಉತ್ತಮ ಪ್ರದರ್ಶನ ನೀಡಿದರು. ಆದರೆ, ಉಳಿದ ಬ್ಯಾಟ್ಸ್‌ಮನ್‌ಗಳು ಗುರಿಯನ್ನು ಬೆನ್ನಟ್ಟುವಲ್ಲಿ ವಿಫಲರಾದರು, ಪಂಜಾಬ್ ಕಿಂಗ್ಸ್ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 184 ರನ್‌ಗಳಿಗೆ ಸೀಮಿತವಾಯಿತು. ಆರ್‌ಸಿಬಿ ಬೌಲರ್‌ಗಳಲ್ಲಿ ಭುವನೇಶ್ವರ್ ಕುಮಾರ್ ಮತ್ತು ಕೃನಾಲ್ ಪಾಂಡ್ಯ ತಲಾ ಎರಡು ವಿಕೆಟ್ ಪಡೆದರು. ಯಶ್ ದಯಾಳ್, ಜೋಶ್ ಹ್ಯಾಜಲ್‌ವುಡ್ ಮತ್ತು ರೊಮಾರಿಯೊ ಶೆಫರ್ಡ್ ತಲಾ ಒಂದು ವಿಕೆಟ್ ಪಡೆದರು. (ಏಜೆನ್ಸೀಸ್​)