SRHvsRCB | ಅಭಿಷೇಕ್, ಇಶಾನ್, ಕ್ಲಾಸೆನ್ ಬ್ಯಾಟಿಂಗ್ ಅಬ್ಬರ
SRHvsRCB: ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ವಿರುದ್ಧ ಅಕ್ಷರಶಃ ರನ್‌ಗಳ ಮಳೆಯನ್ನೇ ಹರಿಸಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪ್ಯಾಟ್ ಕಮಿನ್ಸ್ ನೇತೃತ್ವದ ಹೈದರಾಬಾದ್, ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 255 ರನ್‌ಗಳ ಬೃಹತ್ ಮೊತ್ತವನ್ನು ಪೇರಿಸಿದೆ. ಪಂದ್ಯದ ಆರಂಭದಿಂದಲೇ ಆರ್‌ಸಿಬಿ ಬೌಲರ್‌ಗಳ ಮೇಲೆ ಸವಾರಿ ಮಾಡಿದ ಎಸ್‌ಆರ್‌ಹೆಚ್ ಓಪನರ್ ಅಭಿಷೇಕ್ ಶರ್ಮಾ ಕೇವಲ 22 ಎಸೆತಗಳಲ್ಲಿ 4 ಬೌಂಡರಿ ಹಾಗೂ 5 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 56 ರನ್ ಚಚ್ಚಿ ತಂಡಕ್ಕೆ ಸ್ಫೋಟಕ ಆರಂಭ ನೀಡಿದರು.
ಈ ಬಿರುಸಿನ ಆಟದ ಬಳಿಕ ಮೈದಾನಕ್ಕಿಳಿದ ಇಶಾನ್ ಕಿಶನ್ ಜವಾಬ್ದಾರಿಯುತ ಹಾಗೂ ಅಷ್ಟೇ ಆಕ್ರಮಣಕಾರಿ ಬ್ಯಾಟಿಂಗ್ ಪ್ರದರ್ಶಿಸಿದರು. 46 ಎಸೆತಗಳನ್ನು ಎದುರಿಸಿದ ಕಿಶನ್ 8 ಬೌಂಡರಿ ಮತ್ತು 3 ಸಿಕ್ಸರ್‌ಗಳೊಂದಿಗೆ 79 ರನ್ ಸಿಡಿಸಿ ಕೊನೆಯ ಎಸೆತದಲ್ಲಿ ಔಟಾದರು. ಮಧ್ಯಮ ಕ್ರಮಾಂಕದಲ್ಲಿ ಅಬ್ಬರಿಸಿದ ಹೆನ್ರಿಚ್ ಕ್ಲಾಸೆನ್ ಕೇವಲ 24 ಎಸೆತಗಳಲ್ಲಿ 5 ಸಿಕ್ಸರ್ ಹಾಗೂ 2 ಬೌಂಡರಿಗಳನ್ನು ಒಳಗೊಂಡಂತೆ 51 ರನ್ ಚಚ್ಚಿ ತಂಡದ ಮೊತ್ತವನ್ನು 250ರ ಗಡಿ ದಾಟಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು. ಕೊನೆಯಲ್ಲಿ ನಿತೀಶ್ ಕುಮಾರ್ ರೆಡ್ಡಿ ಕೇವಲ 12 ಎಸೆತಗಳಲ್ಲಿ 29 ರನ್ ಗಳಿಸಿ ಅಜೇಯರಾಗುಳಿದರು(ಏಜೆನ್ಸೀಸ್).