SRHvsRR: ಯುವ ಆಟಗಾರ ವೈಭವ್ ಸೂರ್ಯವಂಶಿ ಅವರ ಬಿರುಸಿನ ಬ್ಯಾಟಿಂಗ್ ಹಾಗೂ ಬೌಲರ್‌ಗಳ ಸಂಘಟಿತ ಪ್ರದರ್ಶನದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡವು ಐಪಿಎಲ್ 2026ರ ಎಲಿಮಿನೇಟರ್ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 47 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಬುಧವಾರ ನಡೆದ ಈ ಹೈವೋಲ್ಟೇಜ್ ಪಂದ್ಯದಲ್ಲಿ ಗೆಲುವು ದಾಖಲಿಸಿದ ರಾಜಸ್ಥಾನ್ ರಾಯಲ್ಸ್, ಕ್ವಾಲಿಫೈಯರ್-2 ಪಂದ್ಯಕ್ಕೆ ಅರ್ಹತೆ ಪಡೆದಿದ್ದು, ಅಲ್ಲಿ ಗುಜರಾತ್ ಟೈಟನ್ಸ್ ತಂಡವನ್ನು ಎದುರಿಸಲಿದೆ.
ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ದುಕೊಂಡ ಸನ್‌ರೈಸರ್ಸ್ ಹೈದರಾಬಾದ್ ನಿರ್ಧಾರವನ್ನು ರಾಜಸ್ಥಾನ್ ಬ್ಯಾಟರ್‌ಗಳು ತಲೆಕೆಳಗಾಗಿಸಿದರು. ಆರಂಭಿಕ ಆಟಗಾರ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 97 ರನ್ ಸಿಡಿಸಿ ಶತಕದ ಅಂಚಿನಲ್ಲಿ ಎಡವಿದರು. ಇವರ ವಿಕೆಟ್ ಬಳಿಕ ಕ್ರಿಸ್ಗೆ ಬಂದ ಧ್ರುವ್ ಜುರೆಲ್ 21 ಎಸೆತಗಳಲ್ಲಿ 50 ರನ್ ಬಾರಿಸಿದರು. ಮಧ್ಯಮ ಕ್ರಮಾಂಕದ ಉಳಿದ ಬ್ಯಾಟರ್‌ಗಳಿಂದ ನಿರೀಕ್ಷಿತ ಬೆಂಬಲ ಸಿಗದಿದ್ದರೂ, ರಾಜಸ್ಥಾನ್ ರಾಯಲ್ಸ್ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 243 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು.
ಬೃಹತ್ ಗುರಿ ಬೆನ್ನಟ್ಟಿದ ಸನ್‌ರೈಸರ್ಸ್ ಹೈದರಾಬಾದ್ ತಂಡಕ್ಕೆ ಜೋಫ್ರಾ ಆರ್ಚರ್ ಆರಂಭಿಕ ಆಘಾತ ನೀಡಿದರು. ಹೈದರಾಬಾದ್ ತಂಡದ ಪ್ರಮುಖ ಟಾಪ್ ಆರ್ಡರ್ ಬ್ಯಾಟರ್‌ಗಳಾದ ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್ ಮತ್ತು ಇಶಾನ್ ಕಿಶನ್ ವಿಕೆಟ್ ಉರುಳಿಸುವ ಮೂಲಕ ಆರ್ಚರ್ ರನ್ ವೇಗಕ್ಕೆ ಬ್ರೇಕ್ ಹಾಕಿದರು. ಆರಂಭಿಕ ಆಘಾತದಿಂದ ಚೇತರಿಸಿಕೊಳ್ಳಲು ಪ್ಯಾಟ್ ಕಮಿನ್ಸ್ ನೇತೃತ್ವದ ಹೈದರಾಬಾದ್ ತಂಡಕ್ಕೆ ಸಾಧ್ಯವಾಗಲಿಲ್ಲ. ಕೊನೆಯಲ್ಲಿ ನಿತೀಶ್ ಕುಮಾರ್ ರೆಡ್ಡಿ, ಸಲೀಲ್ ಅರೋರಾ ಮತ್ತು ಶಿವಾಂಗ್ ಕುಮಾರ್ ಕೆಲಹೊತ್ತು ಪ್ರತಿರೋಧ ತೋರಿದರೂ ಗುರಿ ತಲುಪಲಾಗದೆ ಸನ್‌ರೈಸರ್ಸ್ ಹೈದರಾಬಾದ್ 19.2 ಓವರ್‌ಗಳಲ್ಲಿ 196 ರನ್‌ಗಳಿಗೆ ಸರ್ವಪತನ ಕಂಡು ಟೂರ್ನಿಯಿಂದ ಹೊರಬಿದ್ದಿತು.
ಈ ಗೆಲುವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ಮುಂದಿನ ಹಂತಕ್ಕೆ ಲಗ್ಗೆ ಇಟ್ಟರೆ, ಕ್ವಾಲಿಫೈಯರ್-1 ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 92 ರನ್‌ಗಳಿಂದ ಸೋತಿದ್ದ ಗುಜರಾತ್ ಟೈಟನ್ಸ್ ತಂಡವನ್ನು ಕ್ವಾಲಿಫೈಯರ್-2ರಲ್ಲಿ ಎದುರಿಸಲಿದೆ(ಏಜೆನ್ಸೀಸ್).