ವಿಜಯವಾಣಿ ಸುದ್ದಿಜಾಲ ಬೆಂಗಳೂರು
ಕರ್ನಾಟಕ ಒಲಿಂಪಿಕ್ ಸಂಸ್ಥೆ (ಕೆಒಎ) ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 5ನೇ ಮಿನಿ ಕರ್ನಾಟಕ ಕ್ರೀಡಾಕೂಟ ನವೆಂಬರ್ 14ರಿಂದ 21ರವರೆಗೆ ಬೆಂಗಳೂರಿನ ಶ್ರೀ ಕಂಠೀರವ ಸ್ಟೇಡಿಯಂ ಮತ್ತು ವಿವಿಧ ಕ್ರೀಡಾಂಗಣಗಳಲ್ಲಿ ಆಯೋಜನೆಗೊಳ್ಳಲಿದೆ.
ಕರ್ನಾಟಕ ಒಲಿಂಪಿಕ್ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕೆಒಎ ಅಧ್ಯಕ್ಷ ಡಾ. ಕೆ. ಗೋವಿಂದರಾಜ್ ಅವರು ಕ್ರೀಡಾಕೂಟದ ಮಾಹಿತಿಯನ್ನು ವಿವರಿಸಿದರು. 27 ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗುತ್ತಿದೆ. 2020ರಲ್ಲಿ ಮೊದಲ ಬಾರಿಗೆ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. 14 ವಯೋಮಿತಿಯ ಸುಮಾರು 5 ಸಾವಿರ ಕ್ರೀಡಾಪಟುಗಳು ಈ ಬಾರಿ ಕ್ರೀಡಾಕೂಟದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದರು.
ಕ್ರೀಡಾಪಟುಗಳಿಗೆ ಊಟ, ವಸತಿ ಮತ್ತು ಸಾರಿಗೆ ವ್ಯವಸ್ಥೆ ಮಾಡಲಾಗುತ್ತಿದೆ. ಈ ವಯೋಮಿತಿ ಮಕ್ಕಳಿಗೆ ಇಂಥ ಕ್ರೀಡಾಕೂಟ ಆಯೋಜಿಸುವ ಮೂಲಕ ತಯಾರು ಮಾಡಿದಾಗ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಈ ಕ್ರೀಡಾಪಟುಗಳನ್ನು ಬೆಳೆಸುವುದಕ್ಕೆ ನಾಂದಿಯಾಗಲಿದೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ ಎಂ.ಎನ್. ಅನುಚೇತ್, ಕರ್ನಾಟಕ ರಾಜ್ಯದ ವಿವಿಧ ಕ್ರೀಡಾ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.
27 ಕ್ರೀಡೆಗಳಲ್ಲಿ ಸ್ಪರ್ಧೆ
ಮಿನಿ ಕರ್ನಾಟಕ ಕ್ರೀಡಾಕೂಟದಲ್ಲಿ ಒಟ್ಟು 27 ಕ್ರೀಡೆಗಳಲ್ಲಿ ಸ್ಪರ್ಧೆ ನಡೆಯಲಿವೆ. ಅವುಗಳೆಂದರೆ ಅಥ್ಲೆಟಿಕ್ಸ್, ಆರ್ಚರಿ, ಬಾಸ್ಕೆಟ್ಬಾಲ್, ಬ್ಯಾಡ್ಮಿಂಟನ್, ಬಾಕ್ಸಿಂಗ್, ಸೈಕ್ಲಿಂಗ್, ಫೆನ್ಸಿಂಗ್, ಕಯಾಕಿಂಗ್ ಮತ್ತು ಕನೋಯಿಂಗ್, ಗಾಲ್ಫ್, ಫುಟ್ಬಾಲ್, ಜಿಮ್ನಾಸ್ಟಿಕ್ಸ್, ಹ್ಯಾಂಡ್ಬಾಲ್, ಹಾಕಿ, ಜುಡೋ, ಖೋಖೋ, ಕಬಡ್ಡಿ, ಟೆನಿಸ್, ವಾಲಿಬಾಲ್, ನೆಟ್ಬಾಲ್, ಈಜು, ಟೇಬಲ್ ಟೆನಿಸ್, ಟೇಕ್ವಾಂಡೊ, ರೈಡಿಂಗ್, ರೈಲ್ ಶೂಟಿಂಗ್, ಕುಸ್ತಿ, ವುಶು, ವೇಯ್ಟ್ಲಿಫ್ಟಿಂಗ್.
ಒಲಿಂಪಿಕ್ಸ್ನಲ್ಲಿ ರಾಜ್ಯದ ಹೆಚ್ಚಿನ ಪ್ರಾತಿನಿಧ್ಯ ಕನಸು
ಮುಂಬರುವ ದಿನಗಳಲ್ಲಿ ಕರ್ನಾಟಕದಿಂದ ಹೆಚ್ಚಿನ ಕ್ರೀಡಾಪಟುಗಳು ಒಲಿಂಪಿಕ್ಸ್ನಲ್ಲಿ ಪ್ರತಿನಿಧಿಸಬೇಕು ಎಂಬುದೇ ನನ್ನ ಕನಸು. ಇದಕ್ಕೆ ಮಿನಿ ಕರ್ನಾಟಕ ಕ್ರೀಡಾಕೂಟ ಯುವ ಕ್ರೀಡಾಪಟುಗಳ ಪಾಲಿಗೆ ಉತ್ತಮ ವೇದಿಕೆಯಾಗಿದೆ ಎಂದು ಫಿಬಾ ಏಷ್ಯಾ ಅಧ್ಯಕ್ಷರೂ ಆಗಿರುವ ವಿಧಾನ ಪರಿಷತ್ ಸದಸ್ಯ ಕೆ. ಗೋವಿಂದರಾಜ್ ಹೇಳಿದರು. ಯುವ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಸಲುವಾಗಿ ಈ ಮಿನಿ ಕರ್ನಾಟಕ ಕ್ರೀಡಾಕೂಟ ಆರಂಭಿಸಲಾಯಿತು. ಚಿಕ್ಕ ವಯಸ್ಸಿನಲ್ಲೇ ಪ್ರೋತ್ಸಾಹ ನೀಡುವುದು, ಸ್ಪರ್ಧಾತ್ಮಕತೆಗೆ ಒಗ್ಗಿಕೊಳ್ಳಲು ಈ ಕ್ರೀಡಾಕೂಟ ಸಹಕಾರಿಯಾಗುತ್ತದೆ. ಮುಂದಿನ ದಿನಗಳಲ್ಲಿ ಕರ್ನಾಟಕದ ಕ್ರೀಡಾಪಟುಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಇನ್ನಷ್ಟು ಮಿಂಚಬೇಕು ಎಂಬುದು ನನ್ನ ಅಭಿಲಾಷೆ. ಭವಿಷ್ಯದ ತಾರೆಯರ ಅನಾವರಣಕ್ಕೆ ಕೂಡ ಉತ್ತಮ ವೇದಿಕೆಯಾಗಲಿದೆ ಎಂದು ಹೇಳಿದರು.