ನವದೆಹಲಿ: 2025ರ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ಪಾಕಿಸ್ತಾನದ ಆತಿಥ್ಯದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಒಂದಿಲ್ಲೊಂದು ಕಾರಣಕ್ಕೆ ಸದ್ದು ಮಾಡುತ್ತಿದ್ದು, ಪಾಕಿಸ್ತಾನ ಹಾಗೂ ಭಾರತ ನಡುವಿನ ಕಿತ್ತಾಟಕ್ಕೆ ಹೆಚ್ಚು ಸೌಂಡ್ ಮಾಡುತ್ತಿದೆ. ಇದಕ್ಕೆ ಪೂರಕ ಎಂಬಂತೆ ಪಾಕಿಸ್ತಾನದ ಮಾಜಿ ಹಾಗೂ ಹಾಲಿ ಕ್ರಿಕೆಟಿಗರು ನೀಡುತ್ತಿರುವ ಹೇಳಿಕೆ ಉರಿಯುತ್ತಿರುವ ಬೆಂಕಿಗೆ ತುಪ್ಪ ಸುರಿದಂತಾಗಿದ್ದು, ಭಾರತ ಟೂರ್ನಿಯಲ್ಲಿ ಭಾಗುಯಾಗುವ ಬಗ್ಗೆ ಭಾರತ ಸರ್ಕಾರ ಇನ್ನಷ್ಟೇ ನಿರ್ಧರಿಸಬೇಕಿದೆ.
2008ರಲ್ಲಿ ಪಾಕಿಸ್ತಾನದ ನೆಲದಲ್ಲಿ ಕಡೆಯದಾಗಿ ಆಡಿದ ಭಾರತ ತಂಡ ಅದಾದ ಬಳಿಕ ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಬಿಕ್ಕಟ್ಟಿನಿಂದಾಗಿ ಯಾವುದೇ ಕ್ರಿಕೆಟ್ ಪಂದ್ಯಾವಳಿಗಳು ನಡೆದಿಲ್ಲ. ನಡುವಿನ ರಾಜತಾಂತ್ರಿಕ ಬಿಕ್ಕಟ್ಟು ಅನೇಕ ವರ್ಷಗಳಿಂದ ವರ್ಷ ಕಳೆದಂತೆ ಉಲ್ಬಣಗೊಳ್ಳುತ್ತಿದ್ದು, ಎರಡು ದೇಶಗಳು ಐಸಿಸಿ ನಡೆಸುವ ಟೂರ್ನಮೆಂಟ್ಗಳಲ್ಲಿ ಮುಖಾಮುಖಿಯಾಗುತ್ತಿವೆ. ಉಭಯ ದೇಶಗಳ ನಡುವೆ ದ್ವಿಪಕ್ಷೀಯ ಸರಣಿ ನಡೆದು ಬಹಳ ವರ್ಷಗಳಾಗಿದ್ದು, ಪ್ರತಿ ಬಾರಿಯೂ ಈ ಎರಡು ತಂಡಗಳು ಮುಖಾಮುಖಿಯಾದಾಗ ಯುದ್ಧದಂತೆ ಭಾಸವಾಗುತ್ತದೆ. ಆದರೆ, ಭಾರತದ ಆಟಗಾರರನ್ನು ಪಾಕಿಸ್ತಾನಕ್ಕೆ ಕಳುಹಿಸುವ ಕುರಿತು ಸರ್ಕಾರ ನಿರ್ಧರಿಸಲಿದ್ದು, ಸರ್ಕಾರ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧ ಎಂದು ಬಿಸಿಸಿಐ ಈಗಾಗಲೇ ತಿಳಿಸಿದೆ.
ಶ್ರೀಲಂಕಾದ ರಾಜಧಾನಿ ಕೊಲಂಬೊದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ ಭಾಗಿಯಾಗಿದ್ದ ಐಸಿಸಿ ಸದಸ್ಯರೊಬ್ಬರು ಈ ಬಗ್ಗೆ ಮಾತನಾಡಿದ್ದು, ಭಾರತ ಪಾಕಿಸ್ತಾನಕ್ಕೆ ತೆರಳುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿಲ್ಲ. ಇದು ಸಭೆಯ ಅಜೆಂಡಾದಲ್ಲಿ ಇರಲಿಲ್ಲ. ಇದು ದ್ವಿಪಕ್ಷೀಯ ಸರಣಿ ಅಲ್ಲಾ ಎರಡು ದೇಶಗಳ ಕ್ರಿಕೆಟ್ ಮಂಡಳಿ ಕೂತು ನಿರ್ಧರಿಸುವುದಕ್ಕೆ. ಚಾಂಪಿಯನ್ಸ್ ಟ್ರೋಪಿಯಲ್ಲಿ ಭಾರತ ಭಾಗಿಯಾಗುವ ಬಗ್ಗೆ ಬಿಸಿಸಿಐ ಹಾಗೂ ಪಿಸಿಬಿ ನಡುವೆ ಯಾವುದೇ ಮಾತುಕತೆ ನಡೆದಿಲ್ಲ. ಈ ಬಗ್ಗೆ ಐಸಿಸಿ ನಿರ್ಧರಿಸಲಿದ್ದು, ಅದರ ನಿರ್ಧಾರಕ್ಕೆ ಯಾರಾದರೂ ತಲೆಬಾಗಲೇ ಬೇಕಾಗುತ್ತದೆ ಎಂದು ಹೇಳಿದ್ದಾರೆ.
ಸದ್ಯ ಕೇಳಿ ಬಂದಿರುವ ಮಾಹಿತಿ ಪ್ರಕಾರ ಪಿಸಿಬಿಯ ಮನವಿಗೆ ಐಸಿಸಿ ಸ್ಪಂದಿಸಿದ್ದು, ಹೈಬ್ರಿಡ್ ಮಾದರಿಯ ಪಂದ್ಯಗಳಿಗೆ ಐಸಿಸಿ ಅನುಮತಿಸಿಲ್ಲ ಎಂದು ವರದಿಯಾಗಿದೆ. ಈ ವಿಚಾವಾಗಿ ಈಗಾಗಲೇ ಬಿಸಿಸಿಐ ಜೊತೆ ಮಾತುಕತೆ ನಡೆಸಲಾಗಿದ್ದು, ಚವಾಂಪಿಯನ್ಸ್ ಟ್ರೋಫಿ ಆಡಲು ಭಾರತ ಪಾಕಿಸ್ತಾನಕ್ಕೆ ಹೋಗುವುದು ಅನಿವಾರ್ಯವಾಗಿದೆ. ಈ ಬಗ್ಗೆ ಬಿಸಿಸಿಐ ಈಗಾಗಲೇ ಭಅರತ ಸರ್ಕಾರಕ್ಕೆ ಮಾಹಿತಿ ನೀಡಿದ್ದು, ಸರ್ಕಾರ ತೆಗೆದುಕೊಳ್ಳುವ ನಿರ್ಧಾರದ ಮೇಲೆ ಭಾರತ ಚಾಂಪಿಯನ್ಸ್ ಟ್ರೋಪಿ ಆಡುವ ಬಗ್ಗೆ ನಿರ್ಧಾರವಾಗಲಿದೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಅಧಿಕೃತವಾಗಿ ಮಾಹಿತಿ ಹೊರಬೀಳಬೇಕಿದೆ.
ಭಾರತ ತಂಡ ಚಾಂಪಿಯನ್ಸ್ ಟ್ರೋಫಿ ಆಡಲು ಪಾಕಿಸ್ತಾನಕ್ಕೆ ತೆರಳದಿದ್ದರೆ ಆ ದೇಶದ ಕ್ರಿಕೆಟ್ ಮಂಡಳಿಗೆ ಭಾರಿ ನಷ್ಟವಾಗುವ ಸಾಧ್ಯತೆ ಇದೆ. ಈಗಾಗಲೇ ಪಾಕಿಸ್ತಾನ ನಷ್ಟದ ಹಾದಿಯಲ್ಲಿದೆ. ಕ್ರಿಕೆಟ್ನಲ್ಲಿ ಟೀಮ್ ಇಂಡಿಯಾಗೆ ಇರುವ ಕ್ರೇಜ್ ಬೇರೆ ಯಾವ ದೇಶಕ್ಕೂ ಇಲ್ಲ. ಹೀಗಾಗಿ ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ ಹೋದಲ್ಲಿ ಅದರಿಂದ ಆರ್ಥಿಕವಾಗಿಯೂ ಲಾಭವಾಗಲಿದೆ ಮತ್ತು ಪಾಕ್ ಮೇಲೆ ಇರುವ ಕಳಂಕವೂ ದೂರವಾಗಲಿದೆ. ಅಲ್ಲದೆ, ಉಭಯ ದೇಶಗಳ ನಡುವಿನ ಸಂಬಂಧವೂ ಕೂಡ ಮತ್ತೆ ಚಿಗುರಲಿದೆ ಎಂಬ ನಿರೀಕ್ಷೆಯಲ್ಲಿದೆ. ಆದರೆ, ಪಿಸಿಬಿ ನಿರೀಕ್ಷೆಗೆ ಬಿಸಿಸಿಐ ಆಘಾತ ನೀಡಿದ್ದು, ಬಹುತೇಕ ಟೀಮ್ ಇಂಡಿಯಾ ಪಾಕಿಸ್ತಾನ ತೆರಳುವುದು ಅನುಮಾನವಾಗಿದೆ. ಇತ್ತ ಹಸನ್ ಅಲಿ ಹೇಳಿಕೆ ಕೂಡ ಉರಿಯುವ ಬೆಂಕಿಗೆ ತುಪ್ಪ ಸುರಿದಂತಿದೆ.