ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಅಫ್ಘಾನಿಸ್ತಾನ ನಡುವಿನ ಮೂರನೇ ಹಾಗೂ ಸರಣಿಯ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಶತಕ ಬಾರಿಸಿದ್ದು, ಈ ಮೂಲಕ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ದಾಖಲೆಯನ್ನು ಸರಿಗಟ್ಟಿದ್ದಾರೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಭಾರತ ನಾಯಕ ರೋಹಿತ್ ಶರ್ಮಾ (121 ರನ್, 69 ಎಸೆತ, 11 ಬೌಂಡರಿ, 8 ಸಿಕ್ಸರ್), ರಿಂಕು ಸಿಂಗ್ (69 ರನ್, 39 ಎಸೆತ, 2 ಬೌಂಡರಿ, 6 ಸಿಕ್ಸರ್) ಸ್ಫೋಟಕ ಬ್ಯಾಟಿಂಗ್ ಫಲವಾಗಿ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 212 ರನ್ ಗಳಿಸಿತ್ತು.
ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಿ-20 ಕ್ರಿಕೆಟ್ನಲ್ಲಿ ಐದು ಶತಕಗಳನ್ನು ಬಾರಿಸಿದ ದಾಖಲೆ ಬರೆದರು. ಇದಲ್ಲದೆ ವಿರಾಟ್ ಕೊಹ್ಲಿ ಹೆಸರಿನಲ್ಲಿದ್ದ ದಾಖಲೆಯನ್ನು ಸರಿಗಟ್ಟಿದ್ದಾರೆ. ತಂಡದ ನಾಯಕನಾಗಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ರೋಹಿತ್ ಶರ್ಮಾ ಶತಕ ಬಾರಿಸುವ ಮೂಲಕ ತಮ್ಮದಾಗಿಸಿಕೊಂಡಿದ್ದಾರೆ.
ಟೀಂ ಇಂಡಿಯಾ ನಾಯಕನಾಗಿ 54 ಪಂದ್ಯಗಳನ್ನು ಆಡಿರುವ ರೋಹಿತ್ ಶರ್ಮಾ 10 ಅರ್ಧಶತಕ, 2 ಶತಕ ಒಳಗೊಂಡಂತೆ 1573 ರನ್ ಗಳಿಸಿ ಮೊದಲ ಸ್ಥಾನದಲ್ಲಿದ್ದಾರೆ. ತಂಡದ ನಾಯಕನಾಗಿ ವಿರಾಟ್ ಕೊಹ್ಲಿ 50 ಪಂದ್ಯಗಳಲ್ಲಿ 13 ಅರ್ಧಶತಕಗಳನ್ನು ಒಳಗೊಂಡಂತೆ 1570 ರನ್ ಗಳಿಸಿ ಎರಡನೇ ಸ್ಥಾನದಲ್ಲಿದ್ದಾರೆ. 1112 ರನ್ ಬಾರಿಸುವ ಮೂಲಕ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮೂರನೇ ಸ್ಥಾನದಲ್ಲಿದ್ದಾರೆ.
ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ಆರನ್ ಫಿಂಚ್ 2236 ರನ್‌ಗಳೊಂದಿಗೆ ಟಿ20 ಕ್ರಿಕೆಟ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ನಾಯಕರ ಪೈಕಿ ಅಗ್ರಸ್ಥಾನದಲ್ಲಿದ್ದಾರೆ. 2195 ರನ್‌ಗಳನ್ನು ಗಳಿಸುವ ಪಾಕಿಸ್ತಾನದ ಬಾಬರ್ ಅಜಂ ಎರಡನೇ ಸ್ಥಾನದಲ್ಲಿದ್ದಾರೆ. 71 ಪಂದ್ಯಗಳನ್ನು ಆಡಿರುವ ನ್ಯೂಜಿಲೆಂಡ್ನ ಕೇನ್ ವಿಲಿಯಮ್ಸನ್ 2125 ರನ್ ಗಳಿಸುವ ಮೂಲಕ ಮೂರನೇ ಸ್ಥಾನದಲ್ಲಿದ್ದಾರೆ.