ನವದೆಹಲಿ: ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಕದನದಲ್ಲಿ ನಿರೀಕ್ಷೆಯಂತೆ ಟೀಮ್ ಇಂಡಿಯಾ ಜಯ ಸಾಧಿಸಿದ್ದು, ಅಭಿಮಾನಿಗಳಲ್ಲಿ ಡಬಲ್ ಸಂಭ್ರಮ ಮನೆ ಮಾಡಿದೆ. ಮೊದಲನೆಯದಾಗಿ ಪಂದ್ಯವನ್ನು ರೋಹಿತ್ ಪಡೆ ಏಕಪಕ್ಷೀಯವಾಗಿ ಗೆದ್ದುಕೊಂಡರೆ, ಎರಡನೇಯದ್ದು ಚೇಸ್ಮಾಸ್ಟರ್ ಎಂದೇ ಖ್ಯಾತಿ ಪಡೆದಿರುವ ವಿರಾಟ್ ಕೊಹ್ಲಿ ಶತಕ ಸಿಡಿಸುವ ಮೂಲಕ ದಿಗ್ಗಜರ ಹೆಸರಿನಲ್ಲಿದ್ದ ದಾಖಲೆಗಳನ್ನು ತಮ್ಮದಾಗಿಸಿಕೊಂಡಿರುವುದು ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.
ವಾಸ್ತವವಾಗಿ ಭಾರತ ಹಾಗೂ ಪಾಕಿಸ್ತಾನ ನಡುವಿನ ಈ ಹೈವೋಲ್ಟೇಜ್ ಕದನ ನಡೆಯುವುದಕ್ಕೆ ಕೆಲವು ದಿನಗಳ ಮುನ್ನ ಐಐಟಿ ಬಾಬಾ (IIT Baba) ಖಾಸಗಿ ಯುಟ್ಯೂಬ್ ಚಾನೆಲ್ಗೆ ನೀಡಿದ್ದ ಸಂದರ್ಶನದಲ್ಲಿ ಈ ಉಭಯ ತಂಡಗಳ ನಡುವಿನ ಕದನದ ಬಗ್ಗೆ ದೊಡ್ಡ ಭವಿಷ್ಯ ನುಡಿದಿದ್ದರು. ಆ ಭವಿಷ್ಯ ಏನಾಗಿತ್ತು ಅಂದರೆ, ಭಾರತ ಮತ್ತು ಪಾಕಿಸ್ತಾನ ನಡುವಿನ ಶ್ರೇಷ್ಠ ಪಂದ್ಯವನ್ನು ಪಾಕಿಸ್ತಾನ ತಂಡ ಗೆಲ್ಲುತ್ತದೆ. ವಿರಾಟ್ ಕೊಹ್ಲಿ ಮತ್ತು ಇತರ ಆಟಗಾರರು ಎಷ್ಟೇ ಪ್ರಯತ್ನಿಸಿದರೂ ಭಾರತ ಗೆಲ್ಲುವುದಿಲ್ಲ ಎಂದು ಐಐಟಿ ಬಾಬಾ ಹೇಳಿದ್ದರು.