Rohit Sharma : ಒಂದು ವರ್ಷಕ್ಕೂ ಕಡಿಮೆ ಅವಧಿಯಲ್ಲಿ ಭಾರತ ಕ್ರಿಕೆಟ್ ತಂಡ ಮತ್ತೊಂದು ಐಸಿಸಿ ಪ್ರಶಸ್ತಿಯನ್ನು ಗೆದ್ದಿದೆ. ಕಳೆದ ವರ್ಷ ಜೂನ್ ತಿಂಗಳಲ್ಲಿ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ನೆಲದಲ್ಲಿ ಟಿ20 ವಿಶ್ವಕಪ್ ಗೆದ್ದು ಕೊಂಡಿತು. ಇದೀಗ ಐಸಿಸಿ ಚಾಂಪಿಯನ್ಸ್ ಟ್ರೋಫಿಯ ವಿಜೇತರಾಗಿ ಹೊರಹೊಮ್ಮಿದೆ. ದುಬೈನಲ್ಲಿ ಭಾನುವಾರ (ಮಾರ್ಚ್ 09) ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ 4 ವಿಕೆಟ್‌ಗಳಿಂದ ಜಯಗಳಿಸಿದ ಭಾರತ ತಂಡ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದುಕೊಂಡಿದೆ.
ಆದರೆ, ಈ ಮೆಗಾ ಟೂರ್ನಮೆಂಟ್‌ನಲ್ಲಿ ಭಾರತ ತಂಡ ಟ್ರೋಫಿ ಎತ್ತಿಹಿಡಿಯಲು ಪ್ರಮುಖ ಕಾರಣ ಯಾರು? ಕೆಲವರು ಫೈನಲ್‌ನಲ್ಲಿ 76 ರನ್ ಗಳಿಸಿದ ರೋಹಿತ್ ಶರ್ಮ ಎಂದು ಉತ್ತರಿಸುತ್ತಾರೆ. ಇನ್ನು ಕೆಲವರು ಪಾಕಿಸ್ತಾನ ವಿರುದ್ಧ ಶತಕ ಮತ್ತು ಸೆಮಿಸ್‌ನಲ್ಲಿ ಅರ್ಧಶತಕ ಗಳಿಸಿದ ವಿರಾಟ್ ಕೊಹ್ಲಿ ಎಂದು ಹೇಳುತ್ತಾರೆ.
ಇವರಿಬ್ಬರೂ ಅಲ್ಲದಿದ್ದರೆ, ಕೇವಲ ಮೂರು ಪಂದ್ಯಗಳಲ್ಲಿ 9 ವಿಕೆಟ್ ಪಡೆದಿರುವ ನಿಗೂಢ ಸ್ಪಿನ್ನರ್ ವರುಣ್ ಚಕ್ರವರ್ತಿ ಅವರ ಹೆಸರನ್ನು ಆಯ್ಕೆ ಮಾಡುತ್ತಾರೆ. ಆದರೆ, ನಾಯಕ ರೋಹಿತ್ ಶರ್ಮ ಪ್ರಕಾರ, ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಎಲ್ಲರಿಗಿಂತ ಹೆಚ್ಚು ಅದ್ಭುತವಾಗಿ ಆಡಿದರು ಎಂದು ಹೇಳಿದ್ದಾರೆ. ಹಿಟ್‌ಮ್ಯಾನ್, ಅಯ್ಯರ್ ಅವರನ್ನು ಸೈಲೆಂಟ್ ಹೀರೋ ಎಂದು ಹೊಗಳಿದ್ದಾರೆ.
ಹೌದು, ರೋಹಿತ್ ಹೇಳಿಕೆ ನೂರಕ್ಕೆ ನೂರು ಸತ್ಯ. ಏಕೆಂದರೆ, ಈ ಮೆಗಾ ಟೂರ್ನಮೆಂಟ್‌ನಾದ್ಯಂತ ಶ್ರೇಯಸ್ ಅಯ್ಯರ್ ಅದ್ಭುತ ಫಾರ್ಮ್‌ನಲ್ಲಿದ್ದಾರೆ. ಈ ಟೂರ್ನಮೆಂಟ್‌ನಲ್ಲಿ ತಂಡವು ಸಂಕಷ್ಟದಲ್ಲಿದ್ದಾಗಲೆಲ್ಲಾ ಅವರು ಮುಂದೆ ಬಂದು ಉತ್ತಮವಾಗಿ ಆಡಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಅವರು ಭಾರತೀಯ ತಂಡದ ಬೆನ್ನೆಲುಬಾಗಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಅಂತಿಮ ಪಂದ್ಯದಲ್ಲಿಯೂ ಅಯ್ಯರ್ ನಿರ್ಣಾಯಕ ಇನ್ನಿಂಗ್ಸ್ ಆಡಿದರು.
ರೋಹಿತ್ ಶರ್ಮ ಔಟಾದ ನಂತರ, ಅವರು ಅಕ್ಷರ್ ಪಟೇಲ್ ಜೊತೆ ನಾಲ್ಕನೇ ವಿಕೆಟ್‌ಗೆ 61 ರನ್‌ಗಳ ಜತೆಯಾಟ ಆಡಿದರು. ಪಂದ್ಯದ ಗೆಲುವಿನಲ್ಲಿ ಇದು ಪ್ರಮುಖ ಕಾಣಿಕೆಯಾಯಿತು. ಈ ಪಾಲುದಾರಿಕೆ ಬರದೇ ಹೋಗಿದ್ದರೆ, ಪರಿಸ್ಥಿತಿ ಬೇರೆಯೇ ಇರುತ್ತಿತ್ತು. ಒಟ್ಟಾರೆಯಾಗಿ, ಶ್ರೇಯಸ್ 5 ಪಂದ್ಯಗಳಲ್ಲಿ 243 ರನ್ ಗಳಿಸಿದರು. ಅಯ್ಯರ್ ಈ ಪಂದ್ಯಾವಳಿಯಲ್ಲಿ ಭಾರತ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾದರು.
ಶ್ರೇಯಸ್ ಅಯ್ಯರ್ ನಮಗೆ ಸೈಲೆಂಟ್ ಹೀರೋ. ಅವರು ಮಧ್ಯಮ ಕ್ರಮಾಂಕದಲ್ಲಿ ಬಹಳ ಮುಖ್ಯವಾದ ಆಟಗಾರ. ಈ ಪಂದ್ಯದಲ್ಲಿ ನಾನು ಔಟಾದ ನಂತರ, ಅಯ್ಯರ್ ಅದ್ಭುತ ಇನ್ನಿಂಗ್ಸ್ ಆಡಿದರು. ಅವರು ಅಕ್ಷರ್ ಜೊತೆ ಜತೆಯಾಟವನ್ನು ರೂಪಿಸಿದರು. ಅವರು ಪ್ರತಿ ಪಂದ್ಯದಲ್ಲೂ ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು. ಅವರು ಒತ್ತಡದಲ್ಲಿ ಇನ್ನೂ ಉತ್ತಮವಾಗಿ ಆಡುತ್ತಾರೆ ಎಂದು ಪಂದ್ಯದ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ರೋಹಿತ್ ಶರ್ಮ ಹೇಳಿದರು.
ಇನ್ನು ಪಂದ್ಯದ ವಿಚಾರಕ್ಕೆ ಬರುವುದಾದರೆ, ಎಂಟು ವರ್ಷಗಳ ಬಳಿಕ ಪುನರಾರಂಭಗೊಂಡ ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಟೂರ್ನಿಯಲ್ಲಿ ಭಾರತ ತಂಡ ಅಜೇಯವಾಗಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ನಾಯಕ ರೋಹಿತ್ ಶರ್ಮ (76 ರನ್, 83 ಎಸೆತ, 7 ಬೌಂಡರಿ, 3 ಸಿಕ್ಸರ್) ಬಿರುಸಿನ ಆಟ ಹಾಗೂ ನಾಲ್ವರು ಸ್ಪಿನ್ನರ್‌ಗಳ ಬಿಗಿ ಬೌಲಿಂಗ್ ದಾಳಿಯ ನೆರವಿನಿಂದ ಭಾರತ ತಂಡ ಫೈನಲ್‌ನಲ್ಲಿ ನ್ಯೂಜಿಲೆಂಡ್ ಎದುರು 4 ವಿಕೆಟ್‌ಗಳ ರೋಚಕ ಗೆಲುವು ಒಲಿಸಿಕೊಂಡಿದೆ. ಇದರೊಂದಿಗೆ ರೋಹಿತ್ ಶರ್ಮ ಸಾರಥ್ಯದಲ್ಲಿ 12 ವರ್ಷಗಳ ಬಳಿಕ ಭಾರತ ತಂಡ ‘ಮಿನಿ ವಿಶ್ವಕಪ್’ ಗೆದ್ದುಕೊಂಡಿದೆ. ಒಟ್ಟಾರೆ ಮೂರನೇ ಬಾರಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ, ಈ ಸಾಧನೆ ಮಾಡಿದ ಮೊದಲ ತಂಡ ಎಂಬ ಹೆಗ್ಗಳಿಕೆಗೂ ಪಾತ್ರವಾಗಿದೆ. ಮುಖ್ಯ ಕೋಚ್ ಗೌತಮ್ ಗಂಭೀರ್ ಹಾಗೂ ರೋಹಿತ್ ಶರ್ಮ ಕಾಂಬಿನೇಷನ್‌ನಲ್ಲಿ ಗೆದ್ದ ಮೊದಲ ಐಸಿಸಿ ಟೂರ್ನಿ ಇದಾಗಿದೆ.
ದುಬೈ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪ್ರಶಸ್ತಿ ಕಾದಾಟದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಭಾರತೀಯ ಸ್ಪಿನ್ನರ್‌ಗಳ ಕಡಿವಾಣದ ನಡುವೆ ಬ್ಯಾಟರ್ ಡೆರಿಲ್ ಮಿಚೆಲ್ (63 ರನ್, 101 ಎಸೆತ, 3 ಬೌಂಡರಿ) ಹಾಗೂ ಮಿಚೆಲ್ ಬ್ರೇಸ್‌ವೆಲ್ (53* ರನ್, 40 ಎಸೆತ, 3 ಬೌಂಡರಿ, 2 ಸಿಕ್ಸರ್) ಅರ್ಧಶತಕಗಳ ನೆರವಿನಿಂದ ನ್ಯೂಜಿಲೆಂಡ್ 7 ವಿಕೆಟ್‌ಗೆ 251 ರನ್‌ಗಳ ಪೈಪೋಟಿಯುತ ಮೊತ್ತ ಕಲೆಹಾಕಿತು. ಪ್ರತಿಯಾಗಿ ರೋಹಿತ್ ಶರ್ಮ ಹಾಗೂ ಶುಭಮಾನ್ ಗಿಲ್ (31) ಒದಗಿಸಿದ ಬಿರುಸಿನ ಆರಂಭದ ನಡುವೆಯೂ 17 ರನ್‌ಗಳ ಅಂತರದಲ್ಲಿ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆಗ ಶ್ರೇಯಸ್ ಅಯ್ಯರ್ (48 ರನ್, 62 ಎಸೆತ, 2 ಬೌಂಡರಿ, 2 ಸಿಕ್ಸರ್) ಹಾಗೂ ಆಲ್ರೌಂಡರ್ ಅಕ್ಷರ್ ಪಟೇಲ್ (29) ಚೇಸಿಂಗ್ ಜೀವಂತವಿಟ್ಟರು. ಕೊನೆಯಲ್ಲಿ ಕನ್ನಡಿಗ ಕೆಎಲ್ ರಾಹುಲ್ (34* ರನ್, 33 ಎಸೆತ, 1 ಬೌಂಡರಿ, 1 ಸಿಕ್ಸರ್) ಉಪಯುಕ್ತ ಆಟದ ನೆರವಿನಿಂದ 49 ಓವರ್‌ಗಳಲ್ಲಿ 6 ವಿಕೆಟ್‌ಗೆ 254 ಭಾರತಕ್ಕೆ ಗೆಲುವು ತಂದುಕೊಟ್ಟರು. ಕೊನೆಯವರೆಗೂ ಪಂದ್ಯದಲ್ಲಿ ಹೋರಾಡಿದ ನ್ಯೂಜಿಲೆಂಡ್ ರನ್ನರ್ ಅಪ್‌ಗೆ ಸಮಾಧಾನ ಕಂಡಿದೆ.
ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದ ಭಾರತ ತಂಡ 2.24 ಮಿಲಿಯನ್ ಅಮೆರಿಕನ್ ಡಾಲರ್‌ಗಳನ್ನು ಬಹುಮಾನದ ಹಣವಾಗಿ ಪಡೆಯಲಿದೆ. ಇದು ಭಾರತೀಯ ಕರೆನ್ಸಿಯಲ್ಲಿ 19.52 ಕೋಟಿ ರೂಪಾಯಿ. ರನ್ನರ್ ಅಪ್ ತಂಡವು 1.12 ಮಿಲಿಯನ್ ಡಾಲರ್‌ಗಳನ್ನು ಪಡೆಯಲಿದೆ. ಇದು ಭಾರತೀಯ ಕರೆನ್ಸಿಯಲ್ಲಿ 9.76 ಕೋಟಿ ರೂಪಾಯಿ. ಸೆಮಿಫೈನಲ್‌ನಲ್ಲಿ ಸೋತ ಪ್ರತಿ ತಂಡವು 4.88 ಕೋಟಿ ರೂ. ಪಡೆಯಲಿದೆ. ಐದನೇ ಮತ್ತು ಆರನೇ ಸ್ಥಾನ ಪಡೆದ ತಂಡಗಳು ತಲಾ 3.05 ಕೋಟಿ ರೂ. ಮತ್ತು ಏಳನೇ ಮತ್ತು ಎಂಟನೇ ಸ್ಥಾನ ಪಡೆದ ತಂಡಗಳು 1.22 ಕೋಟಿ ರೂ. ಪಡೆಯಲಿವೆ. (ಏಜೆನ್ಸೀಸ್)