ಸಚಿವ ಸ್ಥಾನ ಕೇಳಲ್ಲ, ಕೊಟ್ಟರೆ ಯಶಸ್ವಿಯಾಗಿ ನಿಭಾಯಿಸುತ್ತೇನೆ: ಅನಿತಾ ಕುಮಾರಸ್ವಾಮಿ

ಬೆಂಗಳೂರು: ಸಚಿವ ಸ್ಥಾನ ಕೊಡಿ ಎಂದು ನಾನು ಕೇಳುವುದಿಲ್ಲ. ಆದರೆ, ಸಚಿವ ಸ್ಥಾನ ಕೊಟ್ಟರೆ ಯಶಸ್ವಿಯಾಗಿ ನಿಭಾಯಿಸುತ್ತೇನೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ.

ಮಧ್ಯಾಹ್ನ 3 ಗಂಟೆ ಸುಮಾರಿಗೆ ಸ್ಪೀಕರ್​ ಅವರಿಂದ ಶಾಸಕಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮಾತನಾಡಿ, ನನ್ನನ್ನು ಆಯ್ಕೆ ಮಾಡಿದ ರಾಮನಗರ ಕ್ಷೇತ್ರದ ಜನರಿಗೆ ಧನ್ಯವಾದವನ್ನು ಸಲ್ಲಿಸುತ್ತೇನೆ. ರಾಮನಗರಕ್ಕೆ ನಾನೇ ಮೊದಲ ಮಹಿಳಾ ಶಾಸಕಿ. ನನ್ನ ಪತಿ ಕುಮಾರಸ್ವಾಮಿ ಮುಖ್ಯಮಂತ್ರಿ ಆಗಿದ್ದಾರೆ. ರಾಮನಗರ ಕ್ಷೇತ್ರದ ಅಭಿವೃದ್ಧಿಗೆ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಅನಿತಾ ಕುಮಾರಸ್ವಾಮಿ ಅವರು ಬೊಕ್ಕೆ ಕೊಟ್ಟು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಧನ್ಯವಾದ ತಿಳಿಸಿದರು. ಈ ವೇಳೆ ಶಾಸಕ ಗೋಪಾಲಯ್ಯ ಇದ್ದರು.

ರಾಮನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಅನಿತಾ ಕುಮಾರಸ್ವಾಮಿ ಜಯಗಳಿಸಿದ್ದರು. (ದಿಗ್ವಿಜಯ ನ್ಯೂಸ್)