

ಬೆಂಗಳೂರು: ನಗರದ ಪ್ರತಿಷ್ಠಿತ ಗಾಳಿ ಆಂಜನೇಯಸ್ವಾಮಿ ದೇವಾಲಯವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿದೆ.
ಸರ್ಕಾರದ ಆದೇಶ ರದ್ದು ಕೋರಿ ಗಾಳಿ ಆಂಜನೇಯ ಸ್ವಾಮಿ ದೇವಾಲಯ ಸಮನ್ವಯಾಧಿಕಾರಿ ಹಾಗೂ ಆಡಳಿತ ಮಂಡಳಿ ಸೇರಿ ಮತ್ತಿತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸುನಿಲ್ ದತ್ತ ಯಾದವ್ ಅವರ ಪೀಠ ನಡೆಸಿತು.
ದೇವಸ್ಥಾನದಲ್ಲಿ ಹಣ ದುರುಪಯೋಗ ಮಾಡಿಕೊಳ್ಳಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದರ ಬೆನ್ನಲ್ಲೇ ಮುಜರಾಯಿ ಇಲಾಖೆ ದೇಗುಲವನ್ನು ತನ್ನ ಸುಪರ್ದಿಗೆ ಪಡೆದಿದೆ. ಹೀಗಾಗಿ ಸರ್ಕಾರದ ಕ್ರಮ ಮೇಲ್ನೋಟಕ್ಕೆ ತಪ್ಪೆನ್ನಲಾಗದು ಎಂದು ನ್ಯಾಯಪೀಠ ಹೇಳಿದೆ.
ಪ್ರಕರಣ ಸಂಬಂಧ ಈ ಹಿಂದೆ ನಡೆದ ವಿಚಾರಣೆ ವೇಳೆ ದೇವಾಲಯದ ಆಡಳಿತ ಮಂಡಳಿ ಪರ ವಕೀಲರು, ದೇವಾಲಯವನ್ನು ತನ್ನ ಸುಪರ್ದಿಗೆ ಪಡೆದು ಸರ್ಕಾರ ತರಾತುರಿಯಲ್ಲಿ ಆದೇಶಿಸಿದೆ.
ಆದೇಶ ಹೊರಡಿಸುವುದಕ್ಕೂ ಮುನ್ನ ಅರ್ಜಿದಾರರ ಅಹವಾಲು ಆಲಿಸಿಲ್ಲ. ಮೇಲಾಗಿ ರಜಾ ದಿನವಾದ ಎರಡನೇ ಶನಿವಾರದಂದು ಆದೇಶವನ್ನು ಕಾರ್ಯಚರಣೆಗೆ ತರಲಾಗಿದೆ. ದೇವಾಲಯದ ಬಗ್ಗೆ ಸರ್ಕಾರ ಮಾಡಿರುವ ಎ್ಲ ಆರೋಪಗಳು ಸತ್ಯಕ್ಕೆ ದೂರವಾಗಿದೆ ಎಂದಿದ್ದರು. ದೇವಾಲಯದ ಆಡಳಿತ ಮಂಡಳಿಯಲ್ಲಿ 11 ಟ್ರಸ್ಟಿಗಳಿದ್ದು, ಅದರಲ್ಲಿ ಯಾರೋ ಒಬ್ಬರು ಮಾಡಿದ ತಪ್ಪಿಗೆ ಇಡೀ ಟ್ರಸ್ಟ್ ಮೇಲೆ ಆರೋಪಿಸುವುದಕ್ಕೆ ಅವಕಾಶವಿಲ್ಲ. ಅಲ್ಲದೆ, ವಿವೇಚನಾರಹಿತವಾಗಿ ಸರ್ಕಾರ ಆದೇಶ ಮಾಡಿದ್ದು, ಅರ್ಜಿ ಇತ್ಯರ್ಥವಾಗುವರೆಗೆ ದೇವಾಲಯವನ್ನು ಮುಜರಾಯಿ ಇಲಾಖೆಯ ಸುಪರ್ದಿಗೆ ಪಡೆದ ಆದೇಶಕ್ಕೆ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಮಾಡಬೇಕು ಎಂದು ಕೋರಿದ್ದರು.