ರಾಜಕೀಯ ಕಾರಣಕ್ಕಾಗಿ ಈ ಥರ ಡಬ್ಬಲ್ ಗೇಮ್ ಆಡಬಹುದಾ? ಉಲ್ಟಾ ಹೊಡೆಯಬಹುದಾ? : ಬೊಮ್ಮಾಯಿಗೆ ಸಿಎಂ ಖಡಕ್​ ಪ್ರಶ್ನೆ | CM Siddaramaiah

CM Siddramaiah
Published on

ಹುಬ್ಬಳ್ಳಿ: ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ಇಂಚಿಂಚು ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು. ಈಗ ರಾಜಕೀಯ ಕಾರಣಕ್ಕಾಗಿ ವಿರುದ್ಧವಾಗಿ ಮಾತನಾಡುತ್ತಾರೆ, ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಉದ್ದೇಶದಿಂದ ಉಲ್ಟಾ ಹೊಡೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah )ವ್ಯಾಪಕವಾಗಿ ಟೀಕಿಸಿದರು.

ಹುಬ್ಬಳ್ಳಿಯಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದರು.ಬಿಜೆಪಿ ರಾಜಕಾರಣಕ್ಕಾಗಿ ಈ ವಿಚಾರವನ್ನು ಇಟ್ಟುಕೊಂಡು ಹೋರಾಡುತ್ತಿದ್ದಾರೆ. ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನೋಟಿಸ್​ ಕೊಟ್ಟಿದ್ದಾರೆ, ಎಲ್ಲಾ ಕಾಲದಲ್ಲಿಯೂ ಈ ನೋಟಿಸ್​ ನೀಡಲಾಗಿದೆ ಎಂದು ಜನರಿಗೆ ಅರ್ಥವಾಗಿದೆ ಎಂದು ನುಡಿದರು.

ನಾನು ಮತ್ತು ಸಚಿವವಾದ ಎಚ್.ಕೆ ಪಾಟೀಲ್, ಕೃಷ್ಣ ಬೈರೇಗೌಡ ಅವರೊಂದಿಗೆ ಸಭೆ ನಡೆಸಿ ಯಾವುದೇ ನೋಟೀಸು ನೀಡಿದ್ದಲ್ಲಿ, ಅದನ್ನು ವಾಪಸ್ಸು ಪಡೆಯಬೇಕು ಅಥವಾ ವಿಚಾರಣೆ ಇಲ್ಲದೆಯೇ ಯಾವುದಾದರೂ ಪಹಣಿ ದಾಖಲೆ ಬದಲಾವಣೆಯಾಗಿದ್ದರೆ ಅದನ್ನು ರದ್ದು ಮಾಡಬೇಕು. ಯಾವುದೇ ಕಾರಣಕ್ಕೂ ರೈತರನ್ನು ಒಕ್ಕಲೆಬ್ಬಿಸಬಾರದು ಎಂದು ಸ್ಪಷ್ಟ ನಿರ್ದೇಶನ ನೀಡಿದ್ದಾಗಿದೆ. ಮುಸ್ಲಿಂ, ಹಿಂದು, ಕ್ರಿಶ್ಚಿಯನ್ ಆಗಿರಲಿ, ಒಕ್ಕಲೆಬ್ಬಿಸಬಾರದು ಎಂದು ಬಹಳ ಸ್ಪಷ್ಟವಾಗಿ ಹೇಳಿದ್ದೇನೆ ಎಂದರು.

ವಕ್ಫ್ ಆಸ್ತಿ ವಿಚಾರ ನಮಗೆ ಗೊತ್ತಾದ ತಕ್ಷಣವೇ ನೋಟೀಸು ಹಿಂಪಡೆಯಲಾಗಿದೆ. ಬಿಜೆಪಿ ಅವಧಿಯಲ್ಲಿ 216 ಪ್ರಕರಣಗಳಲ್ಲಿ ನೋಟೀಸು ಕೊಟ್ಟಿದ್ದರು. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಎಚ್.ಡಿ ಕುಮಾಸ್ವಾಮಿ ಇದ್ದಾಗ ಏಕೆ ನೋಟಿಸ್​ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ ಬಿಜೆಪಿಯ ಈ ಡಬ್ಬಲ್ ಗೇಮ್ ವಿಚಾರವನ್ನು ಜನರಿಗೆ ನಾವು ತಲುಪಿಸುತ್ತಿದ್ದೇವೆ ಎಂದು ತಿಳಿಸಿದರು.

ಕರ್ನಾಟಕಕ್ಕೆ ಅನ್ಯಾಯವಾಗಿರುವ ಬಗ್ಗೆ ಪ್ರಶ್ನಿಸಬೇಕು

ತೆರಿಗೆ ವಿಚಾರದಲ್ಲಿ ಕೇಂದ್ರದಿಂದ ಅನ್ಯಾಯವಾಗುತ್ತಿರುವ ಬಗ್ಗೆ ಮಾತನಾಡಿದ ಸಿಎಂ, 16 ನೇ ಹಣಕಾಸು ಆಯೋಗದವರು ಬೆಂಗಳೂರಿಗೆ ಭೇಟಿ ನೀಡಿದಾಗ 15 ನೇ ಹಣಕಾಸು ಆಯೋಗದಿಂದ ಕರ್ನಾಟಕಕ್ಕೆ ಅನ್ಯಾಯವಾಗಿರುವ ಬಗ್ಗೆ ಗಮನ ಸೆಳೆದಿದ್ದೇವೆ. ಸುಮಾರು 4.50 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಮೊತ್ತವನ್ನು ವರ್ಷಕ್ಕೆ ತೆರಿಗೆ ನೀಡುತ್ತಿದ್ದೇವೆ. ಅದರಲ್ಲಿ ನಮಗೆ ವಾಪಸ್ಸು ಬರುವುದು 55 ರಿಂದ 60 ಸಾವಿರ ಕೋಟಿ ರೂಪಯಿಗಳಷ್ಟು ಮಾತ್ರ. ಇದು ನ್ಯಾಯವೇ? ಎಂದು ಪ್ರಶ್ನಿಸಿದರು. ಈ ಬಗ್ಗೆ ನಾವು ನ್ಯಾಯಕ್ಕಾಗಿ ಹೋರಾಡುತ್ತಿದ್ದೇವೆ. ಬಿಜೆಪಿಯ ಪ್ರಹ್ಲಾದ್ ಜೋಶಿ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್ ಅವರು ಈ ಬಗ್ಗೆ ಮಾತನಾಡಿದ್ದಾರೆಯೇ? ಎಂದು ಸಿದ್ರಾಮಯ್ಯ(CM Siddaramaiah) ಖರವಾಗಿ ಪ್ರಶ್ನಿಸಿದರು.

ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದರೆ ಅದು ರಾಜಕೀಯ ಎಂದರು ಇದಕ್ಕೆ ಏನು ಹೇಳಬೇಕು?. ನ್ಯಾಯಾಲಯಕ್ಕೆ ಹೋದರೆ ನ್ಯಾಯ ಸಿಗುತ್ತದೆ ಎಂದು ಭಾವಿಸಿಲ್ಲ, ಏಕೆಂದರೆ 5 ವರ್ಷಕ್ಕೊಮ್ಮೆ ಸಂವಿಧಾನದ ಪ್ರಕಾರ ಹಣಕಾಸಿನ ಆಯೋಗ ರಚನೆಯಾಗುತ್ತದೆ. ಅವರ ಶಿಫಾರಸ್ಸಿನ ಮೇಲೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಹೋಗಬೇಕಾದ ತೆರಿಗೆ ಬಗ್ಗೆ ನಿರ್ಧಾರವಾಗುತ್ತದೆ. 15 ನೇ ಹಣಕಾಸು ಆಯೋಗ ಕೆಲವು ಶಿಫಾರಸ್ಸು ಮಾಡಿದ್ದಾರೆ. 5495 ಕೋಟಿ ರೂಪಾಯಿಗಳನ್ನು ವಿಶೇಷ ಅನುದಾನ ನೀಡಬೇಕೆಂದು ಹೇಳಿದರು. ಪೇರಿಫೆರಲ್ ರಿಂಗ್ ರೋಡ್ ಹಾಗೂ ಕೆರೆಗಳ ಅಭಿವೃದ್ಧಿಗೆ ತಲಾ 3000 ಕೋಟಿ ರೂಪಾಯಿ ನೀಡಲು ಶಿಫಾರಸು ಮಾಡಿದ್ದರು. ಒಟ್ಟು 11495 ಕೋಟಿಗಳನ್ನು ಕೊಟ್ಟರೆ. ಇದನ್ನು ನಾವು ಕೇಳಬೇಕು. ಪ್ರಹ್ಲಾದ ಜೋಶಿಯವರು ಇದನ್ನು ಕೇಂದ್ರದಿಂದ ಕೇಳಬೇಕಲ್ಲವೇ ಎಂದು ಪ್ರಶ್ನಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net