

ನವದೆಹಲಿ: ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ನೀಡಿದ ನಂತರ ತಿಹಾರ್ ಜೈಲಿನಿಂದ ಹೊರಬಂದ ಒಂದು ದಿನದ ಬಳಿಕ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಕನ್ನಾಟ್ ಪ್ಲೇಸ್‌ನಲ್ಲಿರುವ ಹನುಮಾನ್ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.
ಕೇಜ್ರಿವಾಲ್ ಗೆ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಮತ್ತು ಪಂಜಾಬ್ ಸಿಎಂ ಭಗವಂತ್ ಮಾನ್ ಸಾಥ್ ನೀಡಿದರು. ದೇವಾಲಯದಿಂದ ಹೊರನಡೆದ ಬಳಿಕ ಅವರು ರೋಡ್ ಶೋ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
50 ದಿನಗಳನ್ನು ಜೈಲಿನಲ್ಲಿ ಕಳೆದಿರುವ ಸಿಎಂ ಕೇಜ್ರಿವಾಲ್ ರೋಡ್ಶೋಗೂ ಮುನ್ನ ದೆಹಲಿಯ ಆಮ್ ಆದ್ಮಿ ಪಕ್ಷದ (ಎಎಪಿ) ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎನ್ನಲಾಗಿದೆ.
ಜೂನ್ 1 ರವರೆಗೆ ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ನಂತರ, ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಗೆ ಧನ್ಯವಾದ ಸಲ್ಲಿಸಿದರು. ದೇಶವನ್ನು 'ಸರ್ವಾಧಿಕಾರ'ದಿಂದ ರಕ್ಷಿಸಲು 140 ಕೋಟಿ ಭಾರತೀಯರ ಬೆಂಬಲವನ್ನು ಕೋರಿದ್ದರು.