ವಿಜಯಪುರ: ಬಾಲ ಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ ಮತ್ತಿತರ ಸಾಮಾಜಿಕ ಪಿಡುಗುಗಳನ್ನು ಹೊಡೆದೋಡಿಸಲು ಶ್ರಮಿಸೋಣ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.
ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ ಸಂಯುಕ್ತಾಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ‘ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ’ ಉದ್ಘಾಟಿಸಿ ಅವರು ಮಾತನಾಡಿದರು.
ಉತ್ತಮ ಆರೋಗ್ಯ ಹಾಗೂ ಶಿಕ್ಷಣ ಮಕ್ಕಳ ಮೂಲಭೂತ ಹಕ್ಕಾಗಿದೆ. ಇದನ್ನು ಉತ್ತಮಪಡಿಸುವುದರಿಂದ ಸುಭದ್ರ ಸಮಾಜದ ನಿರ್ಮಾಣಕ್ಕೆ ಅಡಿಪಾಯವಾಗುವುದು. ಬಾಲ ಕಾರ್ಮಿಕ ಹಾಗೂ ಬಾಲ್ಯ ವಿವಾಹ ಅನಿಷ್ಟ ಪದ್ಥತಿ ಮುಕ್ತ ಜಿಲ್ಲೆಯನ್ನಾಗಿಸಲು ಹಾಗೂ ಈ ಪಿಡಗುಗಳ ನಿರ್ಮೂಲನೆಗೊಳಿಸಲು ಕಟಿಬದ್ಧರಾಗಿ ಕಾರ್ಯನಿರ್ವಹಿಸಬೇಕು ಎಂದರು.
ಬಾಲಕಾರ್ಮಿಕ ಪದ್ದತಿಯ ನಿರ್ಮೂಲನೆಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳು ಶ್ರಮಿಸುತ್ತಿವೆ. ಮಕ್ಕಳ ಸಹಾಯವಾಣಿ-1098 ಕರೆ ಮಾಡಿ ಮಾಹಿತಿ ನೀಡಿದಲ್ಲಿ ಮಕ್ಕಳ ರಕ್ಷಣೆಯ ಕಾರ್ಯ ಮಾಡಲಾಗುವುದು. ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಶಿಕ್ಷಣವೂ ಸೇರಿದಂತೆ ಮಕ್ಕಳ ರಕ್ಷಣೆಯ ಹಿತ ಕಾಯುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೊಳಿಸಿ ಅನುಷ್ಟಾನಗೊಳಿಸಲಾಗುತ್ತಿವೆ. ಈ ಯೋಜನೆಗಳ ಸದುಪಯೋಗ ಪಡೆದುಕೊಂಡು ತಮ್ಮ ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವ ಮೂಲಕ ಅವರ ಜೀವನ ಹಾಗೂ ಭವಿಷ್ಯ ಸುಂದರಗೊಳಿಸುವ ಮಹತ್ತರ ಹೊಣೆ ಪಾಲಕರ ಮೇಲಿದೆ ಎಂದರು.
ಶಾಲಾ ದಾಖಲಾತಿ ಹೆಚ್ಚಿಸಿ
ಎಲ್ಲ ಮಕ್ಕಳನ್ನು ಶಾಲಾ ದಾಖಲಾತಿ ಮಾಡಿಸುವ ಮೂಲಕ ಶಾಲೆಯಿಂದ ಹೊರಗುಳಿಯುವ ಮಕ್ಕಳ ಶೂನ್ಯಕ್ಕೆ ತರುವ ನಿಟ್ಟಿನಲ್ಲಿ ಯಾವುದೇ ಮಗು ಶಾಲೆಯಿಂದ ಹೊರಗುಳಿಯದಂತೆ ಸಂಬಂಧಿಸಿದ ಇಲಾಖೆಗಳು ನಿಗಾವಹಿಸಬೇಕು. ಶಾಲೆಬಿಟ್ಟ ಮಕ್ಕಳ ಸಮಗ್ರ ಮಾಹಿತಿ ಕ್ರೋಢಿಕರಿಸಬೇಕು. ಯಾವುದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಶಿಕ್ಷಣವನ್ನು ಮೊಟಕುಗೊಳಿಸಬಾರದು. ಬಾಲ ಕಾರ್ಮಿಕ ಪದ್ಧತಿಯಿಂದ ಮಕ್ಕಳ ಭವಿಷ್ಯದ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ತಮ್ಮ ನೆರೆಹೊರೆಯವರಿಗೂ ತಿಳುವಳಿಕೆ ನೀಡಬೇಕು ಎಂದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಅರವಿಂದ ಹಾಗರಗಿ ಮಾತನಾಡಿ, 1986ರಲ್ಲಿ ಬಾಲ ಕಾರ್ಮಿಕ ನಿಷೇಧ ಹಾಗೂ 2016ರಲ್ಲಿ ಬಾಲ ಕಾರ್ಮಿಕ ಹಾಗೂ ಕಿಶೋರ ನಿಷೇಧ ಕಾಯ್ದೆಯೂ ಜಾರಿಗೆ ಬಂದಿದೆ. ಬಾಲ ಕಾರ್ಮಿಕ ಪದ್ಧತಿ ಹೋಗಲಾಡಿಸಲು ಎಲ್ಲರ ಸಹಕಾರ ಅಗತ್ಯ ಎಂದರು.
ಎಎಸ್‌ಪಿ ಶಂಕರ ಮಾರಿಹಾಳ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತಿಯೊಬ್ಬರಿಗೂ ಶಿಕ್ಷಣ ಅವಶ್ಯಕವಾಗಿದೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಬೇಕು. ಯಾವುದೇ ಮಕ್ಕಳು ಶಿಕ್ಷಣದಿಂದ ವಂಚಿತರಾಗದಂತೆ ನೋಡಿಕೊಳ್ಳುವ ಬಹು ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಜಿಲ್ಲಾ ಕಾರ್ಮಿಕ ಇಲಾಖೆಯ ಅಧಿಕಾರಿ ಉಮಾಶ್ರೀ ಎಸ್.ಕೋಳಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಅನೌಪಚಾರಿಕ ಶಿಕ್ಷಣ ಸಂಸ್ಥೆಯ ಫಾದರ್ ಕೆವಿನ್ ಸೆಕ್ವೆರಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ.ಕೆ ಚವಾಣ್, ಡಿಡಿಪಿಐ ಟಿ.ಎಸ್. ಕೋಲಾರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ದೀಪಾಕ್ಷಿ ಜಾನಕಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಬಸಮ್ಮ ಹತ್ತರಕಿ ಮತ್ತಿತರರಿದ್ದರು. ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪ್ರಮಾಣ ವಚನ ಬೋಧಿಸಿದರು.
ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಗೌರವಾನ್ವಿತ ಹರೀಶ ಎ. ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದರು. ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಹಾಗರಗಿ, ಅಪರ ಜಿಲ್ಲಾಧಿಕಾರಿಗಳು ಸೋಮಲಿಂಗ ಗೆಣ್ಣೂರ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಕೆ ಹೊಸಮನಿ ಜಾಥಾದಲ್ಲಿ ಪಾಲ್ಗೊಂಡಿದ್ದರು.