

ಕಡಬ: ಮನೆಯಲ್ಲಿ ಆರೋಗ್ಯಕರ ಪರಿಸರ ಇರಬೇಕು. ಮಾದಕ ಸೇವನೆಮುಕ್ತ ಸಮಾಜ ನಿರ್ಮಾಣಕ್ಕೆ ವಿದ್ಯಾರ್ಥಿಗಳು ಸಂಕಲ್ಪ ಮಾಡಬೇಕು ಎಂದು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ತಾಲೂಕು ಸದಸ್ಯ ಗಿರಿಶಂಕರ ಸುಲಾಯ ಹೇಳಿದರು.
ಕಾಣಿಯೂರು ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ರಾಷ್ಟ್ರೀಯ ಸೇವಾ ಯೋಜನೆ ಸಹಕಾರದಲ್ಲಿ, ಕಾಣಿಯೂರು ಶಾಲೆಯಲ್ಲಿ ನಡೆದ ಮಾದಕ ವಸ್ತು ವಿರೋಧಿ ದಿನಾಚರಣೆ ಅವರು ಮಾತನಾಡಿದರು.
ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷ ಗಣೇಶ್ ಉದನಡ್ಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಭವಿಷ್ಯದ ಉತ್ತಮ ಪ್ರಜೆಗಳಾಗಲು ಹಾಗೂ ಉತ್ತಮ ಸಮಾಜ ನಿರ್ಮಾಣ ಮಾಡಲು ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನಹರಿಸಬೇಕು ಎಂದರು.
ಕಡಬ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಅಧ್ಯಕ್ಷ, ವಕೀಲ ಮಹೇಶ್ ಕೆ.ಸವಣೂರು ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಾಣಿಯೂರು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುರೇಶ್ ಓಡಬಾಯಿ, ಕಾಣಿಯೂರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷ ಕುಸುಮಾಧರ ಅನಿಲ, ಕಾಣಿಯೂರು ಶಾಲೆಯ ಶಿಕ್ಷಕ ಹನುಮಂತ್, ದೈಹಿಕ ಶಿಕ್ಷಣ ಶಿಕ್ಷಕಿ ಲಕ್ಷ್ಮೀ ಕೆ.ಟಿ ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಸವಣೂರು ವಲಯ ಮೇಲ್ವಿಚಾರಕಿ ವೀಣಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಕುಸುಮಾವತಿ ವಂದಿಸಿದರು.