ಎಪಿಎಂಸಿ ಪ್ರಾಂಗಣದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಸೂಚನೆ

udp-13-adc
Published on

ಉಡುಪಿ: ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಾಣದಲ್ಲಿ ರೈತರಿಗೆ ಹಾಗೂ ವರ್ತಕರು ವ್ಯಾಪಾರ ವಹಿವಾಟು ಕೈಗೊಳ್ಳಲು ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಬೇಕೆಂದು ಅಪರ ಜಿಲ್ಲಾಧಿಕಾರಿ ಅಬೀದ್​ ಗದ್ಯಾಳ ಸೂಚನೆ ನೀಡಿದರು.

ಶುಕ್ರವಾರ ಕೃಷಿ ಉತ್ಪನ್ನ ಮಾರುಕಟ್ಟೆ ಕಚೇರಿ ಸಭಾಂಗಣದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಂಸ್ಥೆಯ ಎ.ಪಿ.ಎಂ.ಸಿ ವರ್ತಕರ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರೈತರು ಬೆಳೆದ ಉತ್ಪನ್ನಗಳನ್ನು ಮಾರಾಟ ಚಟುವಟಿಕೆಗಳನ್ನು ಕೈಗೊಳ್ಳಲು ಸರ್ಕಾರ ಕೃಷಿ ಉತ್ಪನ್ನ ಮಾರುಕಟ್ಟೆಯನ್ನು ನಿರ್ಮಿಸಿದೆ. ರೈತರು ಹಾಗೂ ವರ್ತಕರು ತಮ್ಮ ಮಾರಾಟ ಕಾರ್ಯಗಳನ್ನು ಕೈಗೊಳ್ಳಲು ಅಗತ್ಯವಿರುವ ಎಲ್ಲಾ ರೀತಿಯ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕೆಂದರು.

ಕೃಷಿ ಉತ್ಪನ್ನಗಳನ್ನು ಸಂರಕ್ಷಿಸಿ ಇಡಲು ಅನುಕೂಲವಾಗುವಂತೆ ಶೀತಲಗೃಹ ನಿಮಾರ್ಣ, ವೇ ಬ್ರಿಡ್ಜ್​ ಹಾಗೂ ರೈತರಿಗೆ ತಂಗಲು ರೈತಭವನವನ್ನು ನಿರ್ಮಿಸಬೇಕು. ರೈತರಿಗೆ ಕೃಷಿ ಮಾರುಕಟ್ಟೆ ಇಲಾಖೆಯಿಂದ ದೊರೆಯುವ ಯೋಜನೆಗಳು ಹಾಗೂ ಸೌಲಭ್ಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಾಗಾರ ಹಮ್ಮಿಕೊಳ್ಳಬೇಕು ಎಂದರು.

ಮಾರುಕಟ್ಟೆ ಪ್ರಾಂಗಣವನ್ನು ಪ್ಲಾಸ್ಟಿಕ್​ ಮುಕ್ತಗೊಳಿಸುವಂತೆ ವ್ಯಾಪಾರಸ್ಥರು ಸಹಕರಿಸಬೇಕು. ಪ್ರಾಂಗಣದಲ್ಲಿ ಎಲ್ಲಾ ರೀತಿಯ ತ್ಯಾಜ್ಯಗಳನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಲು ಅನುಕೂಲವಾಗುವಂತೆ ವ್ಯಾಪಾರಸ್ಥರು ಕಸಗಳನ್ನು ವಿಂಗಡಣೆ ಮಾಡಿ, ವಿಲೇವಾರಿಗೆ ಮುಂದಾಗಬೇಕು. ತಪ್ಪಿದ್ದಲ್ಲಿ ಅಂತಹ ವ್ಯಾಪಾರಸ್ಥರಿಗೆ ದಂಡ ವಿಧಿಸಲಾಗುವುದು ಎಂದರು. ಸಭೆಯಲ್ಲಿ ಎ.ಪಿ.ಎಂ.ಸಿ ಕಾರ್ಯದರ್ಶಿ ಗಾಯತ್ರಿ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net