ಚುನಾವಣಾ ಆಯೋಗಕ್ಕೆ ವಿಶೇಷ ಮನವಿ: ಜಾರಿಯಾಗುತ್ತಾ ಹೊಸ ಸೂಚನೆ?

ECI
Published on

ಬೆಂಗಳೂರು: ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ರಾಜಕೀಯ ಪಕ್ಷಗಳಿಗೆ ಸೂಚನೆ ನೀಡಬೇಕೆಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಚುನಾವಣಾ ಆಯೋಗಕ್ಕೆ ಪತ್ರ ಬರೆದು ಮನವಿ ಮಾಡಿದೆ.

ರಾಜಕೀಯ ಪಕ್ಷಗಳು ತಮ್ಮ ಚುನಾವಣಾ ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಕೆ ಮಾಡಿಕೊಳ್ಳದಂತೆ ಎಚ್ಚರವಹಿಸಲು ಚೈಲ್ಡ್ ರೈಟ್ಸ್ ಟ್ರಸ್ಟ್, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಮನವಿ ಮಾಡಿತ್ತು. ಈ ಮನವಿಯನ್ನು ಆಯೋಗವು ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿದೆ.

ಚುನಾವಣೆ ದಿನಾಂಕ ಘೋಷಣೆಯಾಗುವ ಮೊದಲೇ ಚುನಾವಣಾ ಪ್ರಚಾರದ ಮೆರವಣಿಗೆಯಲ್ಲಿ ಪಕ್ಷದ ಬಾವುಟ ಹಿಡಿದು ಹೆಚ್ಚು ಜನರು ಭಾಗವಹಿಸುತ್ತಿರುವುದು ಕಂಡು ಬಂದಿದೆ. ಮಕ್ಕಳಿಗೆ ಆಸೆ ತೋರಿಸಿ ರಾಜಕೀಯ ಪಕ್ಷಗಳು ಪ್ರಚಾರ ಕಾರ್ಯದಲ್ಲಿ ತೊಡಗಿಸುವ ಸಾಧ್ಯತೆ ಇರುತ್ತದೆ. ಮಕ್ಕಳಿಗೆ ಪಕ್ಷದ ಚಿಹ್ನೆ ಇರುವ ಬಟ್ಟೆ ನೀಡುವುದು, ಶಾಲಾ ನೋಟ್ ಬುಕ್ ನೀಡುವುದು, ಮೆುರವಣಿಗೆಯಲ್ಲಿ ಮಕ್ಕಳನ್ನು ಸೇರಿಸಿಕೊಳ್ಳುವುದು ನಡೆಯುತ್ತದೆ. ಆದರೆ, ಇದು ಮಕ್ಕಳ ಹಿತದೃಷ್ಟಿಯಿಂದ ಸರಿಯಾದ ಕ್ರಮವಲ್ಲ. ಮಕ್ಕಳಿಗೆ ತಮ್ಮನ್ನು ದುರುಪಯೋಗ ಪಡಿಸಿಕೊಳ್ಳುವುದು ಅವರ ಅರಿವಿಗೆ ಬರುವುದಿಲ್ಲ. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಮಕ್ಕಳು ರಾಜಕೀಯ ಪಕ್ಷಗಳ ಬಗ್ಗೆ ಮಾತಾಡುವ ವೀಡಿಯೋಗಳನ್ನು ಅಪ್‌ಲೋಡ್ ಮಾಡಲಾಗಿತ್ತು. ಇದು ಮಕ್ಕಳ ಹಕ್ಕುಗಳಿಗೆ ವಿರೋಧವಾಗಿದೆ ಎಂದು ಹೇಳಿದೆ.

ಈ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರ ಕಾರ್ಯದಲ್ಲಿ ಯಾವುದೇ ರೀತಿಯಲ್ಲಿ ಮಕ್ಕಳನ್ನು ಬಳಸಿಕೊಳ್ಳದಂತೆ ರಾಜಕೀಯ ಪಕ್ಷದ ಪ್ರಧಾನ ಕಚೇರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು. ಈ ಕುರಿತು ಪ್ರಮಾಣಪತ್ರ ಸಲ್ಲಿಸುವಂತೆಯೇ ರಾಜಕೀಯ ಪಕ್ಷದ ಪ್ರಧಾನ ಕಚೇರಿಗಳಿಗೆ ಅಗತ್ಯ ಸೂಚನೆ ನೀಡಬೇಕು. ಮಕ್ಕಳ ಬಳಕೆ ಮಾಡುವುದು ಕಂಡು ಬಂದಲ್ಲಿ ತಕ್ಷಣ ದೂರು ನೀಡಲು ಸಹಾಯವಾಣಿ ಆರಂಭಿಸಬೇಕೆಂಬ ಸೂಚನೆ ಹೊರಡಿಸುವಂತೆ ಮಕ್ಕಳ ಆಯೋಗ, ಚುನಾವಣಾ ಆಯೋಗದ ಬಳಿ ಮನವಿ ಮಾಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net