ಶೈಕ್ಷಣಿಕ ತರಗತಿ ಆರಂಭಗೊಂಡರೂ ಅತಿಥಿ ಉಪನ್ಯಾಸಕರ ನೇಮಕಕ್ಕೆ ವಿಳಂಭ

Published on

ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಆ.12ರಂದು ಈ ವರ್ಷದ ಶೈಕ್ಷಣಿಕ ತರಗತಿ ಆರಂಭಗೊಂಡರೂ, ಇದುವರೆಗೆ ಅತಿಥಿ ಉಪನ್ಯಾಸಕರನ್ನು ಕರ್ತವ್ಯಕ್ಕೆ ನಿಯೋಜಿಸಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಪಾಠ ಪ್ರವಚನವಿಲ್ಲದೆ ಸಮಸ್ಯೆ ಉಂಟಾಗಿದೆ. ಸರ್ಕಾರ ವಿಳಂಬ ಮಾಡದೇ, ತಕ್ಷಣ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಬೇಕು ಎಂದು ದ.ಕ. ಮತ್ತು ಉಡುಪಿ ಜಿಲ್ಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘದ ದ.ಕ. ಜಿಲ್ಲಾಧ್ಯಕ್ಷ ಮನಮೋಹನ ಬಳ್ಳಡ್ಕ ಹೇಳಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅತಿಥಿ ಉಪನ್ಯಾಸಕರ ನೇಮಕ ಆಗದೇ ಇರುವುದರಿಂದ ವಿದ್ಯಾರ್ಥಿಗಳು ಬಸ್‌ಸ್ಟ್ಯಾಂಡ್, ಫಿಲಂ ಥಿಯೇಟರ್, ಮಾಲ್‌ಗಳಲ್ಲಿ ಅಲೆದಾಡುತ್ತಿದ್ದಾರೆ. ಅತಿಥಿ ಉಪನ್ಯಾಸಕರು ಉದ್ಯೋಗವಿಲ್ಲದೆ, ಇತ್ತ ಕುಟುಂಬವನ್ನೂ ನಿಭಾಯಿಸಲಾಗದೇ ಬೀದಿ ಪಾಲಾಗುತ್ತಿದ್ದಾರೆ. ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಅತಿಥಿ ಉಪನ್ಯಾಸಕರನ್ನು ಮತ್ತೆ ಅದೇ ಕಾಲೇಜಿನಲ್ಲಿ ಮುಂದುವರೆಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದರು.

ಕಳೆದ ಎರಡು ವರ್ಷಗಳಿಂದ ಅತಿಥಿ ಉಪನ್ಯಾಸಕರನ್ನು ಎರಡು ತಿಂಗಳು ವಿಳಂಬವಾಗಿ ಕರ್ತವ್ಯಕ್ಕೆ ನೇಮಕ ಮಾಡಿದ ಕಾರಣ ಸರಿಯಾದ ಸಮಯಕ್ಕೆ ಪಾಠ ಪ್ರಾರಂಭಗೊಳ್ಳದೆ ವಿದ್ಯಾರ್ಥಿಗಳಿಗೆ ತೊಂದರೆಯಾಗಿತ್ತು. ಇದರಿಂದಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿ ಕುಂಠಿತವಾಗಿದೆ. ಇದೀಗ 2024-25ನೇ ಸಾಲಿನಲ್ಲೂ ಹಲವು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಕೊರತೆಯಿಂದ ಕೆಲ ವಿಭಾಗಗಳು ಮುಚ್ಚುವ ಪರಿಸ್ಥಿತಿ ಬಂದಿದೆ. ಇದರಿಂದಾಗಿ ಅನೇಕ ಅತಿಥಿ ಉಪನ್ಯಾಸಕರು ಹುದ್ದೆ ಕಳೆದುಕೊಳ್ಳಲಿದ್ದಾರೆ ಎಂದರು.

ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸಬೇಕು ಎಂದು ಸ್ಪೀಕರ್ ಯು.ಟಿ. ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಾಸಕರಾದ ಅಶೋಕ್‌ಕುಮಾರ್ ರೈ, ಐವನ್ ಡಿಸೋಜ ಅವರಿಗೆ ಮನವಿ ಸಲ್ಲಿಸಲಾಗಿದ್ದು, ಸಕಾರಾತ್ಮಕ ಸ್ಪಂದನೆ ದೊರೆತಿದೆ ಎಂದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 15ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ದಾಖಲಾತಿಗೊಂಡ ವಿಭಾಗಗಳ ವಿದ್ಯಾರ್ಥಿಗಳನ್ನು ಸ್ಥಳೀಯ ಕಾಲೇಜುಗಳಿಗೆ ವರ್ಗಾಯಿಸುವಂತೆ ಆಯಾ ಕಾಲೇಜಿನ ಪ್ರಾಂಶುಪಾಲರಿಗೆ ದ.ಕ. ಕಾಲೇಜು ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ನಿರ್ದೇಶನ ನೀಡಿದ್ದಾರೆ. ಈ ನಿರ್ಧಾರದಿಂದ ಗ್ರಾಮೀಣ ಪ್ರದೇಶದ ಅನೇಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ವಿವಿಧ ವಿಭಾಗಗಳು ಮುಚ್ಚಲಿದ್ದು, ಗ್ರಾಮೀಣ ಬಡ ವಿದ್ಯಾರ್ಥಿಗಳು ಹಾಗೂ ಅತಿಥಿ ಉಪನ್ಯಾಸಕರನ್ನು ಸಂಕಷ್ಟಕ್ಕೀಡುಮಾಡಿದೆ ಎಂದು ಅತಿಥಿ ಉಪನ್ಯಾಸಕರ ಸಂಘದ ದ.ಕ. ಜಿಲ್ಲಾಧ್ಯಕ್ಷ ಮನಮೋಹನ ಬಳ್ಳಡ್ಕ ಆತಂಕ ವ್ಯಕ್ತಪಡಿಸಿದರು.

ಜಂಟಿ ನಿರ್ದೇಶಕರ ಈ ನಿರ್ಧಾರದಿಂದ ಮುಂಬರುವ ವರ್ಷಗಳಲ್ಲಿ ಮತ್ತಷ್ಟು ಕಾಲೇಜುಗಳ ವಿವಿಧ ವಿಭಾಗಗಳು ಮುಚ್ಚಲ್ಪಡಲಿದ್ದು, ಕೆಲ ಕಾಲೇಜುಗಳು ಸಂಪೂರ್ಣ ಮುಚ್ಚಲಿವೆ. ಈ ಅವೈಜ್ಞಾನಿಕ ನಿರ್ಧಾರವನ್ನು ವಾಪಸ್ ಪಡೆಯಬೇಕು ಎಂದು ಅವರು ಒತ್ತಾಯಿಸಿದರು.

ಸಂಘದ ಉಪಾಧ್ಯಕ್ಷೆ ರೇಶ್ಮಾ ಕೆ.ಎಸ್., ಕೋಶಾಕಾರಿ ರಂಜಿತ್ ಪಿ.ಜೆ. ಉಪಸ್ಥಿತರಿದ್ದರು.

------------------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net