ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್​ವೈಗೆ ಸಂಕಷ್ಟ; ಜಾಮೀನು ರಹಿತ ವಾರೆಂಟ್​ ಜಾರಿ ಮಾಡಿದ ಕೋರ್ಟ್​

BS Yediyurappa
Published on

ಬೆಂಗಳೂರು: ಅಪ್ರಾಪ್ತ ವಯಸ್ಕಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಅವರಿಗೆ ಸಂಕಷ್ಟ ಎದುರಾಗಿದ್ದು, ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಲು ವಿಶೇಷ ನ್ಯಾಯಾಲಯ ಗುರುವಾರ ಆದೇಶ ಹೊರಡಿಸಿದೆ.

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಬೆಂಗಳೂರಿನ ಸದಾಶಿವನಗರದ ಪೊಲೀಸ್ ಠಾಣೆಯಲ್ಲಿ ಮಹಿಳೆಯೊಬ್ಬರು ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ರಾಜ್ಯ ಸರ್ಕಾರ ಸಿಐಡಿ ತಂಡವನ್ನು ರಚಿಸಿ ತನಿಖೆಗೆ ಆದೇಶಿಸಿತ್ತು. ಪ್ರಕರಣ ಸಂಬಂಧ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಲಾಗಿತ್ತು. ಇದರ ಬೆನ್ನಲ್ಲೇ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ಕೋರ್ಟ್ ಗುರುವಾರ ಆದೇಶ ಹೊರಡಿಸಿದೆ.

ಪ್ರಕರಣದ ತನಿಖೆಯಲ್ಲಿ ಯಾವುದೇ ಪ್ರಗತಿಯಾಗುತ್ತಿಲ್ಲ ಎಂದು ಆರೋಪಿಸಿ ಸಂತ್ರಸ್ತೆಯ ಅಣ್ಣ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಹಿರಿಯ ವಕೀಲ ಬಾಲನ್ ಅವರ ಮೂಲಕ ರಿಟ್​​ ಅರ್ಜಿ ಸಲ್ಲಿಸಿದ್ದರು. ಪ್ರಕರಣದಲ್ಲಿ ಇದುವರೆಗೆ ಯಾವುದೇ ಪ್ರಗತಿ ಆಗಿಲ್ಲ, ಪಂಚನಾಮೆ, ಸಾಕ್ಷ್ಯ ಸಂಗ್ರಹ ಮಾಡಿಲ್ಲ. ಒಂದು ತಿಂಗಳ ಒಳಗಾಗಿ ವರದಿ ಸಲ್ಲಿಸಲು ಪೊಲೀಸ್ ಆಯುಕ್ತರು ಹಾಗೂ ಸಿಐಡಿ ಇನ್ಸ್‌ಪೆಕ್ಟರ್​​ಗೆ ಸೂಚಿಸಬೇಕು ಎಂದು ಸಂತ್ರಸ್ತೆಯ ಸಹೋದರ ಅರ್ಜಿಯಲ್ಲಿ ಮನವಿ ಮಾಡಿದ್ದರು.

harassment

ಅರ್ಜಿಯನ್ನು ಮಾನ್ಯ ಮಾಡಿದ ನಗರದ 51ನೇ ಸಿವಿಲ್ ಮತ್ತು ಹೆಚ್ಚುವರಿ ಸೆಷನ್ಸ್ ಹಾಗೂ ಪೋಕ್ಸೊ ಪ್ರಕರಣಗಳ ವಿಚಾರಣೆ ನಡೆಸುವ ತ್ವರಿತಗತಿಯ ವಿಶೇಷ ನ್ಯಾಯಾಲಯ-1ರ ನ್ಯಾಯಾಧೀಶ ಎನ್.ಎಂ. ರಮೇಶ್ ಅವರು ಬಂಧನ ವಾರೆಂಟ್ ಹೊರಡಿಸಲು ಆದೇಶಿಸಿದ್ದಾರೆ.

ಇನ್ನು ವಿಚಾರಣೆಗೆ ಕಾಲಾವಕಾಶ ಕೋರಿ ಸಿಐಡಿಗೆ ಬಿಎಸ್ ವೈ ಪತ್ರ ಬರೆದಿದ್ದರು. ಜೂನ್ 17 ನೇ ತಾರೀಖು ವಿಚಾರಣೆಗೆ ಹಾಜರಾಗುವುದಾಗಿ ಪತ್ರದಲ್ಲಿ ತಿಳಿಸಿದ್ದರು. ಪ್ರವಾಸ ನಿಮಿತ್ತ ಹೊರಗಡೆ ಇದ್ದೇನೆ. ಜೂನ್ 17 ನೇ ತಾರೀಖು ಖುದ್ದು ಹಾಜರಾಗ್ತೀನಿ ಎಂದು ಹೇಳಿದ್ದರು. ಇದಲ್ಲದೆ ಪ್ರಕರಣದ ರದ್ದು ಕೋರಿ ಬಿ.ಎಸ್. ಯಡಿಯೂರಪ್ಪ ನ್ಯಾಯಾಲಯದ ಮೆಟ್ಟಿಕಲೇರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net