More

    ನಿಯಮದಂತೆ ಸ್ವಾತಂತ್ರೃ ದಿನಾಚರಣೆ

    ಬೆಳಗಾವಿ : ಮಹಾಮಾರಿ ಕರೊನಾ ವೈರಸ್ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಮುಂಜಾಗ್ರತೆಯಿಂದ ಅಚ್ಚುಕಟ್ಟಾಗಿ ಸ್ವಾತಂತ್ರ್ಯ ದಿನ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.

    ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆ ನಿಮಿತ್ತ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಅಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಗ್ಗೆ 9 ಗಂಟೆಗೆ ಧ್ವಜಾರೋಹಣ ನೆರವೇರಿಸುವರು. ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಯ್ದುಕೊಂಡು ಸಮಾರಂಭದಲ್ಲಿ ಭಾಗವಹಿಸಬೇಕು. ಪ್ರತಿ ವರ್ಷದಂತೆ ಕ್ರೀಡಾಂಗಣದಲ್ಲಿ ಜನಪ್ರತಿನಿಧಿಗಳು, ಗಣ್ಯರು, ಅಧಿಕಾರಿಗಳು, ಸಾರ್ವಜನಿಕರಿಗೆ ವೇದಿಕೆ, ಆಸನ ಮತ್ತಿತರ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.

    ಉಪ ಸಮಿತಿ ಅಧ್ಯಕ್ಷರು ಸಭೆ ನಡೆಸಿ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು. ಕರೊನಾ ಹಿನ್ನೆಲೆಯಲ್ಲಿ ಈ ಬಾರಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅವಕಾಶ ಇಲ್ಲ. ಅದೇ ರೀತಿ ಯಾವುದೇ ಶಾಲಾ ಕಾಲೇಜುಗಳ ತಂಡಗಳಿಗೆ ಪರೇಡ್‌ನಲ್ಲಿ ಭಾಗವಹಿಸಲು ಅವಕಾಶವಿಲ್ಲ. ಪೊಲೀಸ್ ತಂಡ, ಗೃಹರಕ್ಷಕದಳ, ಅಗ್ನಿಶಾಮಕ ದಳ, ಎನ್‌ಸಿಸಿ ಮತ್ತು ಸ್ಕೌಟ್ಸ್ ಕೆಡೆಟ್‌ಗಳು ಮಾತ್ರ ಪರೇಡ್‌ನಲ್ಲಿ ಭಾಗವಹಿಸಲಿದ್ದಾರೆ. 12 ಪ್ಲಟೂನ್‌ಗಳು ಮಾತ್ರ ಪರೇಡ್‌ನಲ್ಲಿ ಪಾಲ್ಗೊಳ್ಳುತ್ತಿದ್ದು, ಸಂಬಂಧಿಸಿದ ಅಧಿಕಾರಿಗಳು ತಯಾರಿ ಮಾಡಿಕೊಳ್ಳಬೇಕು ಎಂದು ಹಿರೇಮಠ ಸೂಚಿಸಿದರು.

    ಕರೊನಾ ಸೇನಾನಿಗಳಿಗೆ ಸತ್ಕಾರ: ವೈದ್ಯರು, ಆಶಾ ಕಾರ್ಯಕರ್ತೆಯರು ಸೇರಿ ಇತರ ಕರೊನಾ ಸೇನಾನಿಗಳಿಗೆ ಹಾಗೂ ಸೋಂಕಿನಿಂದ ಗುಣಮುಖರಾದ 5 ಜನರನ್ನು ಸ್ವಾತಂತ್ರ್ಯೋತ್ಸವ ಸಮಾರಂಭಕ್ಕೆ ಆಹ್ವಾನಿಸಿ, ಅವರನ್ನು ಸತ್ಕರಿಸಲಾಗುವುದು ಎಂದು ಜಿಲ್ಲಾಧಿಕಾರಿ ಹಿರೇಮಠ ತಿಳಿಸಿದರು. ಪ್ರವೇಶದ್ವಾರದಲ್ಲಿ ವೈದ್ಯಕೀಯ ತಂಡಗಳನ್ನು ನಿಯೋಜಿಸಿ ಥರ್ಮಲ್ ಸ್ಕ್ರೀನಿಂಗ್, ಸ್ಯಾನಿಟೈಸರ್ ಹಾಗೂ ಅಗತ್ಯವಿರುವವರಿಗೆ ಮಾಸ್ಕ್ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.

    ಪ್ಲಾಸ್ಟಿಕ್ ಧ್ವಜ ಮಾರಾಟ ನಿಷೇಧ: ಪ್ಲ್ಯಾಸ್ಟಿಕ್ ಧ್ವಜ ಮಾರಾಟ ಮತ್ತು ಬಳಕೆ ನಿಷೇಧಿಸಲಾಗಿದೆ. ಒಂದು ವೇಳೆ ಪ್ಲಾಸ್ಟಿಕ್ ಧ್ವಜ ಬಳಕೆ ಕಂಡು ಬಂದರೆ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹಿರೇಮಠ ಎಚ್ಚರಿಕೆ ನೀಡಿದರು. ಸಮಾರಂಭದಲ್ಲಿ ಭಾಗವಹಿಸುವ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಬಳಸಬೇಕು.

    ಅಂತರ ಕಾಯ್ದುಕೊಂಡು ಸಹಕರಿಸಬೇಕು ಎಂದು ಕೋರಿದರು. ಜಿಪಂ ಅಧ್ಯಕ್ಷೆ ಆಶಾ ಐಹೊಳೆ, ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ ರೆಡ್ಡಿ, ಉಪ ವಿಭಾಗಾಧಿಕಾರಿ ಅಶೋಕ ತೇಲಿ, ಪಾಲಿಕೆ ಆಯುಕ್ತ ಜಗದೀಶ್ ಕೆ.ಎಚ್., ಜಿಲ್ಲಾ ಆರೋಗ್ಯಾಧಿಕಾರಿ ಡಾ. ಎಸ್.ವಿ. ಮುನ್ಯಾಳ ಮತ್ತು ವಿವಿಧ ಗಣ್ಯರು, ಉಪ ಸಮಿತಿಗಳ ಅಧ್ಯಕ್ಷರು, ಸದಸ್ಯರು ಸಭೆಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts