

ಬೆಂಗಳೂರು: ಜಗತ್ತು ಇರುವವರೆಗೂ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನ ಮರೆಯಲು ಸಾಧ್ಯವಿಲ್ಲ(As long as the world exists, Dr. Ambedkar will not be forgotten)ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ(Nikhil Kumaraswamy) ಹೇಳಿದರು.
ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಹುಟ್ಟಿದ ದಿನ(ಏ.14)ದಂದು
ಪ್ರಧಾನಿ ಮೋದಿ ಸಾರ್ವತ್ರಿಕ ರಜೆ ಘೋಷಣೆ ಮಾಡಿದ್ದಾರೆ. ಇದು ಭಾರತೀಯರು ಅತ್ಯಂತ ಸಂತೋಷಪಡುವ ಕ್ಷಣ ಎಂದರು.
ಡಾ.ಬಿ.ಆರ್. ಅಂಬೇಡ್ಕರ್ ಅವರು ವಿಶೇಷವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸಮುದಾಯಗಳನ್ನು ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಎಲ್ಲ ರೀತಿಯಲ್ಲೂ ಸಮಾಜದಲ್ಲಿ ಮೇಲೆತ್ತುವಂತ ಕೆಲಸ ಆಗಬೇಕು ಎಂದು ಸಂವಿಧಾನ ರಚನೆ ಮಾಡಿದ್ದಾರೆ. ಜಗತ್ತು ಇರುವವರೆಗೂ ಕೂಡ ಬಿ.ಆರ್. ಅಂಬೇಡ್ಕರ್ ಅವರನ್ನು ಮರೆಯಲು ಸಾಧ್ಯವಿಲ್ಲ ಎಂದು ತಿಳಿಸಿದರು.
ದೇಶದ ಹಳ್ಳಿ ಹಳ್ಳಿಯಲ್ಲೂ ಪ್ರತಿಯೊಬ್ಬರು ಅಂಬೇಡ್ಕರ್ ಅವರ 134ನೇ ಜನ್ಮದಿನವನ್ನು ಆಚರಿಸಿದ್ದಾರೆ. ಈ ಒಂದು ಶುಭದಿನ, ಶುಭ ಕ್ಷಣ, ಪ್ರತಿ ದಿನ ನೆನೆಸಿಕೊಳ್ಳುವಂತಹ ವ್ಯಕ್ತಿತ್ವ ಡಾ. ಬಿ.ಆರ್.ಅಂಬೇಡ್ಕರ್ ಅವರದ್ದು ಎಂದರು.
ಮಾಜಿ ಪ್ರಧಾನಿ ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರು ಯಾವತ್ತು ಸಹ ಜಾತಿ ಮತ್ತು ಧರ್ಮದ ಆಧಾರದ ಮೇಲೆ ರಾಜಕಾರಣ ಮಾಡಿಲ್ಲ. ಮನುಷ್ಯತ್ವ ಮತ್ತು ಮಾನವೀಯತೆಯ ಆಧಾರದ ಮೇಲೆ ಪಕ್ಷ ಸ್ಥಾಪನೆ ಮಾಡಿದ್ದಾರೆ. ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಆದರ್ಶವಾಗಿ ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.
ವಿಧಾನ ಪರಿಷತ್ ಸದಸ್ಯರಾದ ಟಿ.ಎ. ಶರವಣ, ಜವರಾಯಿ ಗೌಡ, ಮಾಜಿ ಶಾಸಕ ಡಾ. ಕೆ.ಅನ್ನದಾನಿ, ಮಾಜಿ ಎಂಎಲ್ಸಿ ಹಾಗೂ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಚ್.ಎಂ. ರಮೇಶ್ ಗೌಡ, ರಾಜ್ಯ ಮಹಿಳಾ ಜೆಡಿಎಸ್ ಅಧ್ಯಕ್ಷೆ ರಶ್ಮಿ ರಾಮೇಗೌಡ ಮುಂತಾದವರು ಉಪಸ್ಥಿತರಿದ್ದರು.